ಡಿಸಿ ಕಚೇರಿ ಸುತ್ತ ಉರುಳು ಸೇವೆ ಮಾಡಿ ಪ್ರತಿಭಟನೆ

| Published : Nov 28 2024, 12:32 AM IST

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ನಗರದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯನ್ನು ದೊಡ್ಡಬಳ್ಳಾಪುರ ಅಥವಾ ಜಿಲ್ಲಾಧಿಕಾರಿಗಳ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಸುತ್ತಲು ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು.

ದೊಡ್ಡಬಳ್ಳಾಪುರ: ಬೆಂಗಳೂರು ನಗರದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯನ್ನು ದೊಡ್ಡಬಳ್ಳಾಪುರ ಅಥವಾ ಜಿಲ್ಲಾಧಿಕಾರಿಗಳ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಸುತ್ತಲು ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು.

ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ರೈತರು ಉರುಳು ಸೇವೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಬಾಶೆಟ್ಟಿಹಳ್ಳಿ ಬಳಿಯ ಕಾರ್ಖಾನೆಗಳಲ್ಲಿ ಉತ್ಪತ್ತಿಯಾಗುವ ರಾಸಾಯನಿಕ ತ್ಯಾಜ್ಯ ನೀರನ್ನು ರಾಜಕಾಲುವೆ ಮುಖಾಂತರ ಕೆರೆಗಳಿಗೆ ಬಿಡುತ್ತಿದ್ದು ಸಾಕ್ಷಿ ಸಮೇತ ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೀಡಿದರೂ ಏನು ಪ್ರಯೋಜನವಾಗುತ್ತಿಲ್ಲ. ರಾಸಾಯನಿಕ ತ್ಯಾಜ್ಯ ನೀರನ್ನು ಕೆರೆಗಳಿಗೆ ಬಿಡುತ್ತಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತೆ ಅಂತರ್ಜಲವೂ ಕೂಡ ಕಲುಷಿತಗೊಂಡಿದೆ. ಇದಕ್ಕೆ ಪ್ರಮುಖ ಕಾರಣ ಮಾಲಿನ್ಯ ನಿಯಂತ್ರಣ ಮಂಡಳಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಾರ್ಯನಿರ್ವಹಿಸದೆ ಇರುವುದು ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ ಇದರ ಕಚೇರಿ ಇರುವುದರಿಂದ ಸೂಕ್ತಸಮಯಕ್ಕೆ ಅಧಿಕಾರಿಗಳು ಬರಲು ಸಾಧ್ಯವಾಗುತ್ತಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮಿತಿಯು ನಿರಂತರವಾಗಿ ಜಿಲ್ಲಾಧಿಕಾರಿಗಳಿಗೆ ಬರವಣಿಗೆ ಮುಖಾಂತರ ದೂರಗಳನ್ನು ನೀಡಿದೆ. ಹೋರಾಟ ಸಮಿತಿಯ ಜೊತೆ ಸಭೆ ನಡೆದಾಗೆಲ್ಲಾ ಮೌಖಿಕವಾಗಿಯೂ ತಿಳಿಸಲಾಗಿದೆ. ಆದರೂ ಪ್ರಯೋಜನವಾಗಿಲ್ಲ. ಹಾಗಾಗಿ ಅರ್ಕಾವತಿ ನದಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಲು ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗಿದೆ ಎಂದು ಹೋರಾಟಗಾರರು ತಿಳಿಸಿದರು.

ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯನ್ನು ಸ್ಥಳೀಯವಾಗಿ ತೆರೆಯುವಂತೆ ಮಾಡಬೇಕು ಇಲ್ಲವಾದಲ್ಲಿ ನಮ್ಮ ಹೋರಾಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಸತೀಶ್, ವಸಂತ್ ಕುಮಾರ್, ರಮೇಶ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಫೋಟೋ-

27ಕೆಡಿಬಿಪಿ4- ಮಾಲಿನ್ಯ ನಿಯಂತ್ರಣ ಮಂಡಲಿಯನ್ನು ದೊಡ್ಡಬಳ್ಳಾಪುರ ಅಥವಾ ಜಿಲ್ಲಾಧಿಕಾರಿಗಳ ಕಚೇರಿಗೆ ವರ್ಗಾಯಿಸಲು ಒತ್ತಾಯಿಸಿ ಉರುಳು ಸೇವೆ ಮೂಲಕ ಪ್ರತಿಭಟನೆ ನಡೆಸಲಾಯಿತು.

--

27ಕೆಡಿಬಿಪಿ5- ಉರುಳುಸೇವೆ ಮೂಲಕ ಪ್ರತಿಭಟನೆ ನಡೆಸಿದ ಹೋರಾಟಗಾರರು ಅಪರ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದರು.