ಸಾರಾಂಶ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತಪರ ಸಂಘಟನೆಗಳ ನೇತೃತ್ವದಲ್ಲಿ ರೈತರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಭಾರತದ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೆ ನೀಡಿರುವ ಕೆನರಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ವಿವಿಧ ರೈತಪರ ಸಂಘಟನೆಗಳ ನೇತೃತ್ವದಲ್ಲಿ ರೈತರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದ ಅನಂತಕುಮಾರ್ ಹೆಗಡೆ ಪದೇ ಪದೆ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೆ ನೀಡುತ್ತಿರುವುದು ಅವರ ಘನತೆಗೆ ಶೋಭೆ ತರದು. ಸಂವಿಧಾನಕ್ಕೆ ಅಪಚಾರ ಮಾಡುತ್ತಿರುವ ಅವರ ವಿರುದ್ಧ ಕೂಡಲೇ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಸಕ್ತ 2023-24ನೇ ಮುಂಗಾರು ಹಂಗಾಮಿನ ಬೆಳೆವಿಮೆ ಮತ್ತು ಬರದಿಂದ ಹಾನಿಗೀಡಾದ ಬೆಳೆಗಳ ಸಿಸಿ ಪ್ರಾತ್ಯಕ್ಷಿಕೆಯನ್ನು ಪ್ರತ್ಯಕ್ಷವಾಗಿ ಸಾದರ ಪಡಿಸಬೇಕು. ಖಾಸಗಿ ಹಣಕಾಸು ಸಂಸ್ಥೆ ಮತ್ತು ಮೈಕ್ರೋ ಫೈನಾನ್ಸ್‌ಗಳಿಂದ ಸಾಲ ನೀಡುವ ಮಿತಿ ನಿಗದಿಗೊಳಿಸಬೇಕು. ರೈತರ, ಕೃಷಿ ಕಾರ್ಮಿಕರ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕುಂದುಕೊರತೆ ನಿವಾರಣಾ ಸಮಿತಿ ರಚಿಸಿಬೇಕು. ಪ್ರತಿ ವರ್ಷ ಬೆಳೆ ವಿಮಾ ಮುಂಗಾರು ಮತ್ತು ಹಿಂಗಾರು ಎರಡು ಅವಧಿಯಲ್ಲಿ ವಿಮಾ ಕಂಪನಿಯಿಂದ ಸರಿಯಾದ ಬೆಳೆನಷ್ಟ ಪರಿಹಾರ ಕೊಡದೆ ಇರುವುದರಿಂದ ಎಲ್ಲಾ ರೈತರಿಗೆ ಗೊಂದಲ ಉಂಟಾಗುತ್ತಿದೆ. ಸಂಬಂಧಿಸಿದ ವಿಮಾ ಕಂಪನಿಯಿಂದ ಸ್ಪಷ್ಟ ಮಾಹಿತಿ ಇರುವುದಿಲ್ಲ. ಇದರ ಸತ್ಯಾಸತ್ಯತೆ ತಿಳಿದುಕೊಳ್ಳಲು ತುರ್ತಾಗಿ ಸಭೆ ಕರೆಯಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.ನರೇಗಾ ಕೂಲಿ ಕಾರ್ಮಿಕರು ಕಳೆದ ಮೂರು ತಿಂಗಳಿಂದ ಕೆಲಸ ಮಾಡಿದರೂ ಈವರೆಗೆ ಕೂಲಿ ಹಣ ಬಂದಿಲ್ಲ. ಕೂಡಲೇ ಕೂಲಿ ಹಣ ಪಾವತಿಸಲು ಕ್ರಮ ಕೈಗೊಳ್ಳಬೇಕು. 2016-17ನೇ ಸಾಲಿನ ಮುಂಗಾರು ಹಂಗಾಮಿನ ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ 30 ಜನ ರೈತರ ಬೆಳೆ ವಿಮಾ ಬಿಡುಗಡೆ ಮತ್ತು ಜಿಲ್ಲಾ ಗ್ರಾಹಕರ ವ್ಯಾಜ್ಯದಿಂದ ನ್ಯಾಯ ಸಮ್ಮತ ಪರಿಹಾರ ಬಿಡುಗಡೆ ಮಾಡಲು ಜಿಲ್ಲಾಡಳಿತ ಮಧ್ಯಸ್ಥಿಕೆ ವಹಿಸಬೇಕು, ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಬಳಿಯ ರೈತರ ಜಮೀನುಗಳಿಗೆ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ, ಕರ್ನಾಟಕ ರೈತ ಕಾರ್ಮಿಕ ಹಾಗೂ ಮಹಿಳಾ ಸಂಘಧ ರಾಜ್ಯಾಧ್ಯಕ್ಷ ಜಯಶ್ರೀ ಗುರನ್ನವರ, ಶಿವಲೀಲಾ ಮೀಸಲೆ, ಸಂಜಯ ಡೊಂಗರಗಾವಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.