ಕನ್ನಡಪ್ರಭ ವಾರ್ತೆ ಜಮಖಂಡಿ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ವಿರೋಧಿಸಿ ಸಿಜೆಪಿ ನೇತೃತ್ವದಲ್ಲಿ ದೆಹಲಿಯ ಜಂತರ ಮಂತರ್‌ನಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ಮೇಲೆ ಸೋಮವಾರ ನಡೆದ ಲಾಠಿ ಚಾರ್ಜ್ ಖಂಡಿಸಿ, ಕರವೇ ತಾಲೂಕು ಘಟಕ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಎ.ಜಿ. ಸಾಯಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಸಂಘಟನೆಗಳ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಆಕ್ರೋಶ ಹೊರಹಾಕಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲೂಕು ಉಪಾಧ್ಯಕ್ಷ ಆನಂದ ಕಾಂಬಳೆ, ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕೆ ನಡೆಸುವ ನೀಟ್ ಪರೀಕ್ಷೆ ಸೋರಿಕೆ ಹಾಗೂ 21 ವಿದ್ಯಾರ್ಥಿಗಳ ಆತ್ನಹತ್ಯೆಗೆ ನೇರವಾಗಿ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ ಹೊಣೆಗಾರರಾಗಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆಗೆ ಇದು ಕಪ್ಪು ಚುಕ್ಕೆ ಇದ್ದಂತೆ. ವಿದ್ಯಾರ್ಥಿಗಳ ಜೀವನದ ಜತೆ ಚಲ್ಲಾಟ ವಾಡುತ್ತಿರುವರು ಅಧಿಕಾರದಲ್ಲಿರ ಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಮುತ್ತಣ್ಣ ಮೈತ್ರಿ, ರೈತ ಮುಖಂಡ ರಾಜು ನದಾಫ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಮಾರ ಆಲಗೂರ, ಭೀಮ ಆರ್ಮಿ ಜಿಲ್ಲಾಧ್ಯಕ್ಷ ರಮೇಶ್ ಬಲೊಳ್ಳಗಿಡದ ಹಾಗೂ ವಿದ್ಯಾರ್ಥಿನಿ ಕಾವೇರಿ ಯಡಳ್ಳಿ ಮಾತನಾಡಿ, ನೀಟ್ ಪರೀಕ್ಷೆ ಅಕ್ರಮದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ ದೇಶದ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಮರುಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.
ಕರವೇ ತಾಲೂಕು ಅಧ್ಯಕ್ಷ ಅರುಣ ಲಗಳಿ, ಪ್ರಧಾನ ಕಾರ್ಯದರ್ಶಿ ರಮೇಶ ಪೂಜಾರಿ, ಸಂಜು ಮುಂಡಗನೂರ, ಸಂಜು ಪೂಜಾರಿ, ಸಾಗರ ಕಾಂಬಳೆ, ನಾಗಪ್ಪ ಹೆಗಡೆ, ಶ್ರೀಶೈಲ ಬೂಮಾರ, ಸೇರಿದಂತೆ ಕರವೇ ಪದಾಧಿಕಾರಿಗಳು, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.