ಗ್ಯಾರಂಟಿ ಯೋಜನೆಗಳಿಂದ ಹೆಣ್ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಎಚ್ಡಿಕೆ ಹೇಳಿಕೆ ಖಂಡಿಸಿ ಪ್ರತಿಭಟನೆ

| Published : Apr 16 2024, 01:04 AM IST

ಗ್ಯಾರಂಟಿ ಯೋಜನೆಗಳಿಂದ ಹೆಣ್ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಎಚ್ಡಿಕೆ ಹೇಳಿಕೆ ಖಂಡಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

‘ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಸಿಗುತ್ತಿರುವ ನಾಲ್ಕೈದು ಸಾವಿರ ಹಣದಿಂದ ಕುಟುಂಬ ನಿರ್ವಹಣೆಗೆ ಸಹಾಯವಾಗುತ್ತಿದೆ. ಇದನ್ನು ಸಹಿಸಿಕೊಳ್ಳದ ಮಾಜಿ ಸಿಎಂ ಕುಮಾರಸ್ವಾಮಿ ಮಹಿಳೆಯರು ಅಡ್ಡದಾರಿ ಹಿಡಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿ ಅಗೌರವದ ಮಾತುಗಳನ್ನಾಡಿದ್ದಾರೆ’.

ಕನ್ನಡಪ್ರಭ ವಾರ್ತೆ ಮದ್ದೂರು

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಂಜನಾ ಶ್ರೀಕಾಂತ್ ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಧರಣಿ ನಡೆಸಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು. ಪ್ರತಿಭಟನೆಯಿಂದಾಗಿ ಬೆಂಗಳೂರು ಮೈಸೂರು ಹಾಗೂ ಮದ್ದೂರು ಮಳವಳ್ಳಿ ರಸ್ತೆಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಗೋ ಬ್ಯಾಕ್ ಪೋಸ್ಟರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಆದರೆ, ಯೋಜನೆಗಳಿಂದ ಹಳ್ಳಿಗಳ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆಯಿಂದ ಮಹಿಳೆಯರು ಸಮಾಜದಲ್ಲಿ ತಲೆತಗ್ಗಿಸುವಂತಾಗಿದೆ. ಈ ಕೂಡಲೇ ಬಹಿರಂಗವಾಗಿ ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪದ್ಮಾ ಮೋಹನ್, ಮಂಜುಳಾ, ಶಾಂತಮ್ಮ, ಭಾಗ್ಯಲಕ್ಷ್ಮಿ, ದೊಡ್ಡ ತಾಯಮ್ಮ, ಸಮೀರಾ, ಪ್ರತಿಭಾ, ಪಲ್ಲವಿ ಮತ್ತಿತರರು ಭಾಗವಹಿಸಿದ್ದರು.ಮಹಿಳೆಯರ ಬಗ್ಗೆ ಹೇಳಿಕೆ ಎಚ್ಡಿಕೆ ಅಂತರಾಳದಲ್ಲಿ ಏನಿದೆ ಎಂಬುದು ವ್ಯಕ್ತವಾಗಿದೆ: ಚಲುವರಾಯಸ್ವಾಮಿ

ನಾಗಮಂಗಲ:

ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಅಡ್ಡದಾರಿ ಹಿಡಿಯುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಅವರ ಹೇಳಿಕೆ ಅವರ ಅಂತರಾಳದಲ್ಲಿ ಏನಿದೆ ಎಂಬುದು ವ್ಯಕ್ತವಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಟೀಕಿಸಿದರು.

ತಾಲೂಕಿನಲ್ಲಿ ವಿವಿಧೆಡೆ ಪ್ರಚಾರ ನಡೆಸುವ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಸಿಗುತ್ತಿರುವ ನಾಲ್ಕೈದು ಸಾವಿರ ಹಣದಿಂದ ಕುಟುಂಬ ನಿರ್ವಹಣೆಗೆ ಸಹಾಯವಾಗುತ್ತಿದೆ. ಇದನ್ನು ಸಹಿಸಿಕೊಳ್ಳದ ಮಾಜಿ ಸಿಎಂ ಕುಮಾರಸ್ವಾಮಿ ಮಹಿಳೆಯರು ಅಡ್ಡದಾರಿ ಹಿಡಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿ ಅಗೌರವದ ಮಾತುಗಳನ್ನಾಡಿದ್ದಾರೆ ಎಂದರು.

ಮನೆಯ ಹೆಣ್ಣು ಮಕ್ಕಳಂತೆಯೇ ಬೇರೆ ಹೆಣ್ಣು ಮಕ್ಕಳೆಂಬ ಭಾವನೆ ಅವರಲ್ಲಿರಬೇಕಿತ್ತು. ಒಬ್ಬ ಮಾಜಿ ಮುಖ್ಯಮಂತ್ರಿಗಳು ಹೆಣ್ಣು ಮಕ್ಕಳ ಬಗ್ಗೆ ಇಷ್ಟು ಲಘುವಾಗಿ ಮಾತನಾಡುವುದನ್ನು ಯಾರೂ ಸಹ ನೋಡಿಲ್ಲ. ಇವೆಲ್ಲವನ್ನು ಅರ್ಥೈಸಿಕೊಂಡು ಮಹಿಳೆಯರೂ ಸೇರಿದಂತೆ ಎಲ್ಲ ವರ್ಗದ ಜನರನ್ನು ಗೌರವದಿಂದ ಕಾಣುವ ಕಾಂಗ್ರೆಸ್ ಪಕ್ಷವನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.