ಹಾವೇರಿ: ಸಮರ್ಪಕ ನೀರು ಪೂರೈಕೆ ಹಿನ್ನೆಲೆಯಲ್ಲಿ ತುಂಗಾಭದ್ರಾ ನದಿಗೆ ₹150 ಕೋಟಿ ವೆಚ್ಚದಲ್ಲಿ ಬ್ಯಾರೇಜ್ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿ ನಗರಕ್ಕೆ 24*7 ನೀರು ಪೂರೈಕೆ ಹಾಗೂ ಯುಜಿಡಿ ಕಾಮಗಾರಿ ಪೂರ್ಣಗೊಳಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಭರವಸೆ ನೀಡಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರತಿ ವರ್ಷ ನೀರು ಸಂಗ್ರಹಣೆಗೆ ತುಂಗಭದ್ರಾ ನದಿಗೆ ಮರಳಿನ ಚೀಲ ಹಾಕಲಾಗುತ್ತದೆ. ಇದರಿಂದ ವೆಚ್ಚ ಬಹಳವಾಗುತ್ತಿದ್ದು, ಶಾಶ್ವತ ಪರಿಹಾರಕ್ಕೆ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

24*7 ನೀರು ಪೂರೈಕೆ ಕಾಮಗಾರಿ ಕುರಿತು ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿತ್ತು. ಹಾಗಾಗಿ ವಿಳಂಬವಾಗಿತ್ತು. ಈಗ ಕೋರ್ಟ್‌ ಆದೇಶವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಯೋಜನೆಗೆ ವಿಶೇಷ ಅನುದಾನ ₹10 ಕೋಟಿ ಮಂಜೂರು ಮಾಡಿದ್ದರು. ಅಮೃತ 2.0 ಕೆಲಸ ವೇಗವಾಗಿ ನಡೆಯುತ್ತಿದೆ ಎಂದರು.

ಬರಪೀಡಿತ ಜಿಲ್ಲೆಗೆ ಘೋಷಣೆಗೆ ಮನವಿ: ಜಿಲ್ಲೆಯಲ್ಲಿ ಶೇ.54ರಷ್ಟು ಮಳೆ ಕೊರತೆ ಇದೆ. ಈ ಕುರಿತು ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಹಸಿರು ಬರವಿದೆ, ಬೆಳೆ ಹಸಿರಾಗಿದೆ, ಆದರೆ ತೆನೆಕಟ್ಟಿಲ್ಲ. ಇದರಿಂದ ಇಳುವರಿ ಬರುವುದಿಲ್ಲ. ಹಾಗಾಗಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ನದಿಯಲ್ಲಿ ನೀರು ಇರುವುದರಿಂದ ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸುವ ಕೆಲಸ ಮಾಡಲಾಗುತ್ತಿದೆ ಎಂದರು.


ರೈತರ ಅನ್ಯಾಯವಾಗದಂತೆ ಕ್ರಮ: ಸಕ್ಕರೆ ಕಾರ್ಖಾನೆಗಳಲ್ಲಿ ತೂಕದಲ್ಲಿ ಮೋಸವಾಗುತ್ತಿರುವ ಬಗ್ಗೆ, ಬೆಲೆ ಏರಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ಸಂಬಂಧಿಸಿದವರೊಂದಿಗೆ ಸಭೆಮಾಡಿ, ಯಾವುದೇ ರೈತರಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಲಾಗುವುದು ಭರವಸೆ ನೀಡಿದರು.

₹10 ಕೋಟಿಯಲ್ಲಿ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ. ಅದೇ ರೀತಿ ಕ್ರೀಡಾಂಗಣದ ಮುಂದಿನ ಖಾಲಿ ಆವರಣ ಅಭಿವೃದ್ಧಿಗೆ ಒಂದು ಕೋಟಿ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬರುವ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಕ್ರೀಡಾಂಗಣ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ದಲ್ಜಿತ್‌ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಇದ್ದರು.