4ಕ್ಕೆ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ವಿರೋಧಿಸಿ ಪ್ರತಿಭಟನೆ

| Published : Apr 02 2025, 01:02 AM IST

4ಕ್ಕೆ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ವಿರೋಧಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಏ. 4ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎ.ಎಂ. ಮಹೇಶ್‌ಪ್ರಭು ಹೇಳಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಏ. 4ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎ.ಎಂ. ಮಹೇಶ್‌ಪ್ರಭು ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯು ವಿದ್ಯುತ್ ಸ್ಮಾರ್ಟ್ ಮೀಟರ್ ಅನ್ನು ಅಳವಡಿಕೆ ಮುಂದಾಗಿದೆ ಆದರೆ ರಾಜ್ಯದಲ್ಲಿ ರೈತರು ಸಂಕಷ್ಠದಲ್ಲಿದ್ದಾರೆ ರೈತರ ಹಕ್ಕುಗಳು ಮತ್ತು ಒತ್ತಾಯಗಳನ್ನು ರಾಜ್ಯ ಬಜೆಟ್‌ನಲ್ಲಿ ಕಲ್ಪಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಮಂಡಿಸಿಲ್ಲ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ವಿದ್ಯುತ್‌ ಮೀಟರ್‌ ಅಳವಡಿಸುವುದಕ್ಕೆ ಮುಂದಾಗಿ ಹಿಂಬಾಗಿಲ ಮೂಲಕ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ದೇಶಕ್ಕೆ ಅನ್ನ ನೀಡುವ ರೈತರಿಗೆ ವಿದ್ಯುತ್‌ ಉಚಿತವಾಗಿ ನೀಡುವ ಮೂಲಕ ಸರ್ಕಾರ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು. ವಿದ್ಯುತ್‌ ಮೀಟರ್ ಅಳವಡಿಸುವ ನೈತಿಕತೆ ಸರ್ಕಾರಕ್ಕೆ ಇಲ್ಲ ಎಂದರು.

ರೈತರಿಗೆ ಅನುಕೂಲವಾಗುವಂತಹ ನೀರಾವರಿ ಯೋಜನೆಯನ್ನು ಜಾರಿಗೆ ತರಬೇಕು. ಅಲ್ಲದೇ ಮೈಸೂರು ಮತ್ತು ಚಾ.ನಗರ ಭಾಗಕ್ಕೆ ಎರಡನೇ ಹಂತದ ಕುಡಿಯುವ ಕಬಿನಿ ನೀರನ್ನು ಅನುಷ್ಠಾನ ಮಾಡಲು ಜಿಲ್ಲೆಯಲ್ಲಿ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಕ್ರಮವಹಿಸಬೇಕು ಎಂದರು.

ರಾಜ್ಯದಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಮುಂದುವರಿಸಬೇಕು. ಮಾನವ ವನ್ಯಜೀವಿಗಳ ಸಂಘರ್ಷಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರೈಲ್ವೇ ಬ್ಯಾರಿಕೇಡ್ ಅಳವಡಿಕೆ ಅಥವಾ ಸೋಲಾರ್ ಬೇಲಿಯನ್ನು ನಿರ್ಮಿಸಬೇಕು. ತಾಲೂಕಿನ ಕಾಳನಹುಂಡಿ ಬಳಿ ಇರುವ ತೆಂಗು ಸಂಸ್ಕರಣಾ ಘಟಕದ ಅಭಿವೃದ್ಧಿಗೆ ಸರ್ಕಾರ ನೀಡಿರುವ ಬಡ್ಡಿ ರಹಿತ ಸಾಲವನ್ನು ಮನ್ನಾ ಮಾಡಬೇಕು ಎಂದರು.

ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ, ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡುವ ಮೂಲಕ ಜನರ ಹಣವನ್ನು ಪೋಲು ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಹೊರ ರಾಜ್ಯಗಳಲ್ಲಿ 1800 ರು.ಗೆ. ಅಳವಡಿಕೆ ಮಾಡುತ್ತಿರುವ ಈ ಮೀಟರ್‌ಗೆ ನಮ್ಮ ರಾಜ್ಯದಲ್ಲಿ ಹೆಚ್ಚುವರಿ ಹಣವನ್ನು ಪಡೆಯಲಾಗುತ್ತಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಕಾಯಂ ಸದಸ್ಯ ಹೆಬ್ಬಸೂರು ಬಸವಣ್ಣ, ರಾಜ್ಯ ಸಂಚಾಲಕ ಯಶ್ವಂತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಮುಖಂಡ ಜಯರಾಜು ಇದ್ದರು.