ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ಡಿ. 15ರ ವರೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಸೋಮವಾರ ಮುನಿರಾಬಾದ್‌ನ ನೀರಾವರಿ ಇಲಾಖೆಯ ಮುಖ್ಯ ಅಭಿಯಂತರರ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಒಂದು ಸಾವಿರಕ್ಕೂ ಅಧಿಕ ರೈತರು ಪಾಲ್ಗೊಂಡಿದ್ದರು.

ಮುನಿರಾಬಾದ್: ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ಡಿ. 15ರ ವರೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಸೋಮವಾರ ಇಲ್ಲಿನ ನೀರಾವರಿ ಇಲಾಖೆಯ ಮುಖ್ಯ ಅಭಿಯಂತರರ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಒಂದು ಸಾವಿರಕ್ಕೂ ಅಧಿಕ ರೈತರು ಪಾಲ್ಗೊಂಡಿದ್ದರು. ಪ್ರತಿಭಟನೆಗೂ ಮುನ್ನ ರೈತರು ಕಂಪ್ಲಿಯಿಂದ ಪಾದಯಾತ್ರೆ ಮೂಲಕ ಭಾನುವಾರ ಸಂಜೆ ಮುನಿರಾಬಾದ್‌ಗೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಬಿ.ವಿ. ಗೌಡ, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನ. 20ರ ವರೆಗೆ ಮಾತ್ರ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ. ನ. 21ರಿಂದ ನೀರು ಸ್ಥಗಿತಗೊಳಿಸಿದರೆ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಬೆಳೆದಿರುವ ಭತ್ತ, ಜೋಳ ಹಾಗೂ ಮೆಣಸಿನಕಾಯಿ ಬೆಳೆಗಳು ಒಣಗಲಿವೆ. ಇದರಿಂದ ಸುಮಾರು ₹5 ಸಾವಿರ ಕೋಟಿ ಮೌಲ್ಯದ ಬೆಳೆ ನಷ್ಟವಾಗುವ ಆತಂಕವಿದೆ ಎಂದು ಹೇಳಿದರು.

ಡಿ. 15ರ ವರೆಗೆ ನೀರು ಹರಿಸಿದರೆ ಶೇ. 80ರಷ್ಟು ಬೆಳೆಗಳನ್ನು ಉಳಿಸಿಕೊಳ್ಳಬಹುದು. ಕಳೆದ ವರ್ಷ ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ ಹೊಸ ಗೇಟುಗಳ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ರೈತರಿಗೆ ಹಿಂಗಾರು ಬೆಳೆಗೆ ನೀರು ದೊರೆಯಲಿಲ್ಲ. ಇಲಾಖೆಗೆ ಸಹಕಾರ ನೀಡುವ ಉದ್ದೇಶದಿಂದ ರೈತರು ಬೆಳೆಯನ್ನೇ ತ್ಯಾಗ ಮಾಡಿದ್ದರು. ಈ ವರ್ಷವೂ ನೀರಿನ ಕೊರತೆ ಎದುರಾಗಿದ್ದು, ಡಿ. 15ರ ವರೆಗೆ ನೀರು ಹರಿಸದಿದ್ದರೆ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಕುಡಿಯುವ ನೀರಿಗಾಗಿ ಮೀಸಲಿಟ್ಟಿರುವ ನೀರಿನಲ್ಲಿ ಸ್ವಲ್ಪ ಪ್ರಮಾಣವನ್ನು ಕೃಷಿಗೆ ಬಳಸಿ ಡಿ. 15ರ ವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಮುಖ್ಯ ಅಭಿಯಂತರರಿಗೆ ಮನವಿ ಮಾಡಿದರು.

ಆಂಧ್ರದ ಪಾಲಿನ ನೀರು ಪಡೆಯಲು ಪ್ರಯತ್ನ: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಆಲಿಸಿದ ನೀರಾವರಿ ಇಲಾಖೆಯ ಮುಖ್ಯ ಅಭಿಯಂತರ ಮನೋಜ್ ಕುಮಾರ್, ನಾನು ರೈತನ ಮಗ. ರೈತರ ಕಷ್ಟ ನನಗೂ ಗೊತ್ತಿದೆ. ಪ್ರಸಕ್ತ ಸಾಲಿನಲ್ಲಿ ಭೀಕರ ಬರಗಾಲ ಇರುವುದರಿಂದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಕಳೆದ 60 ದಿನಗಳಿಂದ ಜಲಾಶಯಕ್ಕೆ ಒಂದು ಹನಿ ನೀರೂ ಹರಿದುಬಂದಿಲ್ಲ ಎಂದು ತಿಳಿಸಿದರು.

ತುಂಗಭದ್ರಾ ಅಂತಾರಾಜ್ಯ ಜಲಾಶಯವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಆಂಧ್ರಪ್ರದೇಶ ಕೃಷಿಗೆ ನೀರು ಬಳಸದೆ ಕೇವಲ ಕುಡಿಯುವ ಉದ್ದೇಶಕ್ಕೆ ಬಳಸುತ್ತಿದೆ. ನೀರಾವರಿ ಸಲಹಾ ಸಮಿತಿ ನಿರ್ಧಾರದಂತೆ ನ. 20ರ ವರೆಗೆ ನೀರು ಹರಿಸಲಾಗುವುದು ಎಂದರು.

ಡಿ. 15ರ ವರೆಗೆ ನೀರು ಹರಿಸುವಂತೆ ರೈತರು ಮಾಡಿರುವ ಮನವಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ ಅವರು ಉನ್ನತ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದಾರೆ. ಆಂಧ್ರಪ್ರದೇಶದ ಪಾಲಿನ ನೀರಿನಲ್ಲಿ ಸ್ವಲ್ಪ ಪ್ರಮಾಣವನ್ನು ಕರ್ನಾಟಕದ ರೈತರ ಕೃಷಿಗೆ ಬಳಸುವಂತೆ ಕೋರಿ ಅಲ್ಲಿನ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ನೀರಾವರಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿ, ರೈತರು ಸಹಕರಿಸುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಿ.ವಿ. ಗೌಡ, ಡಿ. 15ರ ವರೆಗೆ ನೀರು ಹರಿಸದಿದ್ದರೆ ರೈತರ ಬೆಳೆಗಳು ನಾಶವಾಗಿ ಅವರು ಹತ್ತು ವರ್ಷ ಹಿಂದಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ನೀರು ಹರಿಸುವ ಕುರಿತು ಸ್ಪಷ್ಟ ಭರವಸೆ ಸಿಗುವ ವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.