‘ಕನ್ನಡ’ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆ

| Published : Dec 30 2023, 01:15 AM IST

ಸಾರಾಂಶ

ಕನ್ನಡ ಹೋರಾಟಗಾರರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಬೆಂಗಳೂರು

ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಹೋರಾಟ ನಡೆಸಿದ ಕನ್ನಡಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಬಂಧನ ವಿರೋಧಿಸಿ ಹಲವು ಸಂಘಟನೆಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು.

ವಾಣಿಜ್ಯ ಮಳಿಗೆ, ಉದ್ಯಮ ಮತ್ತಿತರ ಕಡೆ ಕನ್ನಡ ನಾಮಫಲಕಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಹೋರಾಟ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತಿತರರನ್ನು ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಹಲವು ಸಂಘಟನೆಗಳ ಮುಖಂಡರು ಪಾಲ್ಗೊಂಡು ತೀವ್ರ ವಿರೋಧ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಸಂಚಾಲಕ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಭಾಷೆಯ ಬಗ್ಗೆ ಧ್ವನಿ ಎತ್ತಿದ ಹೋರಾಟಗಾರರನ್ನು ಬಂಧಿಸಿರುವುದು ಸರಿಯಲ್ಲ. ರಾಜ್ಯಗಳು ಭಾಷೆಯ ಆಧಾರದಲ್ಲಿ ವಿಂಗಡಣೆಯಾಗಿದ್ದು, ಭಾಷೆಯ ಬಗ್ಗೆ ಧ್ವನಿ ಎತ್ತಿದರೆ ರಾಷ್ಟ್ರದ್ರೋಹ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಮಾಲ್‌ಗಳ ಪರವಾಗಿ ನಿಂತು ರಾಜ್ಯದ್ರೋಹ ಮಾಡುತ್ತಿದೆ. ಕನ್ನಡ ಅನುಷ್ಠಾನ ಮಾಡದಿರುವ ಅಧಿಕಾರಿಗಳನ್ನು ಜೈಲಿಗೆ ಹಾಕುವುದನ್ನು ಬಿಟ್ಟು ಹೋರಾಟಗಾರರನ್ನು ಬಂಧಿಸಿರುವುದು ಸರಿಯಲ್ಲ. ಹೋರಾಟಗಾರರನ್ನು ತಕ್ಷಣ ಬಿಡುಗಡೆಗೊಳಿಸಬೇಕು. ಸರ್ಕಾರ ಮೊದಲೇ ಎಚ್ಚೆತ್ತುಕೊಂಡಿದ್ದರೆ ಹೋರಾಟ ಏಕೆ ನಡೆಯುತ್ತಿತ್ತು ಎಂದು ಪ್ರಶ್ನಿಸಿದರು.

ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ, ರಾಜ್ಯಾದ್ಯಂತ ಕಾನೂನು ಪ್ರಕಾರವೇ ನಮ್ಮ ಹೋರಾಟ ನಡೆಯಲಿದೆ. ನಾಮಫಲಕ ಮಾತ್ರವೇ ಅಲ್ಲ, ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಕನ್ನಡದಲ್ಲಿ ಶಿಕ್ಷಣ ನೀಡಬೇಕು, ಕರ್ನಾಟಕದಲ್ಲಿ ಕನ್ನಡಕ್ಕೆ ಸಿಗಬೇಕಾದ ಆದ್ಯತೆ ಸಿಗಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿಯೆಎಪಿ ರಾಜ್ಯ ಉಪಾಧ್ಯಕ್ಷರಾದ ಡಾ.ರಮೇಶ್ ಬೆಲ್ಲಂಕೊಂಡ, ಸುಷ್ಮಾ ವೀರ, ಅಶೋಕ್ ಮೃತ್ಯುಂಜಯ, ಜಗದೀಶ್ ಬಾಬು ಮತ್ತಿತರರು ಪಾಲ್ಗೊಂಡಿದ್ದರು.

ಗೌಡ ಬಂಧನ ಖಂಡಿಸಿ ಕರವೇ ಪ್ರತಿಭಟನೆ

ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತಿತರರನ್ನು ಬಂಧಿಸಿರುವುದನ್ನು ಖಂಡಿಸಿ ಕರವೇ ಮಹಿಳಾ ಘಟಕದಿಂದ ಶುಕ್ರವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಮಾತನಾಡಿ, ನಾವು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದರೂ ಅದನ್ನು ಹತ್ತಿಕ್ಕುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ನಾರಾಯಣಗೌಡರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.