ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿನ ಲೋಪದಿಂದ ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಬಳ್ಳಾರಿ: ಕೆಪಿಎಸ್‌ಸಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಉನ್ನತ ಮಟ್ಟದ ತನಿಖಾ ಸಂಸ್ಥೆಯಿಂದ ಸಮಗ್ರ ತನಿಖೆ ನಡೆಸಬೇಕು. ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿನ ಲೋಪದಿಂದ ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ಶಿಕ್ಷಣ ಇಲಾಖೆಯ ಖಾಲಿ ಶಿಕ್ಷಕರ ಹುದ್ದೆಗಳನ್ನು ಶೀಘ್ರ ಕಾಯಂ ನೇಮಕಾತಿ ಮೂಲಕ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಪತ್ರ ಕಳುಹಿಸಿದರು.
ಕೆಪಿಎಸ್‌ಸಿಯ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ವಿಶ್ವಾಸಕ್ಕೆ ಧಕ್ಕೆ ತಂದಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿರುವ ಆರೋಪಗಳು ಕೇಳಿಬಂದಿದ್ದು, ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ಉಂಟಾದ ಗೊಂದಲದಿಂದ ಅನೇಕ ಅಭ್ಯರ್ಥಿಗಳಿಗೆ ಪರೀಕ್ಷೆಯನ್ನು ಸಮರ್ಪಕವಾಗಿ ಬರೆಯಲು ಸಾಧ್ಯವಾಗಿಲ್ಲ. ಹೀಗಾಗಿ ಸಮಸ್ಯೆಗೆ ಒಳಗಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಿ ನ್ಯಾಯ ಒದಗಿಸಬೇಕು.
ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡದ ಪರಿಣಾಮ ನೂರಾರು ಶಾಲೆ–ಕಾಲೇಜುಗಳಲ್ಲಿ ಪ್ರವೇಶಾತಿ ಕುಸಿದಿದೆ. ಖಾಲಿ ಶಿಕ್ಷಕರ ಹುದ್ದೆಗಳನ್ನು ತಕ್ಷಣವೇ ಖಾಯಂ ನೇಮಕಾತಿ ಮೂಲಕ ಭರ್ತಿ ಮಾಡಬೇಕು. ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳ ಕಡೆಗೆ ಜಿಲ್ಲಾಡಳಿತ ಗಮನ ಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪೊಲೀಸ್ ನೇಮಕಾತಿ ಪರೀಕ್ಷೆಯಂತಹ ಮಹತ್ವದ ಪರೀಕ್ಷೆಗಳು ಅತ್ಯಂತ ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕು. ಆದರೆ, ನಡೆದಿರುವ ಲೋಪದಿಂದ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಈ ಘಟನೆಯ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಸಮಸ್ಯೆಗೆ ಒಳಗಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವ ಮುಖಾಂತರ ಅವರಿಗೆ ಅವಕಾಶ ನೀಡಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ. ಭರತ್ ಒತ್ತಾಯಿಸಿದರು.
ನಗರ ಕಾರ್ಯದರ್ಶಿ ಬಸವಕಿರಣ್, ವಿಭಾಗ ಸಂಚಾಲಕ ಕೆ. ದಿಲೀಪ್ ಕುಮಾರ್ ಹಾಗೂ ಕಾರ್ಯಕರ್ತರಾದ ಮಹೇಶ್, ರವಿಕಿರಣ್, ಹೇಮಾವತಿ, ಗೌರಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟ ವಿದ್ಯಾರ್ಥಿಗಳು ಗಡಗಿ ಚನ್ನಪ್ಪ ವೃತ್ತದಲ್ಲಿ ಕೆಲ ಹೊತ್ತು ರಸ್ತೆ ತಡೆ ನಡೆಸಿ ಕೆಪಿಎಸ್‌ಸಿ ಹಗರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಕಳುಹಿಸಿದರು. ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ಮನವಿಹೂವಿನಹಡಗಲಿ: ರಾಜ್ಯದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಯಲ್ಲಿ ಲೋಪವಾಗಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೆಪಿಎಸ್‌ಸಿಯಲ್ಲಿ ನಡೆದಿರುವ ಹಗರಣ ಕುರಿತು ಉನ್ನತ ಮಟ್ಟದ ತನಿಖೆ ಸೇರಿದಂತೆ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.ಕೆಪಿಎಸ್‌ಸಿಯಲ್ಲಿ ಭ್ರಷ್ಟಾಚಾರ ಹಾಗೂ ಪೊಲೀಸ್ ನೇಮಕಾತಿ ಪರೀಕ್ಷೆಯ ಸಂದರ್ಭದಲ್ಲಿ ವಿಜಯಪುರದ ತಿಕೋಟದಲ್ಲಿ ಆಗಿರುವ ಗೊಂದಲವನ್ನು ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ. ಇತ್ತೀಚೆಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸುಮಾರು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ನಡೆಸಲಾದ, ಸ್ಪರ್ಧಾತ್ಮಕ ಪರೀಕ್ಷೆಯ ಜುಲೈ 17ರಂದು ಹೊರಬಿದ್ದ ಫಲಿತಾಂಶದಲ್ಲಿ ಅಕ್ರಮ ನಡೆದಿರುವುದು ಬಯಲಾಗಿದೆ ಎಂದು ಮನವಿ ಪತ್ರದಲ್ಲಿ ದೂರಿದ್ದಾರೆ. ಒಂದು ಹುದ್ದೆಗೆ ಬರೋಬ್ಬರಿ ₹80 ಲಕ್ಷ ಬೆಲೆಗೆ ಮಾರಾಟವಾಗಿದೆ. ಅಭ್ಯರ್ಥಿಗಳಿಗೆ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು, ಕಷ್ಟಪಟ್ಟು ಪರೀಕ್ಷೆ ಬರೆದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪರಿಷತ್ತಿನ ಜಿಲ್ಲಾ ಸಂಚಾಲಕ ಎಂ. ಧನುಷ್‌ಕುಮಾರ, ತಾಲೂಕು ಸಂಚಾಲಕ ಈಟಿ ವಿನಾಯಕ, ಕಿರಣ ಮುಂಡರಗಿ, ಚೇತನ್‌ಕುಮಾರ, ಅಭಿಷೇಕ, ಕೊಟ್ರಯ್ಯ ಸೇರಿದಂತೆ ಇತರರು ತಹಸೀಲ್ದಾರ್ ಕೆ.ಎಂ. ಗುರುಬಸವರಾಜ ಅವರಿಗೆ ಮನವಿ ಸಲ್ಲಿಸಿದರು.