ಸಾರಾಂಶ
ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ, ಕೈಗೊಳ್ಳಬಹುದಾದ ಕ್ರಮಗಳ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ ಕುರಿತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಸಚಿವ ಕೆ.ಜೆ.ಜಾರ್ಜ್, ಬೇಸಿಗೆ ನಿಭಾಯಿಸಲು ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಮತ್ತು ಅದಕ್ಕೆ ಬೇಕಾದ ಅನುದಾನದ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಈ ಪ್ರಸ್ತಾವನೆಯೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ, ಹೆಚ್ಚುವರಿ ಅನುದಾನ ಕೋರಿ ಮನವಿ ಸಲ್ಲಿಸ ಲಾಗು ವುದು. ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕಳೆದ ವರ್ಷದ ಬೇಸಿಗೆಯಲ್ಲಿ ಕೈಗೊಂಡ ಕಾಮ ಗಾರಿಗಳಿಗೆ ₹3.60 ಕೋಟಿ ಅನುದಾನ ಬಿಡುಗಡೆಯಾಗಬೇಕಿದೆ. ಅದೇ ರೀತಿ ಈ ಬಾರಿ ನಿರ್ವಹಣೆಗೆ ಅನುದಾನ ಬೇಕಾಗಿದೆ. ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಇಲಾಖೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸ ಲಾಗುವುದು ಎಂದು ಸಚಿವರು ತಿಳಿಸಿದರು.
ಕಳೆದ ವರ್ಷ ತೀವ್ರ ಬರಗಾಲವಿದ್ದರೂ ಜಿಲ್ಲೆಯಲ್ಲಿ ಪರಿಸ್ಥಿತಿ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದೇವೆ. ಅದೇ ರೀತಿ ಈ ವರ್ಷವೂ ಬೇಸಿಗೆಯಲ್ಲಿ ಜನರಿಗೆ ಹೆಚ್ಚು ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ನೀರು, ವಿದ್ಯುತ್ ಸೇರಿದಂತೆ ಯಾವುದೇ ರೀತಿ ಸಮಸ್ಯೆ ಬಂದರೂ ಅದನ್ನು ಬಗೆಹರಿಸಲು ಈಗಲೇ ಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದರು.ಪ್ರಸ್ತುತ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ₹6.23 ಕೋಟಿ ಲಭ್ಯವಿದೆ. ತುರ್ತು ಸಂದರ್ಭದಲ್ಲಿ ಈ ಹಣ ಬಳಸಿಕೊಂಡು ಸಮಸ್ಯೆಗೆ ಸ್ಪಂದಿಸಬೇಕು. ಕೆರೆಗಳ ಹೂಳೆತ್ತುವ ಕಾರ್ಯವನ್ನು ವೈಜ್ಞಾನಿಕವಾಗಿ ಕೈಗೊಂಡು ಕೆರೆಗಳನ್ನು ಸಂರಕ್ಷಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಮನ ಹರಿಸಬೇಕು ಎಂದು ಹೇಳಿದರು.
ಜಿಲ್ಲೆಯ ಪರಿಸ್ಥಿತಿ ಕುರಿತು ವಿವರ ನೀಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ತೀವ್ರತರ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿಲ್ಲ. 4 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಕ್ರಮ ವಹಿಸಲಾಗಿದೆ. ಕಳೆದ ಬಾರಿ ಹೆಚ್ಚು ಮಳೆಯಾಗಿದ್ದರಿಂದ ಬಯಲುಸೀಮೆ ಭಾಗಗಳಲ್ಲಿ ಅಂತರ್ಜಲ ಪ್ರಮಾಣ ಏರಿಕೆಯಾಗಿದೆ. ಕೆರೆಗಳನ್ನು ತುಂಬಿಸುವ ಕಾರ್ಯ ಕೈಗೊಳ್ಳಲಾಗಿದ್ದು, ತರೀಕೆರೆ ತಾಲೂಕಿನಲ್ಲಿ ಏತ ನೀರಾವರಿ ಯೋಜನೆ ಮೂಲಕ 79 ಕೆರೆಗಳನ್ನು ತುಂಬಿಸಲಾಗಿದೆ. ಭದ್ರಾ ಜಲಾಶಯ ಭಾಗದಲ್ಲಿ 73 ಕೆರೆಗಳನ್ನು ಭರ್ತಿ ಮಾಡಲಾಗಿದೆ. ಆರೋಗ್ಯ ಸಮಸ್ಯೆ ಉದ್ಭವವಾಗದಂತೆ ಮತ್ತು ಅರಣ್ಯದಲ್ಲಿ ಬೆಂಕಿ ದುರಂತ ಸಂಭವಿಸುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕರಾದ ಟಿ.ಡಿ. ರಾಜೇಗೌಡ, ಜಿ.ಎಚ್. ಶ್ರೀನಿವಾಸ್, ಎಚ್.ಡಿ. ತಮ್ಮಯ್ಯ, ಕೆ.ಎಸ್.ಆನಂದ್, ನಯನಾ ಮೋಟಮ್ಮ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್. ಭೋಜೇಗೌಡ, ಡಾ. ಧನಂಜಯ ಸರ್ಜಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಉಪಸ್ಥಿತರಿದ್ದರು. 11 ಕೆಸಿಕೆಎಂ 3 ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿರುವ ಕೆಸ್ವಾನ್ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಾಗಿದ್ದರು.