ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಆನ್ಲೈನ್ ಮೂಲಕ ಚಾಕುಗಳನ್ನು ಕಳುಹಿಸಿ ಬೆದರಿಕೆ ಹಾಕಲು ಯತ್ನಿಸಿರುವ ಘಟನೆ ಖಂಡಿಸಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದಿಂದ ನಗರದ ನೇತಾಜಿ ಸುಭಾಶ್ಚಂದ್ರ ಭೋಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಯಾದಗಿರಿ
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಆನ್ಲೈನ್ ಮೂಲಕ ಚಾಕುಗಳನ್ನು ಕಳುಹಿಸಿ ಬೆದರಿಕೆ ಹಾಕಲು ಯತ್ನಿಸಿರುವ ಘಟನೆ ಖಂಡಿಸಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದಿಂದ ನಗರದ ನೇತಾಜಿ ಸುಭಾಶ್ಚಂದ್ರ ಭೋಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬೆದರಿಕೆ ರಾಜಕಾರಣವನ್ನು ತೀವ್ರವಾಗಿ ಖಂಡಿಸಿದರು. ರಾಜಕೀಯ ವಿರೋಧಿಗಳನ್ನು ಭಯಭೀತಗೊಳಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಮತ್ತು ಅಶಾಂತದ ವಾತಾವರಣ ನಿರ್ಮಿಸಲು ಪ್ರಯತ್ನಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ಮುದ್ನಾಳ, ಪಕ್ಷದ ಹಿರಿಯರಾದ ಮುಖಂಡ ರಾಚಣ್ಣಗೌಡ ಮುದ್ನಾಳ, ದೇವಂದ್ರನಾಥ ನಾದ್, ಖಂಡಪ್ಪ ದಾಸನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಕುರಕುಂದಾ ಮಾತನಾಡಿ, ಇದು ಕೇವಲ ಒಬ್ಬ ನಾಯಕನಿಗೆ ಹಾಕಿದ ಬೆದರಿಕೆಯಲ್ಲ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಹಾಕಿದ ಸವಾಲಾಗಿದೆ ಎಂದರುರಾಜಕೀಯದಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಸಹಜ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಟೀಕೆ, ಟಿಪ್ಪಣಿ, ಚರ್ಚೆ ಹಾಗೂ ಹೋರಾಟಗಳು ನಡೆಯಯುವುದು ಪ್ರಜಾಪ್ರಭುತ್ವದ ಸಹಜ ಪ್ರಕ್ರಿಯೆ. ಆದರೆ, ರಾಜಕೀಯ ವಿರೋಧವನ್ನು ವೈಯಕ್ತಿಕ ದ್ವೇಷಕ್ಕೆ ತಿರುಗಿಸಿ, ಬೆದರಿಕೆ ಹಾಕುವ ಹಾಗೂ ಭಯದ ವಾತಾವರಣ ಸೃಷ್ಟಿಸುವ ಮಟ್ಟಕ್ಕೆ ಕೊಂಡೊಯ್ಯುವುದು ಯಾವ ಕಾರಣಕ್ಕೂ ಸಮರ್ಥನೀಯವಲ್ಲ ಎಂದರು.
ಚಾಕು ಕಳುಹಿಸಿ ಬೆದರಿಸಲು ಯತ್ನಿಸಿರುವ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು. ಇದರ ಹಿಂದಿರುವ ವ್ಯಕ್ತಿಗಳು ಹಾಗೂ ಘಟನೆಯ ಹಿನ್ನೆಲೆಯನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ. ಆದರೆ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಿಧಾನದ ಆಶಯಗಳು ಶಾಶ್ವತವಾಗಿರಬೇಕು. ರಾಜಕೀಯ ಭಿನ್ನಾಭಿಪ್ರಾಯ ಗಳ ನಡುವೆಯೂ ಪರಸ್ಪರ ಗೌರವ, ಸಹನೆ ಮತ್ತು ಸಂಯಮ ಕಾಪಾಡಿಕೊಳ್ಳುವುದು ಎಲ್ಲ ರಾಜಕೀಯ ಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಅವರು ತಿವಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ, ಪ್ರಶ್ನಿಸುವ ಮತ್ತು ವಿರೋಧಿಸುವ ಹಕ್ಕಿದೆ. ವಿರೋಧ ಪಕ್ಷದ ನಾಯಕರು ಸರ್ಕಾರದ ನೀತಿಗಳನ್ನು ಟೀಕಿಸಿದರೆ ಅದಕ್ಕೆ ರಾಜಕೀಯವಾಗಿ ಉತ್ತರ ನೀಡಬೇಕೇ ಹೊರತು ಬೆದರಿಕೆಗಳ ಮೂಲಕ ಮೌನಗೊಳಿಸುವ ಪ್ರಯತ್ನ ಮಾಡಬಾರದು. ಇಂತಹ ಘಟನೆಗಳು ರಾಜಕೀಯ ಸಂಸ್ಕೃತಿಗೆ ಕಪ್ಪುಚುಕ್ಕೆ ಎಂದು ಅವರುಗಳು ಆಕ್ರೋಶ ವ್ಯಕ್ತಪಡಿಸಿದರು.ಪಕ್ಷದ ಹಿರಿಯ ಮುಖಂಡರಾದ ಸಿದ್ದಣ್ಣಗೌಡ ವಡಿಗೇರಾ, ನಾಗರತ್ನ ಕುಪ್ಪಿ, ಡಾ. ಶರಣಭೂಪಾಲರಡ್ಡಿ ಗೌಡ ನಾಯ್ಕಲ್, ಶರಣಗೌಡ ಬಾಡಿಯಾಳ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುನೀತಾ ಚವ್ಹಾಣ್, ವೀಣಾ ಮೋದಿ, ಯುವ ಮೋರ್ಚಾ ಅಧ್ಯಕ್ಷ ಲಕ್ಷ್ಮೀಪುತ್ರ ಮಾಲಿ ಪಾಟೀಲ, ಶ್ರೀಧರ ಆರ್ ಸಾಹುಕಾರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ವಡಿಗೇರಾ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ ದೊಡ್ಡಮನಿ, ಮಲ್ಲಿಕಾರ್ಜುನ ಪೂಜಾರಿ, ಮಲ್ಲಿಕಾರ್ಜುನ ಕಟ್ಟಿಮನಿ, ಶಿವು ಕೊಂಕಲ, ನಾಗರೆಡ್ಡಿ ಇಬ್ರಾಹಿಂಪುರ ಮುಂತಾದವರು ಇದ್ದರು.
----ಫೋಟೊ----9ವೈಡಿಆರ್5
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕುಗಳನ್ನು ಕಳುಹಿಸಿ ಬೆದರಿಕೆ ಹಾಕಲು ಯತ್ನಿಸಿದ ಘಟನೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ನೇತಾಜಿ ಸುಭಾಶ್ಚಂದ್ರ ಭೋಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.