ಸಾರಾಂಶ
ಹಾವೇರಿ: ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಕೂಡಲೇ ಈ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು, ಅಹಿಂದ ಸಂಘಟನೆಗಳ ಕಾರ್ಯಕರ್ತರು, ಸಿದ್ದರಾಮಯ್ಯ ಬೆಂಬಲಿಗರು ನಗರದ ಮುರುಘರಾಜೇಂದ್ರ ಮಠದಿಂದ ಪ್ರತಿಭಟನಾ ರ‍್ಯಾಲಿ ಮೂಲಕ ನಗರದ ಪ್ರಮುಖ ರಸ್ತೆಯಲ್ಲಿ ಸಾಗಿ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿದರು. ಸಿಎಂ ಸಿದ್ದರಾಮಯ್ಯ ಬೆಂಬಲಿಸಿ, ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿ ಕೆಲಕಾಲ ಸಂಚಾರಕ್ಕೆ ತಡೆಯೊಡ್ಡಿದರು. ರಾಜ್ಯಪಾಲರ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, ೨೦೧೪ರಿಂದ ಈಚೆಗೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಚಾರ ಎಸಗಿ ವಾಮಮಾರ್ಗದಿಂದ ಅಧಿಕಾರ ಹಿಡಿಯುವ ಕುತಂತ್ರ ನಡೆದಿದೆ. ಕೇಂದ್ರದ ಬಿಜೆಪಿ ಸರ್ಕಾರ ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಉತ್ತರಖಂಡ, ಮಣಿಪುರ ಸೇರಿದಂತೆ ಅನೇಕ ರಾಜ್ಯಗಳಲ್ಲಿನ ಸರ್ಕಾರ ಕಿತ್ತು ಅಲ್ಲಿನ ಶಾಸಕರನ್ನು ಖರೀದಿಸಿ ಬಿಜೆಪಿ ಸರ್ಕಾರ ರಚಿಸಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚಿಸಿತ್ತು. ಆಗ ಬಿಜೆಪಿ ವಿರುದ್ಧ ಕಿಡಿಕಾರಿದ್ದ ಕುಮಾರಸ್ವಾಮಿ ಈಗ ಬಿಜೆಪಿ ಜತೆ ಸೇರಿದ್ದಾರೆ ಎಂದು ಕುಟುಕಿದರು.ರಾಜ್ಯದಲ್ಲಿ ಬಿಜೆಪಿ ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ, ನಮ್ಮ ಮಕ್ಕಳನ್ನೇ ದತ್ತು ಪಡೆದು ಬಿಜೆಪಿ ಅಧಿಕಾರ ಹಿಡಿದಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಮುಡಾದಲ್ಲಿ ಸಿದ್ದರಾಮಯ್ಯನವರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಆಗ ಇಲ್ಲಿಯ ಸಂಸದರೇ ಆಗಿರುವ ಬಸವರಾಜ ಬೊಮ್ಮಾಯಿ ಸಿಎಂ ಇದ್ದರು. ಈಗ ಸರ್ಕಾರವನ್ನು ಅಸ್ಥಿರಗೊಳಿಸುವ ಕುತಂತ್ರದ ಫಲವಾಗಿ ರಾಜಭವನವನ್ನು ದುರುಪಯೋಗ ಪಡೆಸಿಕೊಂಡು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದರೂ ನ್ಯಾಯಾಂಗ ಇನ್ನೂ ಜೀವಂತವಾಗಿದೆ. ಸಿಎಂ ಸಿದ್ದರಾಮಯ್ಯನವರ ಬೆಂಬಲಕ್ಕೆ ಪಕ್ಷದ ಶಾಸಕರಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.ಶಾಸಕ ಯು.ಬಿ. ಬಣಕಾರ ಮಾತನಾಡಿ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ನಾಯಕರಾಗಿದ್ದು, ಅನೇಕ ಭಾಗ್ಯಗಳನ್ನು ಕೊಟ್ಟು ಜನಪ್ರಿಯತೆ ಗಳಿಸಿದ್ದಾರೆ. ಅವರ ಬೆನ್ನ ಹಿಂದೆ ಎಲ್ಲ ಶಾಸಕರೂ ಇದ್ದೇವೆ. ಅವರ ಹೆಸರಿಗೆ ಕಳಂಕ ತರುವ ಕೆಲಸವನ್ನು ಬಿಜೆಪಿ-ಜೆಡಿಎಸ್ ಮಾಡುತ್ತಿದೆ. ಏನೂ ಇಲ್ಲದ ಪ್ರಕರಣಕ್ಕೆ ಈಗ ಮರುಜೀವ ಕೊಟ್ಟಿದ್ದಾರೆ. ಕೂಡಲೇ ಈ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಬೇಕು. ಅವರನ್ನು ಬೇರೆ ಯಾವ ರಾಜ್ಯಕ್ಕೂ ಗೌರ್ನರ್ ಮಾಡಬಾರದು. ನಮ್ಮ ಸರ್ಕಾರ ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು. ಮಾಜಿ ಶಾಸಕರಾದ ನೆಹರು ಓಲೇಕಾರ, ಆರ್. ಶಂಕರ ಮಾತನಾಡಿ, ಸಿಎಂ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ, ಆದರೆ, ರಾಜ್ಯಪಾಲರು ಕೇಂದ್ರ ಸರ್ಕಾರದ ಮಾತು ಕೇಳಿ ತಪ್ಪು ಮಾಡಿದ್ದಾರೆ. ಸಿದ್ದರಾಮಯ್ಯನವರ ಬೆಳವಣಿಗೆ ಸಹಿಸದ ಬಿಜೆಪಿಗರು ಹೀಗೆ ಕುತಂತ್ರ ಮಾಡಿ ಮಾಡಿ ಸಿಎಂ ಸ್ಥಾನದಿಂದ ಕೆಳಗಿಳಿಸುವ ಹುನ್ನಾರ ನಡೆಸಿದ್ದಾರೆ. ಆದರೆ, ಅದು ಫಲಿಸುವುದಿಲ್ಲ ಎಂದರು. ಬಳಿಕ ಅಪರ ಜಿಲ್ಲಾಧಿಕಾರಿ ವೀರಮಲ್ಲಪ್ಪ ಪೂಜಾರ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ, ಶಾಸಕರಾದ ರುದ್ರಪ್ಪ ಲಮಾಣಿ, ಗ್ಯಾರಂಟಿ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌ಎಫ್‌ಎನ್ ಗಾಜೀಗೌಡ್ರ, ಪ್ರಮುಖರಾದ ಕೊಟ್ರೇಶಪ್ಪ ಬಸೇಗಣ್ಣಿ, ಪ್ರಕಾಶಗೌಡ ಪಾಟೀಲ, ಎಂ.ಎಂ. ಮೈದೂರು ಇತರರು ಇದ್ದರು.