ಜಪಾನ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಹುರಾಷ್ಟ್ರೀಯ ಕಂಪನಿಗಳ ಆರ್ಥಿಕ ನೆರವಿನೊಂದಿಗೆ ಕಾರ್ಯನಿರ್ವಹಿಸುವ ಎಡಿಬಿಯಿಂದ ನಮ್ಮೂರ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಾಲ ಪಡೆಯಲಾಗುತ್ತಿದೆಯೇ ಅಥವಾ ಶಿಕ್ಷಣ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅನುಷ್ಠಾನಕ್ಕಾಗಿ ಏಷ್ಯನ್ ಅಭಿವೃದ್ಧಿ ಬ್ಯಾಂಕ್ನಿಂದ (ಎಡಿಬಿ) ಸಾಲ ಪಡೆಯಲು ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದಗಳನ್ನು ವಿರೋಧಿಸಿ ಎಐಡಿಎಸ್ಒ ಮಾದಯ್ಯನಹುಂಡಿ ಗ್ರಾಮದಲ್ಲಿ ಪ್ರತಿಭಟಿಸಲಾಯಿತು.

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, ಎಡಿಬಿಯಿಂದ ಪಡೆದಿರುವ ಸಾಲದ ಷರತ್ತುಗಳನ್ನು ಪೂರೈಸುವ ನೆಪದಲ್ಲಿ ಸರ್ಕಾರವು ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ವಶಕ್ಕೆ ಒಪ್ಪಿಸಲು ಮುಂದಾಗಿದೆ ಎಂದು ಆರೋಪಿಸಿದರು.

ಜಪಾನ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಹುರಾಷ್ಟ್ರೀಯ ಕಂಪನಿಗಳ ಆರ್ಥಿಕ ನೆರವಿನೊಂದಿಗೆ ಕಾರ್ಯನಿರ್ವಹಿಸುವ ಎಡಿಬಿಯಿಂದ ನಮ್ಮೂರ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಾಲ ಪಡೆಯಲಾಗುತ್ತಿದೆಯೇ ಅಥವಾ ಶಿಕ್ಷಣ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಸಾಲ ಪಡೆಯಲು ರಾಜ್ಯ ಸರ್ಕಾರ ಎಡಿಬಿಯೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಮುಂದಿನ ದಿನಗಳಲ್ಲಿ ಶಿಕ್ಷಕರ ನೇಮಕಾತಿಯನ್ನು ಕೆಪಿಎಸ್ ಶಾಲೆಗಳಿಗೆ ಮಾತ್ರ ಸೀಮಿತಗೊಳಿಸುವುದು ಹಾಗೂ 2030ರ ನಂತರ ಈ ಶಾಲೆಗಳಿಗೆ ಸರ್ಕಾರದ ಅನುದಾನ ಸ್ಥಗಿತಗೊಳಿಸುವ ಷರತ್ತುಗಳಿವೆ ಎಂದು ಆರೋಪಿಸಿದ ಅವರು, ಇಂತಹ ಕ್ರಮಗಳು ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಶಾಲೆಯ ಮೇಲ್ಛಾವಣಿ ಕುಸಿತ:

ಇದೇ ವೇಳೆ ಮಾದಯ್ಯನಹುಂಡಿ ಗ್ರಾಮದ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೊಳಗಾಗಿದ್ದಾರೆ. ಈ ಕುರಿತು ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಅಧಿಕಾರಿಗಳು ಶಾಲೆಯ ಮೇಲ್ಛಾವಣಿಯನ್ನು ದುರಸ್ತಿಗೊಳಿಸಿ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಎಐಡಿಎಸ್ಒ ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ, ಪದಾಧಿಕಾರಿ ನಂದೀಶ್, ಗ್ರಾಮಸ್ಥರು ಭಾಗವಹಿಸಿದ್ದರು.