ಸಿಇಟಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಿ: ಡಿಸಿ ಡಾ. ಕೆ.ವಿದ್ಯಾಕುಮಾರಿ

| Published : Apr 12 2024, 01:04 AM IST

ಸಿಇಟಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿ.ಇ.ಟಿ. ಪರೀಕ್ಷೆಯ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಉನ್ನತ ಶಿಕ್ಷಣದ ಪ್ರವೇಶಾತಿಗೆ ಏ.18 ಮತ್ತು 19ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ.)ಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ, ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿ.ಇ.ಟಿ. ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಬಾರಿ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ರೀತಿಯಲ್ಲಿ ಅಂಕ ಬಂದಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಎಲ್ಲ ಶಿಕ್ಷಕರಿಗೂ, ಪ್ರಾಂಶುಪಾಲರಿಗೂ ಹಾಗೂ ಅಧಿಕಾರಿಗಳಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

ಸಿ.ಇ.ಟಿ. ಪರೀಕ್ಷೆಗೆ ಉಡುಪಿಯಲ್ಲಿ 6, ಕಾರ್ಕಳ ಹಾಗೂ ಕುಂದಾಪುರದಲ್ಲಿ ತಲಾ 4 ಹಾಗೂ ಬ್ರಹ್ಮಾವರದಲ್ಲಿ 3 ಸೇರಿದಂತೆ ಒಟ್ಟು 17 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟು 8037 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಮನಸ್ಸು ಸೂಕ್ಷ್ಮವಾಗಿರುತ್ತದೆ. ಅದನ್ನರಿತು ಅವರಿಗೆ ಗೊಂದಲವಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಪರೀಕ್ಷಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಖಜಾನೆಯಲ್ಲಿ ಸಿಇಟಿ ಪ್ರಶ್ನೆಪತ್ರಿಕೆಗಳನ್ನು ಪೊಲೀಸ್ ಭದ್ರತೆಯಲ್ಲಿ ಇಟ್ಟು, ಸಿಸಿ ಕ್ಯಾಮರಗಳ ಮೂಲಕ ನಿಗಾ ವಹಿಸಬೇಕು. ಪರೀಕ್ಷೆ ದಿನ ಪ್ರಶ್ನಾಪತ್ರಿಕೆ ವಿತರಣೆಗೆ ನೇಮಿಸಿರುವ ತಹಸೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಪೊಲೀಸ್ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಿಸಬೇಕು ಎಂದರು.

ಪ್ರತೀ ಪರೀಕ್ಷಾ ಕೇಂದ್ರದ ಕೊಠಡಿಗಳಿಗೆ ಸಿಸಿ ಕ್ಯಾಮರ ಅಳವಡಿಸಬೇಕು, ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡಬೇಕು, ಮುಂಜಾಗ್ರತೆಯಾಗಿ ಎಲ್ಲ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸಬೇಕು. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದವರು ಆದೇಶಿಸಿದರು.

ಸಭೆಯಲ್ಲಿ ಜಿಪಂ ಸಿಲೊಓ ಪ್ರತೀಕ್ ಬಾಯಲ್, ಎಡಿಸಿ ಮಮತಾ ದೇವಿ ಜಿ.ಎಸ್., ಕುಂದಾಪುರ ಎಸಿ ರಶ್ಮಿ ಎಸ್.ಆರ್., ಎಎಸ್ಪಿ ಎಸ್.ಟಿ. ಸಿದ್ಧಲಿಂಗಪ್ಪ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಕಾಲೇಜು ಪ್ರಾಂಶುಪಾಲರು ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯೋದಯ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವೈಭವಿ ಆಚಾರ್ಯ ಮತ್ತು ಪೂರ್ಣಪ್ರಜ್ಞ ಪಪೂ ಕಾಲೇಜಿನ ವಾಣಿಜ್ಯ ವಿಭಾಗದ ಹರ್ಷಿತ್ ಎಸ್. ಅವರನ್ನು ಸನ್ಮಾನಿಸಲಾಯಿತು.

ಪರೀಕ್ಷಾರ್ಥಿಗಳಿಗೆ ಗುರುತು ಚೀಟಿ ಕಡ್ಡಾಯ

ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್‌ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣ ಕೊಂಡೊಯ್ಯುವಂತಿಲ್ಲ. ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದ್ದು, ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರಬೇಕು. ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರಬೇಕು ಎಂದು ಡಿಸಿ ತಿಳಿಸಿದ್ದಾರೆ.