ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಹೊಣೆ : ಮಮತಾ

| Published : Feb 11 2024, 01:49 AM IST

ಸಾರಾಂಶ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ರಕ್ಷಣೆ ಸೇರಿದಂತೆ ಶೈಕ್ಷಣಿಕ, ಸಾಮಾಜಿಕ, ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೆ ತಂದು ಸಮಾಜದಲ್ಲಿ ಸುಶಿಕ್ಷಿತರನ್ನಾಗಿ ಮಾಡುತ್ತಿವೆ ಎಂದು ತಾಲೂಕಿನ ಗುಡಿಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಮಮತಾ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ರಕ್ಷಣೆ ಸೇರಿದಂತೆ ಶೈಕ್ಷಣಿಕ, ಸಾಮಾಜಿಕ, ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೆ ತಂದು ಸಮಾಜದಲ್ಲಿ ಸುಶಿಕ್ಷಿತರನ್ನಾಗಿ ಮಾಡುತ್ತಿವೆ ಎಂದು ತಾಲೂಕಿನ ಗುಡಿಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಮಮತಾ ತಿಳಿಸಿದರು.

ತಾಲೂಕಿನ ಹೊನ್ನವಳ್ಳಿ ವೃತ್ತದ ಗುಡಿಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಸರ್ಕಾರ ಜಾರಿಗೆ ತಂದಿರುವ ಕಾರ್ಯಕ್ರಮಗಳ ಬಗ್ಗೆ ಪ್ರತಿ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸಿ ಸಮಾಜದಲ್ಲಿ ಹೇಗೆ ಬದುಕು ಕಟ್ಟಿಕೊಳ್ಳಬೇಕೆಂಬುದನ್ನು ತಿಳಿಸಬೇಕು. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಪ್ರಯೋಜನಕಾರಿಯಾಗಿವೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಬಿ.ಎನ್. ಪ್ರೇಮಾ ಮಾತನಾಡಿ, ಶಾಲೆಯಿಂದ ಹೊರಗುಳಿದಿರುವ ಹದಿಹರೆಯದ ಹೆಣ್ಣು ಮಕ್ಕಳನ್ನು ಶಾಲೆಗೆ ಸೇರಿಸುವ ಬಗ್ಗೆ, ಬಾಲ್ಯ ವಿವಾಹ ನಿಷೇದ, ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಮಕ್ಕಳ ಆರೋಗ್ಯ ಮತ್ತು ಸ್ವಚ್ಛತೆ, ಹೆಣ್ಣು ಮಕ್ಕಳ ಸುರಕ್ಷತೆ, ಹದಿಹರೆಯದ ಹೆಣ್ಣು ಮಕ್ಕಳು ಗರ್ಭಿಣಿ ಆದರೆ ಆಗುವ ತೊಂದರೆ ಸೇರಿದಂತೆ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಮಾಹಿಸಿ ನೀಡಿದರು. ಈ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಸಮುದಾಯಗಳು ಮಾಡಬೇಕು ಆಗ ಮಾತ್ರ ಕಾರ್ಯಕ್ರಮಗಳು ಅನುಷ್ಠಾನವಾಗಿದ್ದಕ್ಕೂ ಸಾರ್ಥಕವಾಗಲಿವೆ. ಇಲಾಖೆಗಳೊಂದಿಗೆ ಪ್ರತಿಯೊಬ್ಬರು ಕೈಜೋಡಿಸಿ ಹೆಣ್ಣು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ, ರಕ್ಷಣೆಗೆ ಮುಂದಾಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಪಿಡಿಒ ಗೋಪಾಲ್, ಕಾರ್ಯದರ್ಶಿ ಹನುಮೇಗೌಡ ಶಿಕ್ಷಕರಾದ ಮರುಳಪ್ಪ, ಹನುಮಪ್ಪ, ಆರೋಗ್ಯ ಇಲಾಖೆಯ ಪವಿತ್ರ, ಗುರುಪ್ರಸಾದ್ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಾಲ ವಿಕಾಸ ಸಮಿತಿ ಅಧ್ಯಕ್ಷರು ಭಾಗವಹಿಸಿದ್ದರು.