ಶೇ. 15ರಷ್ಟು ಎನ್‌ಆರ್‌ಐ ಕೋಟಾ ರದ್ದಿಗೆ ಆಗ್ರಹಿಸಿ ಪ್ರತಿಭಟನೆ

| Published : Sep 11 2025, 12:03 AM IST

ಸಾರಾಂಶ

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಜಾರಿ ಮಾಡಿರುವ ಶೇ. 15ರಷ್ಟು ಎನ್‌ಆರ್‌ಐ ಕೋಟಾ ರದ್ದು ಮಾಡಲು ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಒ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳ ಅವಕಾಶ ಕಡಿತ

ಎಐಡಿಎಸ್‌ಒ ನೇತೃತ್ವದಲ್ಲಿ ಹೋರಾಟ

ಕನ್ನಡಪ್ರಭ ವಾರ್ತೆ ಬಳ್ಳಾರಿ

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಜಾರಿ ಮಾಡಿರುವ ಶೇ. 15ರಷ್ಟು ಎನ್‌ಆರ್‌ಐ ಕೋಟಾ ರದ್ದು ಮಾಡಲು ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಒ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

2025-26ನೇ ಸಾಲಿನಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್‌ಆರ್‌ಐ ಕೋಟಾವನ್ನು ಆರಂಭಿಸಲು ಕರ್ನಾಟಕ ರಾಜ್ಯ ಸರ್ಕಾರವು ನಿರ್ಧರಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರವು ವೈದ್ಯಕೀಯ ಶಿಕ್ಷಣದ ಕನಸು ಹೊತ್ತ ರಾಜ್ಯದ ಬಡ ವಿದ್ಯಾರ್ಥಿಗಳನ್ನು ಆತಂಕಕ್ಕೆ ತಳ್ಳಿದೆ. ಈಗಾಗಲೇ ಅಖಿಲ ಭಾರತ ಕೋಟಾದಡಿ ಶೇ.15 ರಷ್ಟು ಸೀಟು ನೀಡಲಾಗುತ್ತಿದೆ. ಇನ್ನೂ ಶೇ. 15 ಸೀಟುಗಳು ಎನ್‌ಆರ್‌ಐ ಕೋಟಾಗೆ ನೀಡಿದರೆ 200 ವಿದ್ಯಾರ್ಥಿಗಳ ಒಂದು ಬ್ಯಾಚಿನಲ್ಲಿ 140 ಸೀಟುಗಳು ಮಾತ್ರ ರಾಜ್ಯದ ವಿದ್ಯಾರ್ಥಿಗಳಿಗೆ ಉಳಿದಂತಾಗುತ್ತದೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳು ಆರ್ಥಿಕ ಹಿನ್ನೆಲೆ ಲೆಕ್ಕಿಸದೆ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ಸ್ಥಾಪಿಸಲಾಗಿದೆ. ಶ್ರೀಮಂತ ಎನ್‌ಆರ್‌ಐ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಅವಕಾಶವನ್ನು ಕಡಿತಗೊಳಿಸಿದಂತಾಗಿದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ಪ್ರಮೋದ್ ತಿಳಿಸಿದರು.

ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 12,447 ಬೋಧಕ ಹುದ್ದೆಗಳು ಖಾಲಿ ಇರುವ ಸಮಯದಲ್ಲಿ, ಸರ್ಕಾರವು ಈ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಮೂಲಸೌಕರ್ಯವನ್ನು ಸುಧಾರಿಸಲು ಆದ್ಯತೆ ನೀಡಬೇಕು. ಬೋಧಕ ವರ್ಗ ಮತ್ತು ಸೌಲಭ್ಯ ಬಲಪಡಿಸುವುದು ಅಗತ್ಯವಾಗಿದೆ. ಈ ಅಗತ್ಯಗಳನ್ನು ಪೂರೈಸಲು ಸರ್ಕಾರವು ಮುಂದಾಗಬೇಕು. ಸಂಪನ್ಮೂಲ ಕ್ರೋಢೀಕರಣದ ನೆಪದಲ್ಲಿ ಶ್ರೀಮಂತರಿಗೆ ಸೀಟು ಮಾರಾಟ ಮಾಡಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗದು. ಆದ್ದರಿಂದ ಸರ್ಕಾರಿ ಕಾಲೇಜುಗಳನ್ನು ಖಾಸಗಿ ಸಂಸ್ಥೆಗಳಂತೆ ಲಾಭಗಳಿಸುವ ಕೇಂದ್ರಗಳಾಗಿ ಪರಿವರ್ತಿಸುವ ಅಪಾಯಕಾರಿ ಹೆಜ್ಜೆಯಾದ ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು ಹಾಗೂ ಶೇ. 15ರಷ್ಟು ಎನ್‌ಆರ್‌ಐ ಕೋಟಾ ರದ್ದುಗೊಳಿಸುವ ಮೂಲಕ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.ನಗರದ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಧೋರಣೆ ಖಂಡಿಸಿದರಲ್ಲದೆ, ಕೂಡಲೇ ಸರ್ಕಾರ ತನ್ನ ಬಡ ಹಾಗೂ ಮಧ್ಯಮ ವರ್ಗದ ವಿರೋಧಿ ನಿಲುವು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು. ಬೇಡಿಕೆಯ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ವೈದ್ಯಕೀಯ ಶಿಕ್ಷಣ ಸಚಿವರಿಗೆ ಸಲ್ಲಿಸಲಾಯಿತು.

ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಈರಣ್ಣ, ಉಪಾಧ್ಯಕ್ಷೆ ಶಾಂತಿ ಸೇರಿದಂತೆ ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.