ಬಾಲಕಾರ್ಮಿಕ, ಕಿಶೋರ ಕಾರ್ಮಿಕರನ್ನು ರಕ್ಷಿಸಿ

| Published : Oct 19 2025, 01:00 AM IST

ಬಾಲಕಾರ್ಮಿಕ, ಕಿಶೋರ ಕಾರ್ಮಿಕರನ್ನು ರಕ್ಷಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕೈಗಾರಿಕೆ ಪ್ರದೇಶಗಳಲ್ಲಿ ಯಾವುದೇ ರೀತಿಯ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡಿದ್ದಲ್ಲಿ ಸಂಬಂಧಪಟ್ಟ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಬೇಕು

ಕೊಪ್ಪಳ: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಅನಿರೀಕ್ಷಿತ ದಾಳಿ, ತಪಾಸಣೆ ಕೈಗೊಂಡು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಕ್ರಿಯಾ ಯೋಜನೆಯ ಅನುಷ್ಠಾನ ಪ್ರಗತಿ ಕುರಿತಂತೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕಾರ್ಯಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ನಗರ ಪ್ರದೇಶಗಳಲ್ಲಿನ ಕಿರಾಣಿ, ಬಟ್ಟೆ ಅಂಗಡಿ, ಹೋಟೆಲ್, ಗ್ಯಾರೇಜ್, ಕೋಳಿ ಫಾರಂ ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳು ಮತ್ತು ಕಾರ್ಖಾನೆ, ಕೈಗಾರಿಕೆ ಪ್ರದೇಶಗಳಲ್ಲಿ ಯಾವುದೇ ರೀತಿಯ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡಿದ್ದಲ್ಲಿ ಸಂಬಂಧಪಟ್ಟ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಬೇಕು. ಈ ಸಂದರ್ಭದಲ್ಲಿ ರಕ್ಷಣೆಯಾದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರಿಗೆ ಸೂಕ್ತ ಪುನರ್ವಸತಿ ಕಲ್ಪಿಸಬೇಕು ಮತ್ತು ಆ ಮಕ್ಕಳನ್ನು ಬಾಲ ಕಾರ್ಮಿಕತೆಗೆ ತಳ್ಳಿದ ಪೋಷಕರಿಗೂ ಸೂಕ್ತ ಸಮಾಲೋಚನೆ ಮೂಲಕ ಮಕ್ಕಳ ಶಿಕ್ಷಣ ಹಾಗೂ ಉತ್ತಮ ಜೀವನ ರೂಪಿಸಲು ಮುಂದಾಗುವಂತೆ ಮನವರಿಕೆ ಮಾಡಿಕೊಡಬೇಕು. ಮಕ್ಕಳ ಪರಿಶೀಲನೆ ಕಾರ್ಯ ಮಾಡುವುದರಿಂದ ಕೂಡ ಮಕ್ಕಳು ಬಾಲಕಾರ್ಮಿಕತೆಗೆ ಒಳಗಾಗುವುದನ್ನು ತಪ್ಪಿಸಬಹುದು ಎಂದರು.

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಎಲ್ಲ ರೀತಿಯ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಆಯಾ ವೃತ್ತದ ಕಾರ್ಮಿಕ ನಿರೀಕ್ಷಕರು ಬಾಲಕಾರ್ಮಿಕ ಯೋಜನಾಧಿಕಾರಿಗಳೊಂದಿಗೆ ನಿಯಮಿತವಾಗಿ ಹೆಚ್ಚಿನ ಪ್ರಮಾಣದಲ್ಲಿ ಬಾಲಕಾರ್ಮಿಕ ತಪಾಸಣೆಗೆ ವಿವಿಧ ಪ್ರದೇಶ, ಕಾರ್ಖಾನೆ, ಮಾರುಕಟ್ಟೆಗಳಿಗೆ ಭೇಟಿ ನೀಡಬೇಕು. ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿವಿಧ ಹಳ್ಳಿಗಳಿಂದ ಕಾರ್ಖಾನೆಗಳಿಗೆ ದುಡಿಯಲು ಬರುವ ಬಡ ಕಾರ್ಮಿಕರು ವಾಸಿಸುವಂತಹ ಸ್ಥಳಗಳಲ್ಲಿ ಹಾಗೂ ವಿಶೇಷವಾಗಿ ಇಟ್ಟಿಗೆ ಭಟ್ಟಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ವಾಸಿಸುವ ಸ್ಥಳಗಳಿಗೆ ಭೇಟಿ ನೀಡಿ, ಅವರ ಮಕ್ಕಳನ್ನು ಅಂಗನವಾಡಿ ಕೇಂದ್ರ ಮತ್ತು ಸಮೀಪದ ಸರ್ಕಾರಿ ಶಾಲೆಗೆ ಸೇರಿಸಬೇಕು. ಅವಶ್ಯವಿದ್ದಲ್ಲಿ ಟೆಂಟ್ ಶಾಲೆ ತೆರೆದು ವಲಸೆ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್.ದರಗದ್ ಮಾತನಾಡಿ, ರಕ್ಷಿಸಲ್ಪಟ್ಟ ಬಾಲಕಾರ್ಮಿಕರನ್ನು ನಿಯಮಾನುಸಾರವಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ ನಂತರದಲ್ಲಿ ಅವರನ್ನು ವಸತಿ ನಿಲಯಗಳಿಗೆ ದಾಖಲಿಸಬೇಕು. ಬಾಲಕಾರ್ಮಿಕರ ಕುಟುಂಬಕ್ಕೆ ಆದಾಯದ ಮೂಲ ಕಂಡುಕೊಳ್ಳುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಯೋಜನೆ ಪರಿಚಯಿಸಿ ಸ್ವಾವಲಂಬನೆಯಿಂದ ಜೀವನ ನಡೆಸಲು ಅವರಿಗೆ ಸರ್ಕಾರದ ಸೌಲಭ್ಯ ಒದಗಿಸಿ ಕೊಡಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದಕ್ಕಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಕಾರ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.

ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಹಾಗೂ ಪುನರ್ವಸತಿ ಸೊಸೈಟಿಯಿಂದ ಅಗತ್ಯ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳಿಂದ ತಪಾಸಣೆ ನಡೆಸಿ ಜಿಲ್ಲೆಯಲ್ಲಿ ಬಾಲಕಾರ್ಮಿಕ, ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ 67 ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಲಾಗಿದ್ದು, 17 ಪ್ರಕರಣ ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದಾಖಲಿಸಲಾಗಿದೆ. ಬಾಲಕಾರ್ಮಿಕರಾಗಿ ಪತ್ತೆಯಾದ 6 ಮಕ್ಕಳಿಗೆ ಮಾಲೀಕರಿಂದ ವಸೂಲಿಯಾದ ದಂಡದ ಮೊತ್ತ ಮತ್ತು ಸರ್ಕಾರದ ವಂತಿಕೆ ಸೇರಿ ಕಾರ್ಪಸ್ ಫಂಡ್ ಮೊತ್ತವನ್ನು ಒಟ್ಟು ₹35,000 ಪ್ರತಿ ಮಗುವಿಗೆ ಜಿಲ್ಲಾಧಿಕಾರಿಗಳು ಹಾಗೂ ಕಾರ್ಮಿಕ ಅಧಿಕಾರಿಗಳ ಮೂಲಕ ಬಾಂಡ್ ಮತ್ತು ಚೆಕ್‌ಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗರ ಮಾತನಾಡಿ, ಸೊಸೈಟಿಗೆ ರಾಜ್ಯದಿಂದ ಬಂದಿರುವ ಸುತ್ತೋಲೆಗಳ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.