ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

| Published : Jul 04 2025, 11:46 PM IST / Updated: Jul 04 2025, 11:47 PM IST

ಸಾರಾಂಶ

ಗುಂಡ್ಲುಪೇಟೆಯಲ್ಲಿ ಆಶಾ ಕಾರ್ಯಕರ್ತೆಯರು ತಹಸೀಲ್ದಾರ್ ಟಿ. ರಮೇಶ್ ಬಾಬುಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭವಾರ್ತೆ ಗುಂಡ್ಲುಪೇಟೆ

ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಸೇರಿಸಿ ಕನಿಷ್ಠ 10 ಸಾವಿರ ಗೌರವ ಧನ ನೀಡಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲೂಕು ಕಚೇರಿ ಮುಂದೆ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಉಮಾದೇವಿ ಮಾತನಾಡಿ, ಕಳೆದ ಕೆಲ ತಿಂಗಳಲ್ಲಿ ‌ಬೆಂಗಳೂರಿನಲ್ಲಿ‌ ನಡೆದ ಪ್ರತಿಭಟನೆ ಸಮಯದಲ್ಲಿ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ‌ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ‌ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರದ ಸಚಿವರು, ಶಾಸಕರು ಸಾಮಾಜಿಕ ಜಾಲ ತಾಣಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಹತ್ತು ಸಾವಿರ ಗೌರವ ಧನ ನೀಡಲಾಗುತ್ತಿದೆ ಎಂದು ಪ್ರಚಾರ ಮಾಡುತಿದ್ದಾರೆ. ಆದರೆ ಜೂನ್ ತಿಂಗಳು ಕಳೆದರೂ ನಮಗೆ ಗೌರವ ಧನ ನೀಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಈ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದಂತೆ ಆಶಾ ಕಾರ್ಯಕರ್ತೆಯರಿಗೂ ಗೌರವ ಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು. ವಿವಿಧ ‌ಕಾರಣಗಳನ್ನು ನೀಡಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದುಹಾಕಲು ರಾತ್ರೋರಾತ್ರಿ ಆದೇಶ ಹೊರಡಿಸುವ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವುದಕ್ಕೆ ಆಗುತ್ತಿಲ್ಲವೇಕೆ ಎಂದು ಪ್ರಶ್ನಿಸಿದರು.

ಜು.9ರಂದು ಹತ್ತು ಸಂಘಟನೆಗಳು ಒಗ್ಗೂಡಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನೀಡಿರುವ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಜಿಲ್ಲಾ ಕೇಂದ್ರಗಳಲ್ಲಿ ‌ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರ ‌ತಾಲೂಕು ಅಧ್ಯಕ್ಷೆ ಮಂಜುಳಾ, ಕಾರ್ಯದರ್ಶಿ ರಾಜಮ್ಮ, ಲಕ್ಷ್ಮಿದೇವಿ ಅಗತಗೌಡನಹಳ್ಳಿ ಸೇರಿದಂತೆ ಆಶಾ ಕಾರ್ಯಕರ್ತೆಯರ ಭಾಗವಹಿಸಿದರು.