ಕಾವೇರಿ ನದಿಗೆ ತ್ಯಾಜ್ಯ ವಸ್ತುಗಳು ಹಾಗೂ ಕಸ ಎಸೆಯುತ್ತಿರುವ ಅಕ್ರಮದ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೊಡಗು ಅಭಿವೃದ್ಧಿ ಸಮಿತಿ ವತಿಯಿಂದ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಯುವ ರಕ್ಷಣಾ ವೇದಿಕೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕಾವೇರಿ ನದಿಗೆ ತ್ಯಾಜ್ಯ ವಸ್ತುಗಳು ಹಾಗೂ ಕಸ ಎಸೆಯುತ್ತಿರುವ ಅಕ್ರಮದ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೊಡಗು ಅಭಿವೃದ್ಧಿ ಸಮಿತಿ ವತಿಯಿಂದ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಯುವ ರಕ್ಷಣಾ ವೇದಿಕೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಮಾತನಾಡಿ, ಕಾವೇರಿ ನದಿ ಹರಿಯುವ ಪ್ರದೇಶಗಳಲ್ಲಿ ಘನ ತ್ಯಾಜ್ಯ, ಪ್ಲಾಸ್ಟಿಕ್ ವಸ್ತುಗಳು, ಹೋಟೆಲ್ ಮತ್ತಿತರ ತ್ಯಾಜ್ಯಗಳನ್ನು ನದಿ ಹಾಗೂ ನದಿ ತೀರ ಪ್ರದೇಶಗಳಿಗೆ ಎಸೆಯಲಾಗುತ್ತಿದೆ. ಇದು ಪರಿಸರ, ಸಾರ್ವಜನಿಕ ಆರೋಗ್ಯ ಮತ್ತು ಭವಿಷ್ಯದ ನೀರಿನ ಭದ್ರತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ. ಅಲ್ಲದೆ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಮತ್ತೊಮ್ಮೆ ಒತ್ತಾಯಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಜ. ೨೧ರಂದು ನಗರದ ಅರಣ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಗುವುದು. ಹೋರಾಟದಿಂದ ಉಂಟಾಗುವ ಯಾವುದೇ ಪರಿಸ್ಥಿತಿಗೆ ಸಂಪೂರ್ಣ ಜವಾಬ್ದಾರಿ ಜಿಲ್ಲಾಡಳಿತವಾಗಿರುತ್ತದೆ ಎಂದು ಎಚ್ಚರಿಸಿದರು.ಕಾವೇರಿ ನದಿಗೆ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ನದಿ ತೀರ ಪ್ರದೇಶಗಳಲ್ಲಿ ನಿರಂತರ ಪರಿಶೀಲನೆ ಹಾಗೂ ನಿಗಾ ವ್ಯವಸ್ಥೆ ಜಾರಿಗೆ ತರಬೇಕು. ತಪ್ಪಿತಸ್ಥರ ವಿರುದ್ಧ ದಂಡ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸುವ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಎಂ.ಎಂ. ದಾವೂದ್ ಮಾತನಾಡಿ, ಕಾವೇರಿ ನದಿ ಕೊಡಗು ಜಿಲ್ಲೆಯ ಜೀವನಾಡಿಯಾಗಿದ್ದು, ಇಡೀ ರಾಜ್ಯದ ಕೋಟ್ಯಂತರ ಜನರ ಕುಡಿಯುವ ನೀರಿನ ಮೂಲವಾಗಿದೆ. ನದಿಗೆ ಕಸ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ಸಂದರ್ಭ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಅಣ್ಣಯ್ಯ, ಕೊಡಗು ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ಲವ, ಕಾರ್ಯದರ್ಶಿ ಪ್ರಮೋದ್ ಹಾಗೂ ರೈತ ಮುಖಂಡರು, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.