ಬಡತನದಿಂಧ ಸಂಕಷ್ಟದಲ್ಲಿರುವ ಮಕ್ಕಳನ್ನು ಸಂರಕ್ಷಿಸಿ

| Published : Jan 10 2025, 12:48 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಬಡತನ ಸೇರಿದಂತೆ ವಿವಿಧ ಕಾರಣಗಳಿಂದ ಸಂಕಷ್ಟದಲ್ಲಿರುವ ಮಕ್ಕಳನ್ನು ಗುರುತಿಸಿ ಸಂರಕ್ಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಬಡತನ ಸೇರಿದಂತೆ ವಿವಿಧ ಕಾರಣಗಳಿಂದ ಸಂಕಷ್ಟದಲ್ಲಿರುವ ಮಕ್ಕಳನ್ನು ಗುರುತಿಸಿ ಸಂರಕ್ಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ತಿಳಿಸಿದರು.

ನಗರದ ಗಾಂಧಿ ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲೆಯಲ್ಲಿದೆ ಶಿಕ್ಷಣ ಜೊತೆಗೆ ರಕ್ಷಣೆ ಎಂಬ ಶಿರ್ಷಿಕೆ ಅಡಿಯಲ್ಲಿ ಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಸಂರಕ್ಷಣೆಗಾಗಿ ಇರುವ 12 ಕಾಯ್ದೆಗಳು ಹಾಗೂ 2 ನೀತಿಗಳು ಸಂಬಂಧಪಟ್ಟ ಅಧಿಕಾರಿಗಳು ಕಾರ್ಯರೂಪಕ್ಕೆ ತರುವ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ತಿಳಿಸಿದರು.ಮಕ್ಕಳ ಮೇಲಾಗುತ್ತಿರುವ ಬಹಳಷ್ಟು ಬೆಳಕಿಗೆ ಬರುತ್ತಿಲ್ಲ. ಹೀಗಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೀದರ್ ದಿಂದ ಚಾಮರಾಜನಗರದ ವರೆಗೆ ಶಾಲೆಯಲ್ಲಿದೆ ಶಿಕ್ಷಣ ಜೊತೆಗೆ ರಕ್ಷಣೆ ಎಂಬ ಶಿರ್ಷಿಕೆ ಅಡಿಯಲ್ಲಿ ಮಕ್ಕಳೊಂದಿಗೆ ಮುಕ್ತ ಸಂವಾದ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದರಿಂದ ಮಕ್ಕಳು ನಿಜವಾಗಿಯೂ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲನೆಗೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು. ಹಲವಾರು ಸಮಸ್ಯೆಗಳಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿರುವ ಆಯೋಗವು ಜಟಿಲವಾದ ಸಮಸ್ಯೆಗಳಿಗೆ ಬಹಳ ಗಂಭೀರವಾಗಿ ಪರಿಗಣಿಸುತ್ತಿದೆ. ನಿಯಮಿತ ಕಾಲದಲ್ಲಿ ಬಗೆಹರಿಸಲು ಅಧಿಕಾರಿಗಳ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಮಕ್ಕಳೊಂದಿಗೆ ಮುಕ್ತ ಸಂವಾದ ಮತ್ತು ಅಹವಾಲು ಕಾರ್ಯಕ್ರಮಕ್ಕೆ ಜಿಲ್ಲೆಯ ಭಾಗದ ಮಕ್ಕಳಿಗೆ ಕರೆತರುವಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪನಿರ್ದೇಶಕರು ವಿಫಲರಾಗಿದ್ದಾರೆ. ಹೀಗಾಗಿ, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲು ವೇದಿಕೆ ಮೇಲಿದ್ದ ಸಹಾಯಕ ಆಯುಕ್ತರಾದ ಗುರುನಾಥ್ ದಡ್ಡಿ ತಿಳಿಸಿದರು.

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಮಾತನಾಡಿ, ಬಾಲ್ಯ ವಿವಾಹ ತಡೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಸದ್ಯ ಜಾರಿಯಲ್ಲಿರುವ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳಿಗೆ ಸಮಸ್ಯೆಯಾಗುತ್ತಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಕಾರ್ಯಾಕ್ಕೆ ಪ್ರತ್ಯೇಕವಾದ ಪೊಲೀಸ್ ಸೆಲ್ ರಚನೆಗಾಗಿ ರಾಜ್ಯ ಸರ್ಕಾರಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಫಾರಸ್ಸು ಮಾಡಬೇಕು ಎಂದು ಮನವಿ ಮಾಡಿದರು.ಜಿಲ್ಲಾಡಳಿತದ ಪರವಾಗಿ ಆಗಮಿಸಿದ ಸಹಾಯಕ ಆಯುಕ್ತ ಗುರುನಾಥ್ ದಡ್ಡಿ ಮಾತನಾಡಿ, ಮಕ್ಕಳು ತಮಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆಸಿದ ಸಂವಾದದ ಪ್ರತಿಯೊಂದು ವಿಷಯದ ಕುರಿತು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಪಂ ಸಿಇಒ ಅವರ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೌಹಾನ್, ವಿಭಾಗೀಯ ನಿಯಂತ್ರಣ ಅಧಿಕಾರಿ ಕರಬರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಸಮ್ಮ ಹತ್ತರಕಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಮೌನೇಶ್ ಪತ್ತಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ಶಾಲೆಗಳಿಂದ ಮಕ್ಕಳು ಆಗಮಿಸಿದರು.