ಹಾವೇರಿ: ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು, ಕೆಲಸದ ಹೊರೆಯನ್ನು ಕಡಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ರಾಜ್ಯಾದ್ಯಂತ ಎರಡನೇ ಹಂತದ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದಾಗಿದ್ದು, ಸೋಮವಾರ ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ 2024 ಸೆ. 26ರಿಂದ ನ.3ರ ವರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು. ಇದರ ಪರಿಣಾಮ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೂ ನಮ್ಮ ಬೇಡಿಕೆಗಳಿಗೆ ಸರ್ಕಾರ ಸೂಕ್ತ ಸ್ಪಂದನೆ ನೀಡದೇ ನಿರ್ಲಕ್ಷ್ಯ ತೋರಿದೆ. ಅಲ್ಲದೇ ಪ್ರತಿಭಟನೆ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಎದುರಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ ಎಂದರು. ಕರ್ತವ್ಯಕ್ಕೆ ಅಗತ್ಯವಿರುವ ಕಂಪ್ಯೂಟರ್, ಲ್ಯಾಪ್‌ಟಾಪ್, ಇಂಟರ್‌ನೆಟ್ ಹಾಗೂ ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಇದರಿಂದ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಆರೋಗ್ಯ ಸಮಸ್ಯೆಗೆ ಎದುರಿಸುವಂತಾಗಿದೆ. ಎಲ್ಲಾ ಮೊಬೈಲ್ ಆ್ಯಪ್‌ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿದ್ದಾರೆ. ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗಿವೆ. ಆಧಾರ್ ಸೀಡಿಂಗ್, ಬಗರ್ ಹುಕುಂ, ಹಕ್ಕುಪತ್ರ, ನಮೂನೆ 1-5ರ ವೆಬ್ ಅಪ್ಲಿಕೇಷನ್, ಪೌತಿ ಆಂದೋಲನ ಅಪ್ ಹೀಗೆ ಹತ್ತಾರು ಆ್ಯಪ್‌ಗಳಲ್ಲಿ ಏಕಕಾಲಕ್ಕೆ ಕೆಲಸ ಮಾಡಬೇಕಿದೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು. ಈ ಕೂಡಲೇ ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ನೀಡಬೇಕು. ಪದೋನ್ನತಿಯ ವಿಚಾರದಲ್ಲೂ ವಂಚಿತರಾಗಿದ್ದು ರಾಜ್ಯದ 1196 ಗ್ರೇಡ್-1 ಗ್ರಾಪಂ ಹಾಗೂ 304 ಕಸಬಾ ಹೋಬಳಿ ವೃತ್ತಗಳನ್ನು ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಬೇಕು. ಪತಿ-ಪತ್ನಿ ಪ್ರಕರಣದಲ್ಲಿ ವರ್ಗಾವಣೆಯ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳನ್ನು ಕೂಡಲೇ ಇತ್ಯರ್ಥ ಮಾಡಿ. ಕಂದಾಯ ಇಲಾಖೆಯ 3 ವರ್ಷಗಳ ಸೇವೆ ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗೆ ಹೊಸ ಮಾರ್ಗಸೂಚಿ ರಚಿಸುವಂತೆ ಒತ್ತಾಯಿಸಿದರು.ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ಹೇಳಿದರು.ಪ್ರತಿಭಟನೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕಾಧ್ಯಕ್ಷ ಹೊನ್ನಪ್ಪ ಮಲ್ಕಪ್ಪನವರ, ಆನಂದ ದೇಸಾಯಿ, ಕುಮಾರ ಕಿತ್ತೂರ, ಪ್ರಕಾಶ ಉಜ್ಜನಿ, ಮಲ್ಲಿಕಾರ್ಜುನ ಹುಣಸಿಕಟ್ಟಿ, ಮೋಹನ್ ಗಿರಿಯಮ್ಮನವರ, ಬಸವರಾಜ ನಂದಿ ಸೇರಿದಂತೆ ಇತರರು ಇದ್ದರು.
ಬೇಡಿಕೆ ಈಡೇರಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಪ್ರತಿಭಟನೆ
ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು, ಕೆಲಸದ ಹೊರೆಯನ್ನು ಕಡಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ರಾಜ್ಯಾದ್ಯಂತ ಎರಡನೇ ಹಂತದ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದಾಗಿದ್ದು, ಸೋಮವಾರ ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.