ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಒಳ ಮೀಸಲಾತಿ ಜಾರಿಗೊಳಿಸುವಂತೆ ಸುಪ್ರಿಂಕೋರ್ಟ್ ನೀಡಿರುವ ತೀರ್ಪನ್ನು ಕೂಡಲೇ ರಾಜ್ಯ ಸರ್ಕಾರವು ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಬುಧವಾರ ಪ್ರತಿಭಟಿಸಿ ಹೇಮಾವತಿ ಪ್ರತಿಮೆಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಡಿಸಿ ಕಚೇರಿ ಆವರಣಕ್ಕೆ ಬಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಒಕ್ಕೂಟದ ಮುಖಂಡ ಎಚ್.ಪಿ. ಶಂಕರರಾಜು ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದೇರೀತಿಯಾಗಿ ಹಾಸನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ನಮ್ಮ ಬೇಡಿಕೆಯಾದ ೩೦ ವರ್ಷಗಳಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಹೋರಾಟಕ್ಕಾಗಿ ಇಡೀ ರಾಜ್ಯದಲ್ಲಿ ಹಲವಾರು ಹೋರಾಟಗಳು ಮತ್ತು ಪ್ರಾಣತ್ಯಾಗ ಮಾಡಿಕೊಂಡಿದ್ದು, ನಮ್ಮನ್ನಾಳುವ ಸರ್ಕಾರ ಇದುವರೆಗೂ ಒಳ ಮೀಸಲಾತಿಯನ್ನು ಜಾರಿಗೊಳಿಸದೇ ಇರುವುದರಿಂದ ನಮ್ಮ ಸಂಘಟನೆ ವತಿಯಿಂದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದೇ ಆಗಸ್ಟ್ ೧ನೇ ತಾರೀಖು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿರುತ್ತದೆ. ಆಯಾಯ ರಾಜ್ಯಗಳು ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುತ್ತದೆ ಎಂದರು. ಆದರೆ ನಮ್ಮ ಕರ್ನಾಟಕ ಸರ್ಕಾರ ಕೋರ್ಟ್ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸದೆ ವಿಳಂಬ ನೀತಿಯನ್ನು ಅನುಸರಿಸುತ್ತಾ ಕಾಲತಳ್ಳುತ್ತಿರುವ ಕಾರಣ ಬೃಹತ್ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಒತ್ತಾಯವನ್ನು ಮಾಡುತ್ತೇವೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಲೂರು ವೆಂಕಟಯ್ಯ, ಲೋಕೇಶ್, ಕೃಷ್ಣದಾಸ್, ಕೆ.ಪಿ. ಚಂದ್ರಯ್ಯ, ವೆಂಕಟಯ್ಯ, ಭಾಸ್ಕರ್, ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು.