ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಮುಡಾ ಹಗರಣದ ವಿರುದ್ಧ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಳೆಯ ನಡುವೆಯೂ ಪ್ರತಿಭಟನೆ ನಡೆಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.ಮುಡಾ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಇಂಧನ ಬೆಲೆ ಏರಿಕೆ ಖಂಡಿಸಿ ಕೊಡಗಿನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ವಿರೋಧ ಪಕ್ಷದ ಪ್ರತಿಭಟನೆಯನ್ನು ಹತ್ತಿಕ್ಕಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್, ಸುಬ್ರಮಣ್ಯ ಉಪಾಧ್ಯಾಯ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಚಲನ್ ಕುಮಾರ್, ಉಪಾಧ್ಯಕ್ಷ ಮನು ಮಂಜುನಾಥ್, ನಗರ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ನಗರಾಧ್ಯಕ್ಷೆ ವಿ.ಬಿ.ಸೌಮ್ಯ, ಪ್ರಮುಖರಾದ ಬೊಳ್ಳಜಿರ ಬಿ.ಅಯ್ಯಪ್ಪ, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
;Resize=(128,128))
;Resize=(128,128))