ಕನ್ನಡಪ್ರಭ ವಾರ್ತೆ ಬೆಳಗಾವಿ
ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ವಿರೋಧವಿಲ್ಲ. ಆದರೆ, ವಿದ್ಯಾರ್ಥಿಗಳ ನೋವು ಮತ್ತು ಆತಂಕವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡು ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ನಾಯಕ ಮಹಾಂತೇಶ ಕವಟಗಿಮಠ ಎಚ್ಚರಿಸಿದರು.ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ, ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸಿದ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದರೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಶಿಕ್ಷೆಗೆ ಒಳಪಡಬೇಕು. ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಕುರಿತು ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಸಂಸತ್ತಿನಲ್ಲಿ ಮುಕ್ತ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದ್ದರೂ ಕಾಂಗ್ರೆಸ್ ತನಿಖೆ ಮತ್ತು ಚರ್ಚೆಗಿಂತ ರಾಜಕೀಯ ಪ್ರಚೋದನೆಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದರು.ವಿದ್ಯಾರ್ಥಿಗಳಿಗೆ ನ್ಯಾಯ ದೊರಕಬೇಕು ಎಂಬ ನಿಜವಾದ ಕಾಳಜಿ ಕಾಂಗ್ರೆಸ್‌ಗೆ ಇದ್ದರೆ, ಸಂಸತ್ತಿನ ಕಲಾಪ ಸುಗಮವಾಗಿ ನಡೆಯಲು ಅವಕಾಶ ನೀಡಬೇಕು. ಅಕ್ರಮಗಳ ಕುರಿತು ಚರ್ಚೆ ನಡೆಯಲಿ, ತನಿಖಾ ವರದಿ ಹೊರಬರಲಿ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಸಂಸತ್ತಿನ ಒಳಗೆ ಗದ್ದಲ ಸೃಷ್ಟಿಸಿ ಹೊರಗೆ ವಿದ್ಯಾರ್ಥಿಗಳನ್ನು ದಿಕ್ಕುತಪ್ಪಿಸುವ ದ್ವಿಮುಖ ನೀತಿಯನ್ನು ಜನರು ಒಪ್ಪುವುದಿಲ್ಲ ಎಂದರು.ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಮಾತನಾಡಿ, ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಕಾಂಗ್ರೆಸ್ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ವಿದ್ಯಾರ್ಥಿಗಳು ತಮಗಾದ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಪ್ರತಿಭಟನೆಯ ನೆಪದಲ್ಲಿ ದೇಶವಿರೋಧಿ ಘೋಷಣೆಗಳು ಮತ್ತು ಪ್ರಚೋದನಕಾರಿ ಚಟುವಟಿಕೆಗಳನ್ನು ನಡೆಸಿದರೆ ಸಹಿಸಲಾಗುವುದಿಲ್ಲ ಎಂದರು.ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿದ ಅವರು, ವಿಡಿಯೊ ದೃಶ್ಯಾವಳಿಗಳನ್ನು ಪರಿಶೀಲಿಸಿ ಪ್ರಚೋದನಕಾರಿ ಘೋಷಣೆ ಕೂಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಮಾಜಿ ಶಾಸಕ ಅರವಿಂದ ಪಾಟೀಲ ಮಾತನಾಡಿ, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸಿರುವುದು ಖಂಡನೀಯ. ರಾಜ್ಯದಲ್ಲಿ ರೈತರು ಬರಗಾಲದಿಂದ ಸಂಕಷ್ಟದಲ್ಲಿದ್ದರೂ ಸರ್ಕಾರ ಅವರ ಸಮಸ್ಯೆಗಳಿಗೆ ಸ್ಪಂದಿಸದೆ ವಿರೋಧ ಪಕ್ಷದ ಧ್ವನಿ ಹತ್ತಿಕ್ಕಲು ಮುಂದಾಗಿದೆ ಎಂದು ಆರೋಪಿಸಿದರು.ಪ್ರತಿಭಟನೆಯ ಬಳಿಕ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.ಖಾನಾಪುರ ಶಾಸಕ ವಿಠಲ ಹಲಗೇಕರ, ಮಾಜಿ ಶಾಸಕರಾದ ಸಂಜಯ ಪಾಟೀಲ, ಡಾ.ವಿ.ಐ.ಪಾಟೀಲ, ಮಹಾಂತೇಶ ದೊಡ್ಡಗೌಡರ, ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.