ಕನ್ನಡಪ್ರಭ ವಾರ್ತೆ ಮಂಡ್ಯ
ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ಕೆಆರ್‌ಎಸ್ ಮತ್ತು ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತಸಂಘದ ಕಾರ್ಯಕರ್ತರು ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಸೇರಿದ ರೈತಸಂಘದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗಳನ್ನು ಖಂಡಿಸಿದರು ಹಾಗೂ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ೭ ಗಂಟೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬೇಕು. ಈ ಹಿಂದೆ ಇದ್ದಂತೆಯೇ ಕೃಷಿ ಪಂಪ್‌ಸೆಟ್ ವಿದ್ಯುತ್ ಸಂಪರ್ಕಗಳ ಅಕ್ರಮ- ಸಕ್ರಮಕ್ಕೆ ರೈತರ ಪಾಲನ್ನು ಪಡೆದು ಉಳಿದ ಎಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಹಾಲಿ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆ ಮತ್ತು ಜನ- ಜಾನುವಾರುಗಳ ಕುಡಿಯುವ ನೀರಿಗಾಗಿ ಕೆಆರ್‌ಎಸ್ ಹೇಮಾವತಿ ಅಣೆಕಟ್ಟೆಗಳ ಮೂಲಕ ನಾಲೆಗಳಿಗೆ ಕನಿಷ್ಠ ಎರಡು ಕಟ್ಟು ನೀರು ಹರಿಸಬೇಕು, ಆ ಮೂಲಕ ರೈತರನ್ನು ರಕ್ಷಿಸಬೇಕು ಎಂದು ಕೋರಿದರು.ಪ್ರಕೃತಿ ವಿಕೋಪದಿಂದ ಬೆಳೆ ಹಾಗೂ ಮನೆಗಳಿಗೆ ಹಾನಿಯಾಗಿರುವ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು, ಭತ್ತ ಕಟಾವು ಯಂತ್ರಗಳಿಗೆ ಜಿಲ್ಲಾದ್ಯಂತ ಏಕರೀತಿಯ( ಪ್ರತಿ ಗಂಟೆಗೆ ₹೨೨೦೦ ) ಬಾಡಿಗೆ ದರ ನಿಗದಿಪಡಿಸುವುದು, ಈ ಸಂಬಂಧ ಯಂತ್ರಗಳ ಮಾಲೀಕರು ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳುವಂತೆ ಆಗ್ರಹಿಸಿದರು.
ಬ್ಯಾಂಕುಗಳು ಮತ್ತು ಮತ್ತು ಮೈಕ್ರೋ ಫೈನಾನ್ಸ್ ಹಾವಳಿ ತಡೆಗಾಗಿ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು, ಕೆ.ಆರ್. ಪೇಟೆಯಲ್ಲಿ ವಿದ್ಯುತ್ ಕೊರತೆ ನೀಗಿಸಲು ಕನಿಷ್ಠ ಎರಡು ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ರೈತಸಂಘದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎಸ್.ಲಿಂಗಪ್ಪಾಜಿ, ಖಜಾಂಚಿ ಎಸ್.ಕೆ.ರವಿಕುಮಾರ್, ವಿಜಯ್‌ಕುಮಾರ್, ಮರುವನಹಳ್ಳಿ ಶಂಕರ್ ಸೇರಿ ರೈತ ಮುಖಂಡರು, ಹೋರಾಟಗಾರರು ಮತ್ತು ರೈತ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.