ಹಾವೇರಿ: ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಹಾಸ್ಟೆಲ್‌ಗಳನ್ನು ಮಂಜೂರು ಮಾಡಿ, ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಾಸ್ಟೆಲ್ ವಂಚಿತ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ನಗರಕ್ಕೆ ಬಂದರೂ ಹಾಸ್ಟೆಲ್ ಕೊರತೆಯಿಂದ ವಸತಿ ಸಿಗದೆ ಶಿಕ್ಷಣವನ್ನೇ ಅರ್ಧದಲ್ಲೇ ನಿಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಹಾಸ್ಟೆಲ್‌ಗಳನ್ನು ಹೆಚ್ಚಿಸಿ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.ರಾಜ್ಯ ಸಂಚಾಲಕ ಅರುಣ್ ಕುಮಾರ್ ನಗವತ್ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಮಾದರಿಯಲ್ಲಿ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳಿಗೂ ವಸತಿ ಸೌಲಭ್ಯ ಕಲ್ಪಿಸಬೇಕು. ಇಲ್ಲವಾದರೆ ಹಾಸ್ಟೆಲ್ ವಂಚಿತ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಎಚ್ಚರಿಸಿದರು.
ಈ ವೇಳೆ ವಿದ್ಯಾರ್ಥಿಗಳು ಸೋಮವಾರದವರೆಗೆ ಗಡುವು ನೀಡಿ, ಹಾಸ್ಟೆಲ್ ಸೌಲಭ್ಯ ಕಲ್ಪಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ, ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಮಾತನಾಡಿ, ಹೊಸ ಹಾಸ್ಟೆಲ್ ಮಂಜೂರಾತಿಗೆ ಸರ್ಕಾರಕ್ಕೆ ವರದಿ ಕಳುಹಿಸಲಾಗುವುದು. ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳೊಂದಿಗೆ ಚರ್ಚಿಸಿ ಮನವಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಮುಖಂಡರು ಹಾಗೂ ಹಾಸ್ಟೆಲ್ ವಂಚಿತ ವಿದ್ಯಾರ್ಥಿಗಳು ಭಾಗವಹಿಸಿದ್ದರು.