ಕನ್ನಡಪ್ರಭ ವಾರ್ತೆ ಬೆಳಗಾವಿ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಂದಾರ ಸಕ್ಕರೆ ಕಾರ್ಖಾನೆಯಲ್ಲಿ ಕೆಲ ದಿನಗಳ ಹಿಂದೆ ಬಾಯ್ಲರ್‌ ಸ್ಫೋಟದಲ್ಲಿ 8 ಕಾರ್ಮಿಕರು ಮೃತಪಟ್ಟಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿ ಕಾರ್ಖಾನೆಯ ಮಾಲೀಕರು ಹಾಗೂ ಆಡಳಿತ ಮಂಡಳಿ ಮೃತ ಕಾರ್ಮಿಕರ ಕುಟುಂಬಗಳಿಗೆ ಪೂರ್ಣ ಪ್ರಮಾಣದ ಪರಿಹಾರ ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ, ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಕುಲ್ಕರ್ ಅವರ ನೇತೃತ್ವದಲ್ಲಿ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಂದಾರ ಸಕ್ಕರೆ ಕಾರ್ಖಾನೆಯಲ್ಲಿ ಕೆಲ ದಿನಗಳ ಹಿಂದೆ ಬಾಯ್ಲರ್‌ ಸ್ಫೋಟದಲ್ಲಿ 8 ಕಾರ್ಮಿಕರು ಮೃತಪಟ್ಟಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿ ಕಾರ್ಖಾನೆಯ ಮಾಲೀಕರು ಹಾಗೂ ಆಡಳಿತ ಮಂಡಳಿ ಮೃತ ಕಾರ್ಮಿಕರ ಕುಟುಂಬಗಳಿಗೆ ಪೂರ್ಣ ಪ್ರಮಾಣದ ಪರಿಹಾರ ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ, ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಕುಲ್ಕರ್ ಅವರ ನೇತೃತ್ವದಲ್ಲಿ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಲಾಯಿತು.

ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರ ಸುರಕ್ಷತೆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಪರಿಣಾಮ ಈವರೆಗೆ ಎಂಟು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ಆದ್ದರಿಂದ ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಗುಣಮಟ್ಟದ ಸುರಕ್ಷತಾ ಸಾಧನಗಳು ಹಾಗೂ ಸಮರ್ಪಕ ಭದ್ರತಾ ವ್ಯವಸ್ಥೆಗಳನ್ನು ಒದಗಿಸಬೇಕು. ಕಾರ್ಮಿಕ ಇಲಾಖೆ ನಿಯಮಾನುಸಾರ ಎಲ್ಲ ಸೌಲಭ್ಯಗಳನ್ನು ಕಾರ್ಮಿಕರಿಗೆ ನೀಡುವ ಮೂಲಕ ಅವರ ಜೀವ ರಕ್ಷಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇಷ್ಟೆಲ್ಲಾ ದುರ್ಘಟನೆಗಳು ನಡೆದಿದ್ದರೂ ಕಾರ್ಖಾನೆಯ ಮಾಲೀಕರು ಮೃತ ಕಾರ್ಮಿಕರ ಕುಟುಂಬಗಳಿಗೆ ಸಾಂತ್ವನ ಹೇಳಲು ಮುಂದಾಗದಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು. ಕೂಡಲೇ ಕುಟುಂಬಗಳಿಗೆ ನ್ಯಾಯ ಒದಗಿಸದೆ ಹಾಗೂ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸದೆ ಇದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸನಗೌಡ ಸಂಗನಗೌಡರ, ತಾಲೂಕಾಧ್ಯಕ್ಷ ರಾಜು ಬೋಳನ್ನವರ, ದೀಪಕ್ ಸಟೋಜಿ, ಶಿವಾನಂದ ಕುರಬೇಟ, ಮಲ್ಲಿಕಾರ್ಜುನ ಬಾಜಿ, ಅಭಿಷೇಕ ಕಲಾಲ, ಸೋಮು ತೋಟಗಿ, ಪಕ್ರು ಕುಸ್ಲಾಪುರ ಸೇರಿದಂತೆ ಅನೇಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.