ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

| Published : Oct 30 2024, 12:38 AM IST

ಸಾರಾಂಶ

ಹೆಣ್ಣು ಮಕ್ಕಳ ದೌರ್ಜನ್ಯ ಹಾಗೂ ಕೌಟುಂಬಿಕ ದೌರ್ಜನ್ಯ ಕಂಡು ಬಂದರೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು.ಆಗ ನೋಂದ ಮಹಿಳೆ ಸರ್ಕಾರದಿಂದ ಪರಿಹಾರ ಕಂಡುಕೊಳ್ಳಬಹುದು

ಗದಗ: ಬಾಲ್ಯ ವಿವಾಹ ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆಯುವ ಮೂಲಕ ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಈಗಿನ ದಿನಗಳಲ್ಲಿ ಹೆಣ್ಣುಮಕ್ಕಳು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳ ಅರಿವು ಮೂಡಿಸುವುದು ಅವಶ್ಯಕವಾಗಿದೆ. ಹೆಣ್ಣುಭ್ರೂಣ ಹತ್ಯೆ ತಡೆಗಟ್ಟಿ ಲಿಂಗತಾರತಮ್ಯ ತೊಲಗಿಸುವುದು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವದು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಬಾಲ್ಯ ವಿವಾಹ ಮತ್ತು ಹೆಣ್ಣುಭ್ರೂಣ ಹತ್ಯೆ ತಡೆಗಟ್ಟಲು ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಬಾಲ್ಯ ವಿವಾಹ ಪ್ರಕರಣ ಕಂಡು ಬಂದರೆ ವಿಳಂಬ ಮಾಡದೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಹೆಣ್ಣು ಮಕ್ಕಳ ದೌರ್ಜನ್ಯ ಹಾಗೂ ಕೌಟುಂಬಿಕ ದೌರ್ಜನ್ಯ ಕಂಡು ಬಂದರೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು.ಆಗ ನೋಂದ ಮಹಿಳೆ ಸರ್ಕಾರದಿಂದ ಪರಿಹಾರ ಕಂಡುಕೊಳ್ಳಬಹುದು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ದೇಶದ ನ್ಯಾಯಾಂಗದ ಒಂದು ಭಾಗವಾಗಿದ್ದು, ಪ್ರಾಧಿಕಾರದಿಂದ ಕಾನೂನು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಯಶಸ್ಸಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಭ್ರೂಣಹತ್ಯೆ ತಡೆಗಟ್ಟಿ ಹೆಣ್ಣು ಮಗುವನ್ನು ಬಾಲ್ಯವಿವಾಹದಿಂದ ರಕ್ಷಿಸುವುದು ಆದ್ಯ ಕರ್ತವ್ಯವಾಗಿದೆ. ದೇಶದ ಅಭಿವೃದ್ಧಿಗೆ ಹೆಣ್ಣು ಮಕ್ಕಳು ಹಾಗೂ ಪುರುಷರು ಒಂದು ಪಕ್ಷಿಯ ಎರಡು ರೆಕ್ಕೆ ಇದ್ದ ಹಾಗೆ. ಹೆಣ್ಣು ಮಕ್ಕಳಿಗೂ ಸಮಾನ ಅವಕಾಶ ನೀಡಿದಾಗ ಅಂತಹ ದೇಶ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ ಎಂದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಇಲಾಖೆಯ ಶ್ರೀಧರ ಪ್ರತಿಜ್ಞಾ ವಿಧಿ ಬೋಧಿಸಿದರು. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಕರಪತ್ರ ಬಿಡುಗಡೆಗೊಳಿಸಲಾಯಿತು.

ಯುನೆಸ್ಕೋ ಸಂಸ್ಥೆಯ ಹರೀಶ ಜೋಗಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಪಂ ಸಿಇಒ ಭರತ್.ಎಸ್., ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ., ವಕೀಲ ಜೆ.ಸಿ. ರೇಶ್ಮೆ, ಡಿಎಚ್‌ಒ ಡಾ.ಎಸ್.ಎಸ್. ನೀಲಗುಂದ, ಡಿವೈಎಸ್‌ಪಿ ಇನಾಮದಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು. ಜಿಲ್ಲಾ ನಿರೂಪಣಾಧಿಕಾರಿ ರಾಧಾ ಜಿ. ಮಣ್ಣೂರ ಸ್ವಾಗತಿಸಿದರು. ಸುನಿತಾ ನಾಡಿಗೇರ ನಿರೂಪಿಸಿದರು.