ಹೆಣ್ಣು ಮಗು ರಕ್ಷಣೆ ಪ್ರತಿಯೊಬ್ಬರ ಹೊಣೆ: ಡಾ. ರವೀಂದ್ರನಾಥ್

| Published : Jan 29 2025, 01:33 AM IST

ಸಾರಾಂಶ

ಹೆಣ್ಣು ಮಗುವನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆಕನ್ನಡಪ್ರಭ ವಾರ್ತೆ ಕೊಪ್ಪಳ

ಹೆಣ್ಣು ಮಗುವನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ್ ಎಂ.ಎಚ್. ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಬೋಧಕ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಎಂ.ಸಿ.ಎಚ್ ಆಸ್ಪತ್ರೆಯ ಬಾಣಂತಿಯರ ವಾರ್ಡಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಗುವಿನ ಮಹತ್ವದ ಬಗ್ಗೆ, ಸಮಾನತೆ ಮತ್ತು ಹೆಣ್ಣು ಮಕ್ಕಳ ರಕ್ಷಣೆ ಕುರಿತು ಸಮಾಜದಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಈ ಪುರುಷ ಪ್ರಧಾನ ಕುಟುಂಬದಲ್ಲಿ ಹೆಣ್ಣು ಮಕ್ಕಳಿಗೆ ಇನ್ನೂ ಸರಿಯಾದ ಸ್ಥಾನಮಾನ ನೀಡಿರುವುದಿಲ್ಲ. ಕುಟುಂಬದಲ್ಲಿ ಹೆಣ್ಣು ಮಗುವನ್ನು ನೋಡುವ ದೃಷ್ಠಿಕೋನ ಬೇರೆಯಾಗಿದೆ. ಆದರೆ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆ ಜಾರಿಗೊಳಿಸಿದೆ. ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಹೆಣ್ಣು ಕುಟುಂಬದ ಕಣ್ಣು, ಸಮಾಜದ ಆಸ್ತಿ, ಮನೆ ಬೆಳಗುವ ನಂದಾದೀಪವಿದ್ದಂತೆ, ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು, ಎಂಬುದನ್ನು ಅರಿಯಬೇಕು. ಚಿಕ್ಕ ಮಕ್ಕಳನ್ನು ನೋಡಿಕೊಳ್ಳುವವಳು ಹೆಣ್ಣು, ವಯಸ್ಸಾದವರ ಆರೈಕೆ ಮಾಡುವವಳೂ ಹೆಣ್ಣು, ಪ್ರತಿಯೊಂದು ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವವಳು ಹೆಣ್ಣು. ಆದ್ದರಿಂದ ಹೆಣ್ಣು ಮಕ್ಕಳ ಬಗ್ಗೆ ತಾತ್ಸಾರ ಮನೋಭಾವನೆ ಮಾಡದೆ ಪ್ರೀತಿಯಿಂದ ಕಾಣಬೇಕು. ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಒಂದು ಮಗುವಿನಿಂದ ಇನ್ನೊಂದು ಮಗುವಿಗೆ, ಕನಿಷ್ಠ 4 ವರ್ಷ ಅಂತರ ಕಾಪಾಡಲು ಕುಟುಂಬ ಕಲ್ಯಾಣ ಕಾರ್ಯಕ್ರಮದ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ಇದಕ್ಕಾಗಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.

ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಒಂದು ವೇಳೆ ಲಿಂಗ ಪತ್ತೆ ಮಾಡಿ, ಗರ್ಭಪಾತ ಮಾಡಿಸಿದರೆ ₹10 ಸಾವಿರದಿಂದ 1 ಲಕ್ಷಗಳವರೆಗೆ ಹಾಗೂ 3ರಿಂದ 5 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದರು.

ಕೊಪ್ಪಳ ಎಂ.ಸಿ.ಎಚ್ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ. ಸುರೇಖಾ ಮಾತನಾಡಿ, ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ನಿರ್ಲಕ್ಷ್ಯತನ ಬೇಡ, ಹೆಣ್ಣು-ಗಂಡು ಬೇಧ-ಭಾವ ಮಾಡದೇ ಸಮಾನವಾಗಿ ಕಾಣಬೇಕು ಮತ್ತು ಸಮಾನವಾಗಿ ಶಿಕ್ಷಣ ಕೊಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞ ಡಾ. ರಾಜೇಶ್, ಮಕ್ಕಳ ತಜ್ಞ ಡಾ. ಭಾರ್ಗವ, ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ. ಗಿರೀಶ್, ಶುಶ್ರೂಷಕ ಅಧೀಕ್ಷಕರಾದ ತೈರುನ್ನಿಸಾ ಸೈಯದ್, ಎಂ.ಸಿ.ಎಚ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಬಾಣಂತಿಯರು, ತಾಯಂದಿರು ಹಾಗೂ ಇತರರಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಕಾರ್ಯಕ್ರಮ ನಿರೂಪಿಸಿದರು. ಸ್ವಾತಿ ಪ್ರಾರ್ಥನೆ ಗೀತೆ ಹಾಡಿದರು. ಕಾರ್ಯಕ್ರಮದ ಅಂಗವಾಗಿ ಆಸ್ಪತ್ರೆಯಲ್ಲಿರುವ ಎಲ್ಲ ಬಾಣಂತಿಯರಿಗೆ ಹಣ್ಣು ಹಂಪಲು ವಿತರಿಸಲಾಯಿತು.