ಮಕ್ಕಳ ಹಕ್ಕುಗಳ ರಕ್ಷಣೆ ಕೇವಲ ಒಂದೇ ಇಲಾಖೆಯ ಜವಾಬ್ದಾರಿಯಾಗದೆ, ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕರ್ತರು ಚುರುಕಾಗಿ ಕಾರ್ಯನಿರ್ವಹಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮಕ್ಕಳ ಹಕ್ಕುಗಳ ರಕ್ಷಣೆ ಕೇವಲ ಒಂದೇ ಇಲಾಖೆಯ ಜವಾಬ್ದಾರಿಯಾಗದೆ, ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕರ್ತರು ಚುರುಕಾಗಿ ಕಾರ್ಯನಿರ್ವಹಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಸೂಚಿಸಿದರು.

ಜಿಲ್ಲಾ ಆಡಳಿತದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾ ಆಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಜಿಲ್ಲೆಯ ಎಂ.ಆರ್.ಡಬ್ಲ್ಯು, ಯು.ಆರ್.ಡಬ್ಲ್ಯು. ಮತ್ತು ವಿ.ಆರ್.ಡಬ್ಲ್ಯು ಕಾರ್ಯಕರ್ತರಿಗಾಗಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳು ಮತ್ತು ಕಾನೂನುಗಳ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಮಕ್ಕಳ ಹಕ್ಕುಗಳ ಉಲ್ಲಂಘನೆ ಅಥವಾ ದೌರ್ಜನ್ಯ ಸಂಭವಿಸಿದಾಗ ಗ್ರಾಮೀಣ ಮಟ್ಟದ ಕಾರ್ಯಕರ್ತರು ಮೊದಲ ಪ್ರತಿಸ್ಪಂದಕರಾಗಿ ಕಾರ್ಯನಿರ್ವಹಿಸಬೇಕೆಂದರು.

ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ಎಂಬ ಸಾಮಾಜಿಕ ಪಿಡುಗು ನಿರ್ಮೂಲನೆಗೊಳಿಸಲು ಗ್ರಾಪಂ ಮಟ್ಟದಲ್ಲಿ ಸಮಿತಿಗಳನ್ನು ಮತ್ತಷ್ಟ್ಟು ಬಲಪಡಿಸುವ ಅಗತ್ಯವಿದೆ. ವಿಕಲಚೇತನ ಮಕ್ಕಳಿಗೆ ಮೀಸಲಾದ ಶೇ.5ರಷ್ಟು ಅನುದಾನದ ಸಮರ್ಪಕ ಬಳಕೆಯ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು ₹25ಸಾವಿರ ವಿಕಲಚೇತನರಿದ್ದು, ಅವರಲ್ಲಿ ಮಕ್ಕಳ ಸಂಖ್ಯೆಯನ್ನು ನಿಖರವಾಗಿ ಗುರುತಿಸುವ ಅಗತ್ಯವಿದೆ. ಅಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಅಂಧ ಮಕ್ಕಳಿಗೆ ಬ್ರೈಲ್ ಶಿಕ್ಷಣ ವ್ಯವಸ್ಥೆ, ದೈಹಿಕ ದೋಷವಿರುವ ಮಕ್ಕಳಿಗೆ ಜನನದ 48 ಗಂಟೆಯೊಳಗೆ ಶಸ್ತ್ರಚಿಕಿತ್ಸೆ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯ ತಲುಪಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಎಸ್ಪಿ ಸಿದ್ದಾರ್ಥ ಗೋಯಲ್ ಮಾತನಾಡಿ, ಮಕ್ಕಳ ವಿರುದ್ಧದ ಅಪರಾಧ ತಡೆಗಟ್ಟಲು ಕೇವಲ ಶಿಕ್ಷೆಯಷ್ಟೇ ಸಾಕಾಗಲ್ಲ. ಅಪರಾಧಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಪೋಕ್ಸೋ ಕಾಯ್ದೆ ಕುರಿತು ಸಮಾಜದಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಅಗತ್ಯವಿದ್ದು, ಈ ಉದ್ದೇಶದಿಂದ ಜಿಲ್ಲೆಯಲ್ಲಿ 800ಕ್ಕೂ ಹೆಚ್ಚು ಶಾಲೆ ಹಾಗೂ ಕಾಲೇಜುಗಳಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಇತರರೊಂದಿಗೆ ಹೋಲಿಸದೆ, ಅವರಲ್ಲಿ ಆತ್ಮವಿಶ್ವಾಸ ಬೆಳೆಸುವತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕೆ., ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಹನುಮಂತಗೌಡ ಪಾಟೀಲ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಗಿರಿಜಾ ಪಾಟೀಲ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ನೂರಾರು ತಾಲೂಕು, ನಗರ ಹಾಗೂ ಗ್ರಾಮ ಪುನರ್ವಸತಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.