ಎಂ.ಪುಟ್ಟಮಾದು ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

| Published : Jul 07 2025, 11:48 PM IST

ಎಂ.ಪುಟ್ಟಮಾದು ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಜು.೪ರಂದು ಪ್ರಾಂತ ಕೃಷಿ ಕೂಲಿಕಾರರ ಸಂಘದವರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವ ವೇಳೆ ಅಹವಾಲು ಸ್ವೀಕರಿಸಲು ಬಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಕುರಿತು ಪುಟ್ಟಮಾದು ಅವರು ನೀವು ಈ ಜಿಲ್ಲೆಗೆ ಬಂದು ಜಿಲ್ಲೆಯನ್ನು ಹಾಳು ಮಾಡಿದ್ದೀರಿ ಎಂದು ಅವಹೇಳನಕಾರಿಯಾಗಿ ಹಾಗೂ ನಿಂದನಾತ್ಮಕವಾಗಿ ಘೋಷಣೆ ಕೂಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾ ಪಂಚಾಯ್ತಿ ಸಿಇಒ ವಿರುದ್ಧ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಎಂ.ಪುಟ್ಟಮಾದು ಅವಹೇಳನಕಾರಿ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಸಿಬ್ಬಂದಿ, ಗುತ್ತಿಗೆ, ಹೊರಗುತ್ತಿಗೆ ನೌಕರರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯ್ತಿ ಆವರಣದ ಎದುರು ಸೇರಿದ ಸಂಘದ ಪದಾಧಿಕಾರಿಗಳು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನಾ ಧರಣಿ ನಡೆಸಿದರು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ ಸಿಇಒ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವ ಎಂ.ಪುಟ್ಟಮಾದು ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದರು.

ಜು.೪ರಂದು ಪ್ರಾಂತ ಕೃಷಿ ಕೂಲಿಕಾರರ ಸಂಘದವರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವ ವೇಳೆ ಅಹವಾಲು ಸ್ವೀಕರಿಸಲು ಬಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಕುರಿತು ಪುಟ್ಟಮಾದು ಅವರು ನೀವು ಈ ಜಿಲ್ಲೆಗೆ ಬಂದು ಜಿಲ್ಲೆಯನ್ನು ಹಾಳು ಮಾಡಿದ್ದೀರಿ ಎಂದು ಅವಹೇಳನಕಾರಿಯಾಗಿ ಹಾಗೂ ನಿಂದನಾತ್ಮಕವಾಗಿ ಘೋಷಣೆ ಕೂಗಿದ್ದಾರೆ. ಈ ಮಾತುಗಳು ಪ್ರಾಮಾಣಿಕ ಅಧಿಕಾರಿಯೊಬ್ಬರ ಮನಸ್ಸಿಗೆ ಘಾಸಿ ಉಂಟುಮಾಡಿದೆ ಎಂದು ಆರೋಪಿಸಿದರು.

ಸಿಇಒ ಕೆ.ಆರ್.ನಂದಿನಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಹಲವಾರು ವರ್ಷಗಳಿಂದ ಬಾಕಿ ಇದ್ದ ಕೂಲಿ ಮತ್ತು ಸಾಮಗ್ರಿ ಮೊತ್ತಗಳನ್ನು ಪಾವತಿಸಲು ಅನುಕೂಲವಾಗುವಂತೆ ಹಲವಾರು ಕ್ರಮಗಳನ್ನು ತೆಗೆದುಕೊಂಡು ರೈತರು ಮತ್ತು ಕೂಲಿ ಕಾರ್ಮಿಕರಿಗೆ ನೆರವಾಗಿದ್ದಾರೆ. ಕ್ರಿಯಾಯೋಜನೆ ಸಿದ್ಧಪಡಿಸುವ ವೇಳೆ ಇದ್ದ ಗೊಂದಲಗಳನ್ನು ಪರಿಹರಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸಲು ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.

ಮನರೇಗಾ ಸೇರಿದಂತೆ ಇತರೆ ಯೋಜನೆಗಳ ಅನುಷ್ಠಾನದಲ್ಲಿ ಗಣನೀಯ ಪ್ರಗತಿ ಸಾಧಿಸಿರುವುದನ್ನು ಗಮನಿಸಿ ಸಿಇಒ ಕೆ.ಆರ್.ನಂದಿನಿ ಅವರಿಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಪ್ರಶಂಸಾಪತ್ರ ನೀಡಿದ್ದಾರೆ. ಇಂತಹ ದಕ್ಷ ಅಧಿಕಾರಿಯನ್ನು ಅವಹೇಳನಕಾರಿಯಾಗಿ ನಿಂದಿಸಿರುವ ಪುಟ್ಟಮಾದು ನಿಷ್ಠಾವಂತ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಧಕ್ಕೆ ಉಂಟುಮಾಡಿದ್ದಾರೆ. ಇದರಿಂದ ಕೆಳವರ್ಗದ ನೌಕರರು ಸಹ ಆತ್ಮಸ್ಥೈರ್ಯ ಕಳೆದುಕೊಂಡು ತಮ್ಮ ಕರ್ತವ್ಯದಲ್ಲಿ ಆಸಕ್ತಿ ಕಳೆದುಕೊಂಡು ಕುಗ್ಗಿ ಹೋಗುವ ಪರಿಸ್ಥಿತಿ ಉಂಟಾಗಿದೆ ಎಂದು ದೂರಿದರು.

ಮಹಿಳಾ ಅಧಿಕಾರಿ ಎಂಬುದನ್ನು ಲೆಕ್ಕಿಸದೆ ಹಗುರವಾಗಿ ಮಾತನಾಡಿ ಅವಮಾನ ಮಾಡಿರುವ ಎಂ.ಪುಟ್ಟಮಾದು ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಸಿಬ್ಬಂದಿ, ಗುತ್ತಿಗೆ, ಹೊರಗುತ್ತಿಗೆ ನೌಕರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಪಂ ಉಪ ಕಾರ್ಯದರ್ಶಿಗಳಾದ ಲಕ್ಷ್ಮೀ, ಧನರಾಜ್, ಪಂಚಾಯತ್‌ರಾಜ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಟಿ.ಎ.ಪ್ರಶಾಂತಬಾಬು, ಸುರೇಶ್, ಸುನೀಲ್‌ಕುಮಾರ್, ಹರೀಶ, ಎಚ್.ಸಿ.ಕುಮಾರ, ಎಚ್.ಎಂ.ಸೋಮಶೇಖರ್, ಬಿ.ದಿನೇಶ್, ಸಿ.ರುದ್ರಯ್ಯ, ಎಚ್.ಆರ್.ರವಿಕುಮಾರ್, ಕೆ.ಆರ್.ಕೃಷ್ಣಪ್ಪಗೌಡ, ಪಿ.ಆರ್.ಹರೀಶ್ ಇತರರಿದ್ದರು.