ಸಾರಾಂಶ
ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು
ಬಳ್ಳಾರಿ: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆಗೆ ಮುಂದಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಮುಡಾ ಹಗರಣದಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ. ಹಗರಣದಲ್ಲಿ ಮುಖ್ಯಮಂತ್ರಿ ಹೆಸರು ತಳಕು ಹಾಕಿಕೊಂಡಿದ್ದು, ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮೈಸೂರಿನಲ್ಲಿ ಹೋರಾಟ ನಡೆಸಲಾಯಿತು. ಆದರೆ, ಚಳವಳಿ ಹತ್ತಿಕ್ಕುವ ಉದ್ದೇಶದಿಂದ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಹತ್ತಿಕ್ಕುವುದು ಸರಿಯಾದ ಕ್ರಮವಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅನಿಲಕುಮಾರ್ ಮೋಕಾ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರ ಪ್ರಕರಣಗಳು ಹೆಚ್ಚಾಗಿವೆ. ನಾಡಿನ ಹಿತಾಸಕ್ತಿ ಕಾಯುವ ಯಾವುದೇ ಕಾಳಜಿ ಕಾಂಗ್ರೆಸ್ಸಿನವರಿಗಿಲ್ಲ ಎಂದು ದೂರಿದರು.
ಪಕ್ಷದ ಮುಖಂಡರಾದ ಕೆ.ಎ. ರಾಮಲಿಂಗಪ್ಪ, ಮಲ್ಲನಗೌಡ, ಹನುಮಂತಪ್ಪ, ಅರುಣಾಚಲಂ, ಹಂಪಿ ರಮಣಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.