ಸಾರಾಂಶ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ವಿವಿಧೋದ್ದೇಶಗಳ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಬೀದಿ ಬದಿ ವ್ಯಾಪಾರಿಗಳ ಕಾನೂನು ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಗದಗ ಕೋರ್ಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಪ್ರತಿಭಟನಾಕಾರರು ಜಿಲ್ಲೆಯ ೯ ತಾಲೂಕಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗದಗ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ವಿವಿಧೋದ್ದೇಶಗಳ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಬೀದಿ ಬದಿ ವ್ಯಾಪಾರಿಗಳ ಕಾನೂನು ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಕೋರ್ಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಪ್ರತಿಭಟನಾಕಾರರು ಜಿಲ್ಲೆಯ ೯ ತಾಲೂಕಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಸಂಘದ ರಾಜ್ಯ ಉಪಾಧ್ಯಕ್ಷ ಬಾಷಾಸಾಬ ಮಲ್ಲಸಮುದ್ರ ಮಾತನಾಡಿ, ಬೀದಿ ಬದಿ ವ್ಯಾಪಾರಸ್ಥರಿಂದ ಅಕ್ರಮವಾಗಿ ಶುಲ್ಕ ಸಂಗ್ರಹಣೆ ಮಾಡುತ್ತಿದ್ದಾರೆ. ಜೊತೆಗೆ ಬೀದಿ-ಬದಿ ವ್ಯಾಪಾರಸ್ಥರ ಶ್ರಯೋಭಿವೃದ್ಧಿಗಾಗಿ ೨೦೧೯ರಲ್ಲಿ ಗದಗ ಜಿಲ್ಲೆಗೆ ಸರ್ಕಾರದಿಂದ ೧೧ ಕೋಟಿ ರುಪಾಯಿ ಅನುದಾನ ಬಿಡುಗಡೆ ಆಗಿದೆ. ಆದರೆ, ಹಣ ಬೇರೆ ಕೆಲಸಕ್ಕೆ ಎಲ್ಲಿ ಅವಶ್ಯಕತೆ ಇದೆ, ಅಲ್ಲಿ ಅಲ್ಪ ಸ್ವಲ್ಪ ಬಳಸಿಕೊಂಡು ಅಧಿಕಾರಿಗಳು ತಮ್ಮ ಜೇಬು ತುಂಬಿಸಿಕೊಂಡಿದ್ದಾರೆ. ಉಳಿದ ಹಣ ಸರ್ಕಾರಕ್ಕೆ ಮರಳಿಸಿದ್ದಾರೆ ಎಂದು ಆರೋಪಿಸಿದರು.
ಬೀದಿ ಬದಿ ವ್ಯಾಪಾರಸ್ಥರ ಅನುದಾನದಲ್ಲಿ ಅಧಿಕಾರಿಗಳು ಸಾಕಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿಗಳು ರಾಜ್ಯ ಸರ್ಕಾರದ ಆದೇಶ ಹಾಗೂ ಕೇಂದ್ರ ಸರ್ಕಾರದ ಕಾಯ್ದೆ ಉಲ್ಲಂಘಿಸಿದ್ದಾರೆ. ಪೂರ್ಣ ಪ್ರಮಾಣದ ಪಟ್ಟಣ ಮಾರಾಟ ಸಮಿತಿ ರಚಿಸಬೇಕು. ಈ ಸಮಿತಿಯ ಹೆಸರಲ್ಲಿ ಖಾತೆ ತೆಗೆದು ಶುಲ್ಕ ಸಂಗ್ರಹಿಸಬೇಕು. ಬೀದಿ ವ್ಯಾಪಾರಿಗಳಿಗೆ ಕ್ಯೂಆರ್ ಕೋಡ್ ಅಳವಡಿಕೆಯ ಐಡಿ ಕಾರ್ಡ್ ಹಾಗೂ ಪ್ರಮಾಣ ಪತ್ರ ನೀಡಬೇಕು. ಪಟ್ಟಣ ಮಾರಾಟ ಸಮಿತಿ ಸದಸ್ಯರಿಗೆ ಭತ್ತೆ ನೀಡಬೇಕು. ಬೀದಿ ವ್ಯಾಪಾರಿಗಳಿಗೆ ಇನ್ಸುರೆನ್ಸ್ ಮಾಡಿಸಬೇಕು. ಬೀದಿ ವ್ಯಾಪಾರಿಗಳ ಆರೋಗ್ಯ ತಪಾಸಣೆ ಮಾಡಬೇಕು. ಪ್ರತಿ ವರ್ಷ ಟಿ.ವಿ.ಸಿ ಸಮಿತಿಗೆ ಲೆಕ್ಕ ಪರಿಶೋಧನೆ ಮಾಹಿತಿ ನೀಡಬೇಕು. ಇದ್ಯಾವುದು ಆಗಿಲ್ಲ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕೂಡಲೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.ಈ ಹೋರಾಟದಲ್ಲಿ ಸಾವಿರಾರು ಬೀದಿ ಬದಿಯ ವ್ಯಾಪಾರಸ್ಥರು, ಮಹಿಳೆಯರು ಪಾಲ್ಗೊಂಡಿದ್ದರು.