ಸಾರಾಂಶ
ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಕೊಪ್ಪಳ
ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.ಅಶೋಕ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರಾಜೀನಾಮೆ ಪಡೆಯುವಂತೆ ಆಗ್ರಹಿಸಲಾಯಿತು.
ದೇಶದ ಪವಿತ್ರ ಸ್ಥಾನ ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಹಗುರುವಾಗಿ ಮಾತನಾಡಿದ್ದಾರೆ. ಅಂಬೇಡ್ಕರ್ ಎನ್ನುವುದು ಪ್ಯಾಷನ್ ಆಗಿದೆ. ಆ ಹೆಸರು ಸ್ಮರಣೆ ಬದಲು ದೇವರ ಹೆಸರು ಸ್ಮರಣೆ ಮಾಡಿ ಸ್ವರ್ಗ ಸಿಗುತ್ತೆ ಎಂದೆಲ್ಲ ಹೇಳುವ ಮೂಲಕ ಅಂಬೇಡ್ಕರ್ ಅವರ ವ್ಯಕ್ತಿತ್ವಕ್ಕೆ ಅಪಮಾನ ಮಾಡಿದ್ದಾರೆ. ಇದನ್ನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.ಇದು ಕೇವಲ ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನ ಅಲ್ಲ, ಅವರು ದೇಶಕ್ಕೆ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿಕೊಟ್ಟ ಸಂವಿಧಾನ ಶಿಲ್ಪಿ ಬಾಬಾ ಸಾಹೇಬರ ಬಗ್ಗೆ ಇಷ್ಟೊಂದು ಹಗುರ ಮಾತನಾಡಿದ್ದು ಸರಿಯಲ್ಲ. ಕೂಡಲೇ ಅವರು ದೇಶದ ಜನರ ಕ್ಷಮೆ ಕೇಳುವ ಜೊತೆಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವರ ರಾಜಿನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
ಸಂಸದರಾಗಿದ್ದ ವೇಳೆಯಲ್ಲಿಯೇ ಅನಂತ್ ಕುಮಾರ ಹೆಗಡೆ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದಿದ್ದರು. ಈಗ ಅಂಬೇಡ್ಕರ್ ಬಗ್ಗೆ ಶಾ ಹಗುರವಾಗಿ ಮಾತನಾಡಿ, ತಮ್ಮತನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಈ ಧೋರಣೆ ಸಹಿಸಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂಥಹ ಮಾತುಗಳಿಗೆ ಎಂದೂ ಅವಕಾಶ ಮಾಡಿಕೊಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಶಾ ಅವರ ಭಾವಚಿತ್ರ ದಹಿಸಿದರು.ಬಸವರಾಜ ಶೀಲವಂತರ್, ಕರಿಯಪ್ಪ ಗುಡಿಮನಿ, ಸುಂಕಪ್ಪ ಮೀಸೆ ಸೇರಿದಂತೆ ಇತರರು ಪಾಲ್ಗೊಂಡಿದ್ದರು.