ಸಾರಾಂಶ
ಸರ್ಕಾರ ಮಾನವೀಯತೆ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಸೇವೆ ಕಾಯಂಗೊಳಿಸುವುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಸರ್ಕಾರ ಮಾನವೀಯತೆ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು. ರಾಜ್ಯಾದ್ಯಂತ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೧೨ ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಕಡಿಮೆ ಗೌರವಧನ ಪಡೆಯುತ್ತಾರೆ. ಹಾಗಾಗಿ ಅತಿಥಿ ಉಪನ್ಯಾಸಕರಿಗೆ ಸೇವೆ ಕಾಯಂಗೊಳಿಸಬೇಕು. ಸೇವಾಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.
ಅತಿಥಿ ಶಿಕ್ಷಕರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಸೇವೆಯಲ್ಲಿದ್ದ ವೇಳೆಯೇ ಕೆಲವರು ಸಾವನ್ನಪ್ಪಿದ್ದಾರೆ. ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಅವಲಂಬಿತ ಕುಟುಂಬಕ್ಕೆ ಸರ್ಕಾರ ಒಂದು ರು. ಪರಿಹಾರವನ್ನು ಕೊಟ್ಟಿಲ್ಲ ಎಂದು ಆರೋಪಿಸಿದರು.