ಸಾರಾಂಶ
ಹಾವೇರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ರಾಜ್ಯ ಸರ್ಕಾರ ಪ್ರತಿಭಟನೆ ನಡೆಸದಂತೆ ತಡೆದಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶುಕ್ರವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಕೃತಿ ದಹನಕ್ಕೆ ಮುಂದಾದರು. ಆಗ ಪೊಲೀಸರು ಸಿಎಂ ಸಿದ್ದರಾಮಯ್ಯನವರ ಪ್ರತಿಕೃತಿ ದಹನಕ್ಕೆ ಅವಕಾಶ ಕೊಡದಿದ್ದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಒಂದು ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಮಾತನಾಡಿ, ಮೈಸೂರಿನ ಮುಡಾ ಅವ್ಯವಹಾರದ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರತಿಭಟನೆಯನ್ನು ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆ ದುರ್ಬಳಕೆ ಮಾಡಿಕೊಂಡು ಪ್ರತಿಭಟನೆ ಹತ್ತಿಕ್ಕಲು ಯತ್ನಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಹೋಗುವ ಮಧ್ಯದಲ್ಲಿ ಅವರನ್ನು ವಶಕ್ಕೆ ಪಡೆದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ದೂರಿದರು.ಸಿಎಂ ಸಿದ್ದರಾಮಯ್ಯನವರು ಹಾಗೂ ಅವರ ಧರ್ಮಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಮುಡಾದಲ್ಲಿ ಅಕ್ರಮವಾಗಿ ನಿವೇಶನ ಪಡೆದಿರುವುದು ಅಕ್ಷಮ್ಯ ಅಪರಾಧ ಮತ್ತು ಖಂಡನೀಯ. ಈ ಹಗರಣವನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ಮಾಡಲು ರಾಜ್ಯ ಸರ್ಕಾರ ಈ ಕೂಡಲೇ ಅವಕಾಶ ಮಾಡಬೇಕು ಎಂದು ಒತ್ತಾಯಿಸಿದ ಅವರು, ಮುಡಾ ಹಗರಣದಲ್ಲಿ ಸಾವಿರಾರು ಕೋಟಿ ರು. ಅವ್ಯವಹಾರ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.ಈ ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂಜುಂಡೇಶ ಕಳ್ಳೇರ, ಡಾ. ಸಂತೋಷ ಆಲದಕಟ್ಟಿ, ನಗರ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ, ಗ್ರಾಮೀಣ ಮಂಡಲ ಅಧ್ಯಕ್ಷ ಬಸವರಾಜ ಕಳಸೂರ, ಜಿಲ್ಲಾ ವಕ್ತಾರ ನಿರಂಜನ ಹೇರೂರ, ಪ್ರಭು ಹಿಟ್ನಳ್ಳಿ, ನಾಗೇಂದ್ರ ಕಡಕೋಳ, ಪರಮೇಶ್ವರಪ್ಪ ಮೇಗಳಮನಿ, ವೆಂಕಟೇಶ ನಾರಾಯಣಿ, ಬಸವರಾಜ ಹಾಲಪ್ಪನವರ, ಕಿರಣ ಕೋಣನವರ, ಲಲಿತಾ ಗುಂಡೇನಹಳ್ಳಿ, ನಾಗರಾಜ ಬಸೇಗಣ್ಣಿ, ನಿಂಗರಾಜ ಸಾತೇನಹಳ್ಳಿ ಇತರರು ಪಾಲ್ಗೊಂಡಿದ್ದರು.