ರಾಜ್ಯ ಸರ್ಕಾರದ ಈ ಪ್ರಸ್ತಾವನೆಯಿಂದ ಹಲವು ವರ್ಷಗಳಿಂದ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಮಹಿಳಾ ನೌಕರರ ಉದ್ಯೋಗಕ್ಕೆ ತೊಂದರೆಯಾಗಲಿದೆ. ಬಿಸಿಯೂಟ ಯೋಜನೆಯನ್ನು ಈಗಿರುವ ವ್ಯವಸ್ಥೆಯಲ್ಲಿಯೇ ಮುಂದುವರಿಸಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳು ಹಾಗೂ ಎನ್ಜಿಒಗಳಿಗೆ ವಹಿಸುವ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ಅಕ್ಷರ ದಾಸೋಹ ನೌಕರರ ಸಂಘದಿಂದ ಜಿಲ್ಲಾ ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಲಾಯಿತು.ರಾಜ್ಯ ಸರ್ಕಾರದ ಈ ಪ್ರಸ್ತಾವನೆಯಿಂದ ಹಲವು ವರ್ಷಗಳಿಂದ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಮಹಿಳಾ ನೌಕರರ ಉದ್ಯೋಗಕ್ಕೆ ತೊಂದರೆಯಾಗಲಿದೆ. ಬಿಸಿಯೂಟ ಯೋಜನೆಯನ್ನು ಈಗಿರುವ ವ್ಯವಸ್ಥೆಯಲ್ಲಿಯೇ ಮುಂದುವರಿಸಬೇಕು. ಅಡುಗೆ ನೌಕರರನ್ನು ಕೆಲಸದಿಂದ ಕೈಬಿಡುವ ಯಾವುದೇ ನಿರ್ಧಾರ ಕೈಗೊಳ್ಳಬಾರದು. ನೌಕರರಿಗೆ ಉದ್ಯೋಗ ಭದ್ರತೆ ಒದಗಿಸುವುದರ ಜತೆಗೆ ಕನಿಷ್ಠ ವೇತನ ಮತ್ತು ಇತರೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸುಮಾರು ೨೫ ವರ್ಷಗಳಿಂದ ಕಡಿಮೆ ವೇತನದಲ್ಲಿ ಸೇವೆ ಸಲ್ಲಿಸುತ್ತಿರುವ ಬಿಸಿಯೂಟ ತಯಾರಕ ಮಹಿಳೆಯರ ಬದುಕಿನೊಂದಿಗೆ ಸರ್ಕಾರ ಚೆಲ್ಲಾಟವಾಡಬಾರದು. ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು ಕೈಬಿಟ್ಟು, ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸುವ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.ಆಗಸ್ಟ್, ಸೆಪ್ಟೆಂಬರ್, ನವೆಂಬರ್ ತಿಂಗಳಿನ ಕಡಿತಗೊಂಡ ಒಂದು ಸಾವಿರ ರು.ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು, ನಿವೃತ್ತರಾದ ಅಡುಗೆ ಸಿಬ್ಬಂದಿಯ ಬಾಕಿ ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಕೂಡಲೇ ಈ ವಿಚಾರದಲ್ಲಿ ಕಾರ್ಮಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಸಂಘದ ಮುಖಂಡರು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಮಹದೇವಮ್ಮ, ಖಜಾಂಚಿ ಭಾಗ್ಯಮ್ಮ, ಪ್ರಧಾನ ಕಾರ್ಯದರ್ಶಿ ಎ.ಪಿ.ಶಶಿಕಲಾ, ಸಿಐಟಿಯುನ ಸಿ.ಕುಮಾರಿ, ಶಾರದಮ್ಮ, ಶಿವಾನಂದ, ಪದ್ಮ, ಮಂಗಳಗೌರಿ ಸೇರಿದಂತೆ ನೂರಾರು ಬಿಸಿಯೂಟ ನೌಕರರು ಭಾಗವಹಿಸಿದ್ದರು.