ಮಕ್ಕಳ ರಕ್ಷಣೆ ಹಾಗೂ ಅವರ ಉಜ್ವಲ ಭವಿಷ್ಯ ನಿರ್ಮಾಣ ನಮ್ಮೆಲ್ಲರ ಹೊಣೆಯಾಗಿದೆ. ಪೋಕ್ಸೋ ರೀತಿಯ ಅನೇಕ ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ, ಅಲ್ಲಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ತುಂಬಾ ಕಳವಳಕಾರಿ ಸಂಗತಿ ಎಂದು ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿದರು.
ಕನ್ನಡಪ್ರಭ ವಾರ್ತೆ ಕಲಬುರಗಿಮಕ್ಕಳ ರಕ್ಷಣೆ ಹಾಗೂ ಅವರ ಉಜ್ವಲ ಭವಿಷ್ಯ ನಿರ್ಮಾಣ ನಮ್ಮೆಲ್ಲರ ಹೊಣೆಯಾಗಿದೆ. ಪೋಕ್ಸೋ ರೀತಿಯ ಅನೇಕ ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ, ಅಲ್ಲಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ತುಂಬಾ ಕಳವಳಕಾರಿ ಸಂಗತಿ ಎಂದು ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿದರು.
ಕರುಣೇಶ್ವರ ನಗರದಲ್ಲಿರುವ ವಿವೇಕಾನಂದ ವಿದ್ಯಾನಿಕೇತನ ಶಾಲೆಯಲ್ಲಿ ಬಾಲ್ಯವಿವಾಹ ಮುಕ್ತ ಭಾರತ ಹಾಗೂ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಜಾಗೃತಿ ಅಭಿಯಾನ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಶ್ರೀನಿವಾಸ ನವಲೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.ಪೋಕ್ಸೊ ಕಾಯ್ದೆಯಡಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದ್ದು, ಪ್ರಕರಣಗಳನ್ನು ಒಂದು ವರ್ಷದೊಳಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುತ್ತದೆ. ಮಕ್ಕಳ ಸುರಕ್ಷತೆ ಮತ್ತು ಹಕ್ಕುಗಳ ರಕ್ಷಣೆಯಲ್ಲಿ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಮನೋಹರ್ ಬೆಟ್ ಜೇವರ್ಗಿ ‘ಕಾನೂನಿನಡಿ ಪಡೆದ ದತ್ತು ಜೀವನವಿಡಿ ಸುಖದ ಸಂಪತ್ತು’ ಕುರಿತು ಮಾತನಾಡಿದರು. ಮಕ್ಕಳ ಹಿತಾಸಕ್ತಿ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದತ್ತು ಪ್ರಕ್ರಿಯೆ ನಡೆಯಬೇಕು. ಮಕ್ಕಳನ್ನು ದತ್ತು ಪಡೆಯಲು ಇಚ್ಛಿಸುವವರು ನಿಗದಿತ ಕಾನೂನುಬದ್ಧ ಪ್ರಕ್ರಿಯೆಯನ್ನು ಅನುಸರಿಸಬೇಕು ಎಂದು ಹೇಳಿದರು.ಬಾಲ್ಯವಿವಾಹ ನಿಷೇಧ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಣಾಧಿಕಾರಿಗಳಾದ ಬಸವರಾಜ ಹಾಗೂ ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕರಾದ ಆನಂದರಾಜ್ ತವರದರ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಮಕ್ಕಳ ಸಹಾಯವಾಣಿ ಸಂಯೋಜಕ ಬಸವರಾಜ ತೆಂಗಳಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ಯಲ್ಲೂಬಾಯಿ, ಅಸಂಸ್ಥಿಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಕ್ಷಣಾಧಿಕಾರಿ ಶ್ರೀಮತಿ ಸುಮಂಗಲ ನಾಡಗೇರಿ, ಡಾನ್ ಬಾಸ್ಕೋ ಸಂಸ್ಥೆಯ ಸದಸ್ಯರಾದ ಗೀತಾ ಹಾಗೂ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕಾವ್ಯ ಭಸ್ಮೆ ಸ್ವಾಗತಿಸಿದಳು. ಸಾನ್ವಿ ಕುಲಕರ್ಣಿ ವಂದಿಸಿದಳು. ಸುರಭಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದಳು.