ಉದ್ದೇಶಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆ ಮಾಡುವ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಕಾರವಾರದಲ್ಲಿ ವಕೀಲರು ಹಾಗೂ ಸಾರ್ವಜನಿಕರು ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಾರವಾರದಲ್ಲಿ ವಕೀಲರು, ಸಾರ್ವಜನಿಕರಿಂದ ಆಗ್ರಹ । ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ

ಕನ್ನಡಪ್ರಭ ವಾರ್ತೆ ಕಾರವಾರ

ಉದ್ದೇಶಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆ ಮಾಡುವ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಕಾರವಾರದಲ್ಲಿ ವಕೀಲರು ಹಾಗೂ ಸಾರ್ವಜನಿಕರು ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಉತ್ತರ ಕನ್ನಡ ಜಿಲ್ಲೆಯನ್ನು ಈಗಿರುವಂತೆ ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಗೆ ಪಕ್ಷಾತೀತ ಬೆಂಬಲ ವ್ಯಕ್ತವಾಗಿದ್ದು, ಹಾಲಿ ಶಾಸಕ ಸತೀಶ್ ಸೈಲ್, ಮಾಜಿ ಶಾಸಕರಾದ ರೂಪಾಲಿ ನಾಯ್ಕ್, ಆನಂದ್ ಅಸ್ನೋಟಿಕರ್ ಹಾಗೂ ಗಂಗಾಧರ ಭಟ್ ಸೇರಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು. ವಿವಿಧ ರಾಜಕೀಯ ಪಕ್ಷಗಳ ನಾಯಕರು ಹಾಗೂ ಕಮ್ಯುನಿಸ್ಟ್ ಪಕ್ಷದ ಮುಖಂಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಜಿಲ್ಲೆಯ ಹಿತಾಸಕ್ತಿಗಾಗಿ ಒಗ್ಗಟ್ಟು ಪ್ರದರ್ಶಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ವಕೀಲರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ನಾಯಕ, ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಸೇರಿಸಿದರೆ ಜಿಲ್ಲೆಯ ಕಕ್ಷಿದಾರರಿಗೆ ಹೆಚ್ಚಿನ ಆರ್ಥಿಕ ಹಾಗೂ ಪ್ರಯಾಣದ ಹೊರೆಯಾಗಲಿದೆ. ಯಾವುದೇ ಕಾರಣಕ್ಕೂ ಉತ್ತರ ಕನ್ನಡ ಜಿಲ್ಲೆಯನ್ನು ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಯಿಂದ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ವಕೀಲರು ನಿರ್ಣಯ ಕೈಗೊಂಡಿದ್ದಾರೆ. ಸರ್ಕಾರ ಕೂಡಲೇ ತನ್ನ ಪ್ರಸ್ತಾವನೆಯಿಂದ ಉತ್ತರ ಕನ್ನಡ ಜಿಲ್ಲೆಯನ್ನು ಕೈಬಿಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಸುಭಾಷ್ ವೃತ್ತ, ಸವಿತಾ ವೃತ್ತ ಮಾರ್ಗವಾಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಬಳಿಕ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಪೀಠದ ವ್ಯಾಪ್ತಿಗೆ ಸೇರಿಸುವ ಪ್ರಸ್ತಾವನೆ ಕೈಬಿಡುವಂತೆ ಒತ್ತಾಯಿಸಲಾಯಿತು.

ನಗರದಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಮಳೆಯ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಉತ್ತರ ಕನ್ನಡ ಜಿಲ್ಲೆಯ 11 ತಾಲೂಕುಗಳ ವಕೀಲರ ಸಂಘಗಳ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು. ಅಲ್ಲದೇ ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಗೆ ಒಳಪಡುವ ಎಂಟು ಜಿಲ್ಲೆಗಳ ವಕೀಲರ ಸಂಘಗಳ ಪದಾಧಿಕಾರಿಗಳು ಮತ್ತು ಸದಸ್ಯರು ಕೂಡ ಕಾರವಾರಕ್ಕೆ ಆಗಮಿಸಿ ಹೋರಾಟಕ್ಕೆ ಬೆಂಬಲ ನೀಡಿದರು.

ವಕೀಲರ ಜೊತೆಗೆ ಕಾಲೇಜು ವಿದ್ಯಾರ್ಥಿಗಳು, ಮೀನುಗಾರರು, ರೈತರು, ರಿಕ್ಷಾ ಚಾಲಕರು ಹಾಗೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.