ಸಾರಾಂಶ
ಕನ್ನಡಪ್ರಭ ವಾರ್ತೆ, ಮೊಳಕಾಲ್ಮುರು
ರಾಜ್ಯ ಸರ್ಕಾರದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬಹು ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಮುಖ್ಯರಸ್ತೆಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಆಡಳಿತ ಸೌಧದ ಆವರಣದಲ್ಲಿ ತಹಸಿಲ್ದಾರ್ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ರಾಜ್ಯ ದಲ್ಲಿ ಗ್ಯಾರಂಟಿ ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಒಂದು ವರ್ಷದ ಅವಧಿ ಪೂರೈಸಿದೆ. ಪರಿಶಿಷ್ಟ ವರ್ಗ ಏಳಿಗೆಗಾಗಿ ಮೀಸಲಿಟ್ಟಿದ್ದ ಸಾವಿರಾರು ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳ ಜಾರಿಗೆ ವಿನಿಯೋಗಿಸಿಕೊಂಡು ಬಲಹೀನ ವರ್ಗದ ಏಳಿಗೆಗೆ ಸರ್ಕಾರ ಮಾರಕವಾಗಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಬೆಳಕಿಗೆ ಬಂದಿದ್ದರೂ ಮುಖ್ಯಮಂತ್ರಿಗಳು ಸಚಿವರ ರಾಜೀನಾಮೆ ಪಡೆಯದೆ ತನಿಖೆಯ ನಾಟಕ ಮಾಡುತ್ತಾ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸುತ್ತಿದೆ. ನಿಗಮದಲ್ಲಿ 187 ಕೋಟಿ ರು.ಗಳ ಹಗರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಅದರಲ್ಲಿ ಸಚಿವ ನಾಗೇಂದ್ರ ಅವರ ಮೌಕಿಕ ಆದೇಶದ ಮೇರೆಗೆ ಹಣವನ್ನು ಹೈದರಾಬಾದಿನ ವಿವಿಧ ಕಂಪನಿಗಳಿಗೆ ವರ್ಗಾಯಿಸಿದ್ದೇವೆ ಎಂದು ನಮೂದಿಸಿದ್ದರೂ ಸರ್ಕಾರ ಸಚಿವರ ಬೆನ್ನಿಗೆ ನಿಂತಿರುವುದು ದುರದೃಷ್ಟಕರ ಎಂದು ಮನವಿಯಲ್ಲಿ ವಿವರಿಸಿದ್ದಾರೆ.ಪರಿಶಿಷ್ಟ ವರ್ಗದ ಜನರಿಗೆ ಗಂಗಾ ಕಲ್ಯಾಣ ಸಾಲ ಸೌಲಭ್ಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಸಮುದಾಯದ ಕಾಲೋನಿಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ದುರುಪಯೋಗ ಮಾಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಇದರಲ್ಲಿ ಇಲಾಖೆ ಮತ್ತು ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿ ತೆಲಂಗಾಣದಲ್ಲಿ ನಡೆದ ಚುನಾವಣೆಗೆ ಬಳಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಹಾಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು.ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯುವ ಮೂಲಕ ಹಗರಣದ ತನಿಕೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ. ಮಂಡಲ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ. ಪ್ರಧಾನ ಕಾರ್ಯದರ್ಶಿ ಪ್ರಭಾಕರ. ಎಸ್ ಸಿ ಮೋರ್ಚಾ ಅಧ್ಯಕ್ಷ ಸಿದ್ದಾರ್ಥ. ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಲಕ್ಷ್ಮಣ.ಸದಸ್ಯ ಮಂಜಣ್ಣ. ಟಿ ರವಿಕುಮಾರ್. ಹಿರಿಯ ಮುಖಂಡರಾದ ಜಿಂಕೆಲು ಬಸವರಾಜ. ಶ್ರೀರಾಮ ರೆಡ್ಡಿ. ಹರೀಶ್ ಕಡೆ ತೋಟ. ಕಿರಣ್ ಗಾಯಕವಾಡ. ಶಿವಕುಮಾರ್. ನಾಗರಾಜ್. ನಿಂಗಣ್ಣ. ದೇವಸಮುದ್ರ ಚಂದ್ರಣ್ಣ. ಸಿದ್ದಯ್ಯನ ಕೋಟೆ ಮರಿಸ್ವಾಮಿ ಇದ್ದರು.