ಚಿಕ್ಕಮಗಳೂರುಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಚಿಕ್ಕಮಗಳೂರಿನ ೧೫೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಚಿಕ್ಕಮಗಳೂರಿನ ಆಜಾದ್ ಪಾಕ್ ನಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಚಿಕ್ಕಮಗಳೂರಿನ ೧೫೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಚಿಕ್ಕಮಗಳೂರಿನ ಆಜಾದ್ ಪಾಕ್ ನಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಜ್ಯೋತಿರಾವ್ ಫುಲೆ, ಸಾವಿತ್ರಿಬಾಯಿ ಫುಲೆ ತಮ್ಮ ಜೀವನವನ್ನೇ ಶಾಲೆಗಳಿಗೆ ಅರ್ಪಿಸಿದರು. ಕಳೆದ ಬಿಜೆಪಿ ಸರ್ಕಾರ ಸಂಯೋಜನೆ ಹೆಸರಿನಲ್ಲಿ 13800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿತ್ತು. ಆಗ ಇಡೀ ರಾಜ್ಯದಾದ್ಯಂತ ಹೋರಾಟ ಮಾಡಿ ಸರ್ಕಾರಿ ಶಾಲೆಗಳನ್ನು ಉಳಿಸಿದ್ದೆವು. ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಯಡಿ 40 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಒಟ್ಟಾರೆ ಎಲ್ಲ ಸರ್ಕಾರಗಳ ಅಂತಿಮ ಗುರಿ ಸರ್ಕಾರಿ ಶಾಲೆಗಳನ್ನು ಮುಚ್ಚಿ, ಬಡ ವಿದ್ಯಾರ್ಥಿಗಳಿಂದ ಶಿಕ್ಷಣ ಕಸಿದುಕೊಳ್ಳುವುದೇ ಆಗಿದೆ ಎಂದು ಎಐಡಿಎಸ್‌ಒ ರಾಜ್ಯಾಧ್ಯಕ್ಷೆ ಕೆ.ಎಸ್.ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದರು.ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸರ್ಕಾರ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನಿಂದ ₹2500 ಕೋಟಿ ಸಾಲ ಮಾಡಿ ತೆರೆಯುತ್ತಿದೆ. ಖಾಸಗಿ ಬ್ಯಾಂಕಿನಿಂದ ಸಾಲ ಪಡೆದು ಸರ್ಕಾರಿ ಶಾಲೆಗಳನ್ನು ನಡೆಸುವಂತಹ ಕೆಟ್ಟ ಪರಿಸ್ಥಿತಿಗೆ ಸರ್ಕಾರ ಬಂದಿದೆಯೇ ಎಂದು ಪ್ರಶ್ನಿಸಿದ ಅವರು, ನಾವು ಕಟ್ಟುತ್ತಿರುವ ತೆರಿಗೆಯು ಸಾಲುತ್ತಿಲ್ಲವೇ ಎಂದು ಟೀಕಿಸಿದರು.
ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಹೊರಗುತ್ತಿಗೆ ನೀಡಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನಾಗಿ ಪರಿವರ್ತಿಸುವ ಹುನ್ನಾರವನ್ನು ಸರ್ಕಾರ ಮಾಡುತ್ತಿದೆ. ಪ್ರತಿಯೊಂದು ಕಿಲೋಮೀಟರ್ ವ್ಯಾಪ್ತಿಯ ಒಳಗೆ ಪ್ರಾಥಮಿಕ ಶಾಲೆ ಇರಬೇಕೆನ್ನುವ ಶಿಕ್ಷಣ ಹಕ್ಕು ಕಾಯ್ದೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಉಲ್ಲಂಘಿಸುತ್ತದೆ ಎಂದರು.ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ೧೫ ಮ್ಯಾಗ್ನೆಟ್ ಶಾಲೆಗಳನ್ನು ಆಯ್ಕೆ ಮಾಡಿ ೧೫೦ಕ್ಕೂ ಹೆಚ್ಚು ಶಾಲೆಗಳನ್ನು ವಿಲೀನ ಮಾಡುವ ನೆಪದಲ್ಲಿ ಮುಚ್ಚಲಾಗುತ್ತಿದೆ. ಗುಡ್ಡಗಾಡು ಪ್ರದೇಶ. ಎಷ್ಟೋ ಹಳ್ಳಿ ಗಳಿಗೆ ನಡೆದು ಹೋಗಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ರಸ್ತೆಗಳಿವೆ. ಹೀಗಿದ್ದ ಪರಿಸ್ಥಿತಿಯಲ್ಲಿ ಬಸ್ ವ್ಯವಸ್ಥೆಯನ್ನು ಸರ್ಕಾರ ಹೇಗೆ ಒದಗಿಸಲು ಸಾಧ್ಯ ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಸುನೀಲ್, ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಹೊನ್ನೇಶ್, ಎಐಡಿಎಸ್‌ಒ ಜಿಲ್ಲಾ ಸಂಘಟನಾಕಾರ ಸುನೀಲ್, ಡಿಎಸ್‌ಎಸ್ ಮುಖಂಡ ಲಕ್ಷ್ಮಣ್, ಪ್ರಮುಖರಾದ ಹರೀಶ್, ಚೇತನ್, ಯೋಗೇಶ್, ಅಭಿಷೇಕ್, ಚೈತ್ರಾ ಮತ್ತಿತರರಿದ್ದರು.ಫೋಟೋ:ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಚಿಕ್ಕಮಗಳೂರಿನ 150 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಚಿಕ್ಕಮಗಳೂರಿನ ಆಜಾದ್ ಪಾರ್ಕ್ನಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.