ಸಾರಾಂಶ
ಹಾನಗಲ್ಲ: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನಗೆ ಅನುಮತಿ ನೀಡಿರುವುದಕ್ಕೆ ಭಾನುವಾರ ಸಂಜೆ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಚಳವಳಿ ನಡೆಸುವ ಮೂಲಕ ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇಲ್ಲಿನ ರಂಜನಿ ಟಾಕೀಸ್ ವೃತ್ತದಿಂದ ಹಲಗೆ ಬಾರಿಸುತ್ತಾ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಕುರಿಗಳ ಹಿಂಡು ಸಾಥ್ ನೀಡಿದ್ದು ಗಮನ ಸೆಳೆಯಿತು.
ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ ಮಹಾತ್ಮಾ ಗಾಂಧಿ ವೃತ್ತ ತಲುಪಿತು. ಬಳಿಕ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ ಪ್ರತಿಭಟನಾ ಸಭೆ ನಡೆಸಲಾಯಿತು. ಗೋಬ್ಯಾಕ್ ಗೋಬ್ಯಾಕ್ ಗವರ್ನರ್ ಗೋಬ್ಯಾಕ್ ಘೋಷಣೆ ಪ್ರತಿನಿಧಿಸಿತು. ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಾ ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರಿ, ರಾಜಭವನವನ್ನು ಬಿಜೆಪಿ ಕಚೇರಿಯಾಗಿ ಪರಿವರ್ತಿಸುತ್ತಿರುವ ರಾಜ್ಯಪಾಲ ತಾವರಚಂದ ಗೆಹಲೋತ್ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ಪೂರ್ಣ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕುತಂತ್ರವನ್ನು ಕೇಂದ್ರ ಸರ್ಕಾರ ಹೂಡಿದೆ. ರಾಜ್ಯಪಾಲರು ಸಂವಿಧಾನದ ಪ್ರತಿನಿಧಿಯಾಗಿದ್ದರೂ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನಗೆ ಅನುಮತಿ ನೀಡಿರುವ ಇದೇ ರಾಜ್ಯಪಾಲರು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ ನಿರಾಣಿ, ಜನಾರ್ಧನ ರೆಡ್ಡಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನಗೆ ಅನುಮತಿ ಏಕೆ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಒತ್ತಾಯಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಏಳಿಗೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಬಿಜೆಪಿಗೆ ಸಹಿಸಲಾಗುತ್ತಿಲ್ಲ. ನಾಲ್ಕು ದಶಕಗಳ ಸುದೀರ್ಘ ರಾಜಕೀಯ ಇತಿಹಾಸದಲ್ಲಿ ಒಂದೂ ಸಹ ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಕುತಂತ್ರ ಬಿಜೆಪಿಗೆ ಉರುಳಾಗಲಿದೆ ಎಂದು ಕಿಡಿಕಾರಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯಕುಮಾರ ದೊಡ್ಡಮನಿ, ಮಂಜು ಗೊರಣ್ಣನವರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಿವು ಭದ್ರಾವತಿ, ಶಿವು ತಳವಾರ, ಮಂಜಣ್ಣ ನೀಲಗುಂದ ಸೇರಿದಂತೆ ಪುರಸಭೆ ಸದಸ್ಯರು, ಮುಖಂಡರು, ನೂರಾರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರತಿಕ್ರಿಯೆ: ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ. ರಾಜಭವನ ಬಿಜೆಪಿ ಕಚೇರಿಯಾಗಿ ಪರಿವರ್ತನೆಗೊಂಡು ಚುನಾಯಿತ ಸರ್ಕಾರ ಅಸ್ಥಿರಗೊಳಿಸಲೆತ್ನಿಸುತ್ತಿದೆ. ರಾಜಕೀಯ ಪ್ರೇರಿತ ನಿರ್ಧಾರದ ಮೂಲಕ ರಾಜ್ಯಪಾಲರು ಸಂವಿಧಾನದ ಮೌಲ್ಯ ಗಾಳಿಗೆ ತೂರುತ್ತಿದ್ದಾರೆ. ನಾವೆಲ್ಲ ಸಿದ್ದರಾಮಯ್ಯ ಪರವಾಗಿ ನಿಲ್ಲಲಿದ್ದು, ಕಾಂಗ್ರೆಸ್ ಸರ್ಕಾರ ಅಲುಗಾಡಿಸುವುದು ಕನಸಿನ ಮಾತು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.