ಸಾರಾಂಶ
ವಕ್ಫ್ ಬೋರ್ಡ್ ಹೆಸರಿನಲ್ಲಿ ಭೂಮಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ರೈತರು, ಮಠ, ಮಂದಿರಗಳು ಹಾಗೂ ಸಾರ್ವಜನಿಕರಿಗೆ ಅನ್ಯಾಯವಾಗುತ್ತಿದೆ.
ಹೊಸಪೇಟೆ: ವಕ್ಫ್ ಬೋರ್ಡ್ ಹೆಸರಿನಲ್ಲಿ ಭೂಮಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ರೈತರು, ಮಠ, ಮಂದಿರಗಳು ಹಾಗೂ ಸಾರ್ವಜನಿಕರಿಗೆ ಅನ್ಯಾಯವಾಗುತ್ತಿದೆ. ಹಾಗಾಗಿ ನಮ್ಮ ಭೂಮಿ-ಸಮ್ಮ ಹಕ್ಕು ಶೀರ್ಷಿಕೆಯಡಿ ಬಿಜೆಪಿ ವಿಜಯನಗರ ಜಿಲ್ಲಾ ಘಟಕದ ವತಿಯಿಂದ ನಗರದ ತಹಸೀಲ್ದಾರ ಕಚೇರಿ ಎದುರು ನ.22ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಅಶೋಕ್ ಜೀರೆ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಶೋಷಣೆಗೆ ಒಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರು, ಮಠ, ಮಂದಿರುಗಳು, ಶಾಲೆಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಅಹವಾಲು ಸ್ವೀಕರಿಸಿ, ಸಮಸ್ಯೆ ಗಂಭೀರತೆಯನ್ನು ಜಿಲ್ಲಾವಾರು ಪರಾಮರ್ಶೆ ಮಾಡಲಾಗುವುದು. ವಕ್ಫ್ ಆಸ್ತಿ ಸಂಬಂಧ ಇಡೀ ರಾಜ್ಯದಲ್ಲಿ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಗೆ ತಾರ್ಕಿಕ ಅಂತ್ಯ ಹುಡುಕುವ ನಿಟ್ಟಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜೇಂದ್ರ ಅವರ ನೇತೃತ್ವದಲ್ಲಿ ಕಳೆದ ಹತ್ತಾರು ದಿನಗಳಿಂದ ಪಕ್ಷದೊಳಗೆ ಆಂತರಿಕ ಚರ್ಚೆ ನಡೆಸಿ, ಜನರನ್ನು ಸಂಪರ್ಕಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತಿ ಜಿಲ್ಲೆಯಲ್ಲೂ ಐದು ಜನರ ತಂಡ ರಚಿಸಲಾಗಿದ್ದು, ಆ ತಂಡದಲ್ಲಿ ವಕೀಲರು ರೈತ ಮುಖಂಡರು ಇರುತ್ತಾರೆ ಎಂದರು.ವಕ್ಫ್ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯದಲ್ಲಿ ಮೂರು ತಂಡಗಳನ್ನು ರಚಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರ ನೇತೃತ್ವದ ಪ್ರತೇಕ ಮೂರು ತಂಡಗಳು ಡಿಸೆಂಬರ್ ಮೊದಲ ವಾರದಿಂದ ರಾಜ್ಯಾದ್ಯಾಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ರೈತರ, ಮಠಮಾನ್ಯಗಳ ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿದೆ. ಸಮಸ್ಯೆಗಳ ವರದಿ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು, ರಾಜ್ಯಾಧ್ಯಕ್ಷ ವಿಜೇಂದ್ರ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು. ಮುಖಂಡರಾದ ಅಯ್ಯಾಳಿ ತಿಮ್ಮಪ್ಪ, ರಾಘವೇಂದ್ರ, ವೀರನಗೌಡ, ಕಿಚಿಡಿ ಕೊಟ್ರೇಶ್, ಅನುರಾಧ ಮತ್ತಿತರರಿದ್ದರು.