ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ತಾಲೂಕಿನ ಶ್ರೀನಿವಾಸಪುರ ಗ್ರಾಮಸ್ಥರು ಮತ್ತು ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದರು.ಗ್ರಾಮದ ಗುಂಡಿಬಿದ್ದು ನೀರು ತುಂಬಿರುವ ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಶಾಸಕ ರವಿಕುಮಾರ್ , ಜಿಲ್ಲಾಡಳಿತ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ರಸ್ತೆ ಅಭಿವೃದ್ಧಿಗಾಗಿ ಸಾಕಷ್ಟು ಬಾರಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ ಮತ್ತು ಸಚಿವ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.ತಾಲೂಕಿನ ಉಮ್ಮಡಹಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಶ್ರೀನಿವಾಸಪುರ ಗ್ರಾಮದ ಮುಖ್ಯರಸ್ತೆಯ ಅಭಿವೃದ್ಧಿ ಮಾಡದೆ ಹತ್ತು ವರ್ಷಗಳಿಂದ ಮಂಡಿಯುದ್ಧ ಗುಂಡಿ ಬಿದ್ದ ರಸ್ತೆಗಳು ಸಾಕಷ್ಟು ಜನರಿಗೆ ಪ್ರಾಣಪಾಯ ತಂದಿವೆ. ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿದೆ. ಶಾಲಾ ಕಾಲೇಜಿನ ಪಾದಚಾರಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದರು.
ಡಿ.20, 21, 22ರಂದು ಶ್ರೀನಿವಾಸಪುರ ಗ್ರಾಮ ವ್ಯಾಪ್ತಿಯ ಅಂಚಿನಲ್ಲಿಯೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿದೆ. ಕೋಟ್ಯಂತರ ರು.ಗಳನ್ನು ಖರ್ಚು ಮಾಡುತ್ತಿದ್ದಾರೆ. ಆದರೆ, ಸ್ಥಳೀಯವಾಗಿ ಗ್ರಾಮದ ರಸ್ತೆ ಅಭಿವೃದ್ಧಿ ಆಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಮ್ಮೇಳನಕ್ಕೆ ದೇಶ-ವಿದೇಶ ಹೊರ ಜಿಲ್ಲೆಗಳಿಂದ ಲಕ್ಷಾಂತರ ಜನ ಮತ್ತು ಕನ್ನಡ ಅಭಿಮಾನಿಗಳು, ಸಾಹಿತಿಗಳು ಬರುವ ಹಿನ್ನೆಲೆಯಲ್ಲಿ ಸಾಕಷ್ಟು ಜನರು ಈ ರಸ್ತೆಯಲ್ಲಿ ಸಂಚರಿಸಬೇಕಿದೆ. ತಕ್ಷಣವೇ ರಸ್ತೆ ಅಭಿವೃದ್ಧಿಪಡಿಸಿ ಎಂದು ಒತ್ತಾಯಿಸಿದರು.
ಮಳೆಗಾಲದಲ್ಲಿ ಗುಂಡಿ ಬಿದ್ದ ರಸ್ತೆಯಲ್ಲಿ ನೀರು ತುಂಬಿ ವಾಹನಗಳು, ಸಾರ್ವಜನಿಕರು ಸುಗಮವಾಗಿ ಸಂಚಾರಿಸಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಹಲವು ರಸ್ತೆಯಲ್ಲಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ ಎಂದು ಕಿಡಿಕಾರಿದರು.ಮಂಡ್ಯ ಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸಪುರ ಗ್ರಾಮದ ರಸ್ತೆಗಳು ಸಂಪೂರ್ಣವಾಗಿ ಹದಗಿಟ್ಟಿವೆ. ಹತ್ತು ವರ್ಷದಿಂದ ಅಭಿವೃದ್ಧಿ ಕಾಣದೆ ಪಾದಾಚಾರಿಗಳಿಗೆ ಮತ್ತು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ರಸ್ತೆ ಅಭಿವೃದ್ಧಿ ಪಡಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಶ್ರೀನಿವಾಸಪುರ ಗ್ರಾಪಂ ಸದಸ್ಯ ಆನಂದ, ಬೇಲೂರು ಗ್ರಾಪಂ ಸದಸ್ಯ ನಾಗರಾಜು, ನಿವೃತ್ತ ಉಪನ್ಯಾಸಕ ಶಿವಣ್ಣಗೌಡ ಮುಖಂಡರಾದ ಡಿ.ಸಿ.ರವಿ, ಇಂದ್ರಕುಮಾರ್, ನಾಗರಾಜ್, ಉದಯ್, ಚಿಕ್ಕರಸ, ಮಹೇಶ್, ಮಾದೇಶ್, ನಾಗಮುತ್ತು, ವೆಂಕಟೇಶ್ ಮತ್ತಿತರರು ಹಾಜರಿದ್ದರು.