ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

| Published : May 19 2024, 01:48 AM IST

ಸಾರಾಂಶ

ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ತನಿಖೆ ನಡೆಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಸೇಂಟ್‌ ಬ್ರೋಸೆಫ್‌ ಫೌಂಡೇಶನ್‌ ಆಗ್ರಹಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದ ಖಾಸಗಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ತನಿಖೆ ನಡೆಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಸೇಂಟ್‌ ಬ್ರೋಸೆಫ್‌ ಫೌಂಡೇಶನ್‌ ಆಗ್ರಹಿಸಿದೆ.

ಶನಿವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇಂಟ್‌ ಬ್ರೋಸೆಫ್‌ ಫೌಂಡೇಶನ್‌ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಖಾಸಗಿ ಯೂನಿವರ್ಸಿಟಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ದುಶ್ಯಂತ್‌ ದುಬೆ, ಕಳೆದ ಒಂಬತ್ತು ತಿಂಗಳಲ್ಲಿ ಬಿ.ಟೆಕ್‌ ವಿದ್ಯಾರ್ಥಿ ರಾಹುಲ್‌ ಕರಸಲಾ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಆತ್ಮಹತ್ಯೆಗೆ ಯುನಿವರ್ಸಿಟಿಯಲ್ಲಿ ನಡೆಯುತ್ತಿರುವ ಕಿರುಕುಳ, ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದಂತೆ ನಿರಾಕರಿಸುತ್ತಿರುವುದು ಸೇರಿದಂತೆ ಹಲವು ವಿಚಾರಗಳು ಕಾರಣವಾಗಿವೆ ಎಂದು ಗಂಭೀರವಾಗಿ ಆರೋಪಿಸಿದರು.

ಈ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಆದಿತ್ಯಾ ಪ್ರಭು ಪೋಷಕರು, ಫೌಂಡೇಶನ್‌ ಸದಸ್ಯರಾದ ಅಸ್ನಾನ್‌ ಅಬಿದಿ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇತರರಿದ್ದರು.