ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಪೈಪ್‌ಲೈನ್‌ಗಳನ್ನು ಹಾಳುಮಾಡಿದ ಪರಿಣಾಮ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಸ್ತಿನಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದರೂ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳು ಮುಂದಾಗಿಲ್ಲ ಎಂದು ಆರೋಪಿಸಿ ಪೀಕಾರ್ಡ್ ಬ್ಯಾಂಕ್ ನಿರ್ದೇಶಕ ಹಳೇಹಟ್ಟಿ ಆನಂದ ನಾಯ್ಕ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಸಖರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಪೈಪ್‌ಲೈನ್ ಹಾನಿಯಿಂದ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು:

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಪೈಪ್‌ಲೈನ್‌ಗಳನ್ನು ಹಾಳುಮಾಡಿದ ಪರಿಣಾಮ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಸ್ತಿನಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದರೂ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳು ಮುಂದಾಗಿಲ್ಲ ಎಂದು ಆರೋಪಿಸಿ ಪೀಕಾರ್ಡ್ ಬ್ಯಾಂಕ್ ನಿರ್ದೇಶಕ ಹಳೇಹಟ್ಟಿ ಆನಂದ ನಾಯ್ಕ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಸಖರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಆನಂದ ನಾಯ್ಕ, ಖಾರ್ಖಾನೆ ಮೂಲೆ, ಹಸ್ತಿನಾಪುರ, ಜಾನ್ ಸಾಲೆ ಎಸ್ಟೇಟ್, ಹೊನ್ನಾವರಿಕೆ ಹಾಗೂ ಹೊಸೂರು ಗ್ರಾಮಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಬರ ಪರಿಸ್ಥಿತಿ ಒಂದೆಡೆಯಾದರೆ, ಗ್ರಾಮ ಪಂಚಾಯಿತಿಯಿಂದ ಕುಡಿಯುವ ನೀರಿಗಾಗಿ ಕೊರೆಸಿದ ಕೊಳವೆಬಾವಿಗಳಲ್ಲಿ ನೀರು ಲಭ್ಯವಾಗದಿದ್ದರೂ ನೀರು ಬಂದಿದೆ ಎಂದು ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಆರೋಪಿಸಿದರು.ಈ ಸಮಸ್ಯೆ ಕುರಿತು ಹಲವು ಬಾರಿ ಶಾಸಕ ಎಚ್.ಡಿ.ತಮ್ಮಯ್ಯ ಅವರ ಗಮನಕ್ಕೆ ತರಲಾಗಿದೆ. ತಾಲೂಕು ಪಂಚಾಯಿತಿ ಇಒ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಗ್ರಾಮಗಳಿಗೆ ನೀರು ಪೂರೈಸುತ್ತಿದ್ದ ಪೈಪ್‌ಲೈನ್ ಮತ್ತು ಸಿಸ್ಟನ್‌ಗಳನ್ನು ಹಾಳುಮಾಡಲಾಗಿದ್ದು, ಕಾಮಗಾರಿ ನಡೆಸಿದವರು ಅವುಗಳನ್ನು ಮರುಸ್ಥಾಪಿಸದ ಕಾರಣ ನೀರು ಸರಬರಾಜು ಸ್ಥಗಿತಗೊಂಡಿದೆ. ಇದಕ್ಕೆ ಕಾರಣರಾದವರ ವಿರುದ್ಧವೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.ಕೂಡಲೇ ಸಮಸ್ಯೆ ಪರಿಹರಿಸದಿದ್ದರೆ ಎಲ್ಲ ಗ್ರಾಮಸ್ಥರೊಂದಿಗೆ ಶಾಸಕರ ಮನೆಯ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.ಸಖರಾಯಪಟ್ಟಣದಲ್ಲಿ ವಾಹನ ದಟ್ಟಣೆ ಹಾಗೂ ಅಪಘಾತಗಳು ಹೆಚ್ಚುತ್ತಿರುವುದರಿಂದ ಸ್ಥಳೀಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು. ಹಲವು ಗ್ರಾಮಸ್ಥರಿಗೆ ನಿವೇಶನದ ಇ-ಸ್ವತ್ತು ದೊರೆತಿಲ್ಲ. ಈ ಸಮಸ್ಯೆಗಳಿಗೂ ಸಂಬಂಧಿಸಿದವರು ಸ್ಪಂದಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಪಂಚಾಯಿತಿ ಇಒ ಸಿ.ಆರ್.ಪ್ರವೀಣ್ ಹಾಗೂ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಎಸ್.ಆರ್.ಚೇತನ್, ಪ್ರಕಾಶ ನಾಯ್ಕ, ವೆಂಕಟೇಶ ನಾಯ್ಕ, ಶಕುಂತಲಾ ಪ್ರಕಾಶ ನಾಯ್ಕ, ಹೊಸೂರು ಚಂದ್ರು, ನಂದೀಶ್, ಲೋಕೇಶ್, ದೀಪಕ್, ಗೋವಿಂದ, ಜ್ಯೋತಿ ಬಾಯಿ, ರಮ್ಯಾ, ಮೀನಾಕ್ಷಿ ಬಾಯಿ, ಭಾಗ್ಯಾ ಬಾಯಿ, ಮಂಜುಳಾ ಬಾಯಿ ಮತ್ತಿತರರು ಪಾಲ್ಗೊಂಡಿದ್ದರು.

ಬಾಕ್ಸ್....ಪೈಪ್‌ಲೈನ್ ದುರಸ್ತಿಗೆ ಪ್ರಾಧಿಕಾರಕ್ಕೆ ಪತ್ರಈ ಕುರಿತು ಪ್ರತಿಕ್ರಿಯಿಸಿದ ಇಒ ಸಿ.ಆರ್.ಪ್ರವೀಣ್, ಗ್ರಾಮಗಳಿಗೆ ನೀರು ಪೂರೈಸುತ್ತಿದ್ದ ಪೈಪ್‌ಲೈನ್ ಮತ್ತು ಸಿಸ್ಟನ್‌ಗಳು ಹಾಳಾಗಿರುವುದರಿಂದ ಉಂಟಾದ ನಷ್ಟ ಭರಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಈವರೆಗೆ ಪ್ರತಿಕ್ರಿಯೆ ಬಂದಿಲ್ಲ. ಕೆಡಿಪಿ ಸಭೆಯಲ್ಲಿಯೂ ಈ ವಿಚಾರ ಪ್ರಸ್ತಾಪಿಸಲಾಗಿದೆ ಎಂದರು.ಸಖರಾಯಪಟ್ಟಣದವರೆಗೆ ಬಂದಿರುವ ಅಯ್ಯನಕೆರೆ ಪೈಪ್‌ಲೈನ್‌ನಿಂದ ಈ ಗ್ರಾಮಗಳಿಗೆ ನೀರು ಪೂರೈಸಲು ಯೋಜಿಸಲಾಗಿದೆ. ಐದು ಲಕ್ಷ ರೂ. ವೆಚ್ಚದಲ್ಲಿ ಪೈಪ್‌ಲೈನ್ ಅಳವಡಿಸಿ, ಗ್ರಾಮಗಳ ಬೀದಿಗಳಲ್ಲಿ ನೀರು ಪಡೆಯಲು ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.