ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ:
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿಎದುರು ಬುಧವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ವಿಳಂಭ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ, ಒಳ ಮೀಸಲಾತಿ ಜಾರಿಗಾಗಿ ಮೂರ್ನಾಲ್ಕು ದಶಕಗಳಿಂದ ಮಾದಿಗ ಸಮುದಾಯಗಳು ನಡೆಸಿದ ಹೋರಾಟದ ಫಲವಾಗಿ ಕಳೆದ ಆ.1 ರಂದು ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎನ್ನುವ ಮಹತ್ತರ ತೀರ್ಪು ನೀಡಿದ್ದರೂ ಸಹ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ದತ್ತಾಂಶಗಳ ನೆಪ ಹೇಳಿಕೊಂಡು ಕಾಲಹರಣ ಮಾಡುತ್ತಿದ್ದಾರೆ.
ನಾಗಮೋಹನ್‍ದಾಸ್ ವರದಿಗೆ ಕಾಯುವ ಬದಲು ಸುಪ್ರೀಂಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿಯನ್ನು ಜಾರಿಗೊಳಿಸದಿದ್ದರೆಮುಂದಿನ ದಿನಗಳಲ್ಲಿ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಸಿದರು.
ಸಿಎಂ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿಗೆ ತರುತ್ತಾರೆಂಬ ನಂಬಿಕೆಯಲ್ಲಿದ್ದೆವು. ಕಾಂಗ್ರೆಸ್ ಸರ್ಕಾರ ಮಾದಿಗರಪರವಾಗಿಲ್ಲ. ರಾಜಕಾರಣಿಗಳ ನಿಜ ಬಣ್ಣ ಈಗ ಬಯಲಾಗುತ್ತಿದೆ. ಇನ್ನು ನಾವುಗಳು ಭರವಸೆಯಿಟ್ಟುಕೊಂಡು ಸುಮ್ಮನೆ
ಕುಳಿತುಕೊಳ್ಳುವುದರಲ್ಲಿ ಅರ್ಥವಿಲ್ಲ. ಉಗ್ರ ಹೋರಾಟಕ್ಕೆ ಸಜ್ಜಾಗಿದ್ದೇವೆ ಎಂದರು.ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಿಎಂ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿಗೆ ತರಬೇಕು. ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ಮಾದಿಗ ಸಮುದಾಯವನ್ನು ವಂಚಿಸಿಕೊಂಡು ಬರುತ್ತಿವೆ. ತಕ್ಷಣವೆ ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಟಾನಕ್ಕೆ ತರಬೇಕು. ಇಲ್ಲದಿದ್ದರೆ ಕುರ್ಚಿ ಖಾಲಿ ಮಾಡುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಮುಂದೆ ಸಿಎಂ ಮನೆಗೆ ಮುತ್ತಿಗೆ ಹಾಕಲು ಎಲ್ಲಾ ಮಾದಿಗ ಸಮುದಾಯದ ಸಂಘಟನೆಗಳು ಸಿದ್ಧವಾಗಿವೆ ಎಂದರು.
ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ರಾಜ್ಯ ಕಾರ್ಯದರ್ಶಿ ಶಿವಮೂರ್ತಿ ಭೀಮನಕೆರೆ ಮಾತನಾಡುತ್ತ ಪರಿಶಿಷ್ಟಜಾತಿಯಲ್ಲಿನ 101 ಉಪ ಜಾತಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಗೆ ಹೂವು ಮುಡಿಸುವ ಕೆಲಸ ಮಾಡುವುದನ್ನು ಬಿಟ್ಟು ತಕ್ಷಣದಿಂದಲೆ ಒಳ ಮೀಸಲಾತಿಯನ್ನು ಜಾರಿಗೆ ತರಬೇಕು.
ಒಳ ಮೀಸಲಾತಿ ಜಾರಿಯಾಗುವತನಕ 37 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ ತಡೆಹಿಡಿಯಬೇಕು. 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ಶೇ.1ಕ್ಕಿಂತ ಹೆಚ್ಚು ಒಳ ಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಎಸ್‌ಸಿಪಿ ಟಿಎಸ್‌ಪಿ ಅನುದಾನದಲ್ಲಿ ಮಾದಿಗ, ಸಮಗಾರ, ಡೋಹರ, ಮಚಗಾರ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಪ್ರತ್ಯೇಕ ಅನುದಾನ ಮೀಸಲಿಟ್ಟು ವೆಚ್ಚ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.ಮಾದಿಗ ಸಮುದಾಯಗಳ ಸ್ವಾಭಿಮಾನ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸುಂದರೇಶ್, ಕೆ.ಎನ್.ದೊಡ್ಡೊಟ್ಟೆಪ್ಪ, ಲಕ್ಷ್ಮಮ್ಮ, ನವೀದ್,
ಮಹಾಂತೇಶ್ ಕೂನಬೇವು ಕೆ.ಪಿ.ಶ್ರೀನಿವಾಸ್, ಜಿಲ್ಲಾಧ್ಯಕ್ಷ ಎನ್.ಪ್ರಕಾಶ್, ಮಹಾಲಿಂಗಪ್ಪ, ಹನುಮಂತರಾಜು, ಎಚ್.ಆರ್.ಶ್ರೀನಿವಾಸ್, ಹನುಮಂತರಾಯ, ಶಿವಮ್ಮ, ರಾಮಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.