ಪ್ರಜ್ವಲ್‌ಗೆ ಜಾಮೀನು ಸಿಗದಂತೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

| Published : May 04 2024, 01:30 AM IST

ಪ್ರಜ್ವಲ್‌ಗೆ ಜಾಮೀನು ಸಿಗದಂತೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಸಿಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಹೊಳೆನರಸೀಪುರ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಸಿಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.

ಇದು ಗಂಭೀರ ಪ್ರಕರಣವಾಗಿದ್ದು ಆರೋಪಿಗಳಿಗೆ ಜಾಮೀನು ನೀಡಿದರೆ ಸಾಕ್ಷಿಗಳಿಗೆ ಬೆದರಿಕೆ ಒಡ್ಡುವ ಸಾಧ್ಯತೆಯಿದೆ. ಆದ್ದರಿಂದ ಸರ್ಕಾರ ನಿರೀಕ್ಷಣಾ ಜಾಮೀನು ದೊರೆಯದಂತೆ ಕ್ರಮ ಕೈಗೊಳ್ಳಬೇಕು. ವಿಡಿಯೋಗಳನ್ನು ಪೆನ್‌ಡ್ರೈವ್‌ ಮೂಲಕ ಸಾರ್ವಜನಿಕರಿಗೆ ಹಂಚಿದವರನ್ನು ಪತ್ತೆ ಹಚ್ಚಿ ಬಂಧಿಸಿ ಪ್ರಕರಣ ದಾಖಲಿಸಬೇಕು. ಸಂತ್ರಸ್ತ ಮಹಿಳೆಯರ ಗುರುತು ಬಹಿರಂಗ ಮಾಡದೆ, ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಲಾಯಿತು.

ಸಂತ್ರಸ್ತ ಮಹಿಳೆಯರಿಗಾಗಿ ಪ್ರತ್ಯೇಕ ಕೌನ್ಸೆಲಿಂಗ್‌ ಕೇಂದ್ರಗಳನ್ನು ಪ್ರಾರಂಭಿಸಬೇಕು. ದೂರು ಸಲ್ಲಿಸಲು ಅನುಕೂಲವಾಗುವಂತೆ ಹಾಸನ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕವಾದ ದೂರು ಕೇಂದ್ರಗಳನ್ನು ಸ್ಥಾಪಿಸಬೇಕು. ದೂರು ದಾಖಲಿಸಲು ಬರುವ ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು, ಪ್ರಯಾಣಕ್ಕೆ ವ್ಯವಸ್ಥೆ ಮಾಡಬೇಕು. ಎಸ್‌ಐಟಿಯ ತನಿಖೆಯ ಮೇಲೆ ಯಾವುದೇ ರಾಜಕೀಯ ಪ್ರಭಾವ ಬೀರಬಾರದು ಎಂದು ಆಗ್ರಹಿಸಲಾಯಿತು.