ಕನ್ನಡಪ್ರಭ ವಾರ್ತೆ, ತುಮಕೂರು

ಸುಪ್ರೀಂಕೋರ್ಟಿನ ಆದೇಶದಂತೆ ಹಾಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಕಾಯಂ ಮಾಡಬೇಕು, ನೇರ ಪಾವತಿ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಇನ್ನಿತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್‌ ಎಂ.ಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಮಂಜುಳ ನೇತೃತ್ವದಲ್ಲಿ ನೂರಾರು ಹೊರಗುತ್ತಿಗೆ ನೌಕರರು ಜಿಲ್ಲಾಸ್ಪತ್ರೆಯಿಂದ ಟೌನ್‌ಹಾಲ್, ಅಶೋಕರಸ್ತೆ, ಚರ್ಚ್ ಸರ್ಕಲ್, ಗುಂಚಿ ಸರ್ಕಲ್, ಶ್ರೀರಾಮನಗರ ರಸ್ತೆ, ಡಿ.ಎಚ್.ಒ ಕಚೇರಿ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್‌ ಎಂ.ಗೌಡ, ಅಯುಷ್ಮಾನ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯಲ್ಲಿ ಸುಮಾರು 25 ಸಾವಿರಕ್ಕು ಅಧಿಕ ಹೊರಗುತ್ತಿಗೆ ನೌಕರರು ಕೆಲಸ ಮಾಡುತಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಸರ್ಕಾರ ನಮ್ಮ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಿರುವುದು ಸೇವಾ ಭದ್ರತೆ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ. ಸರ್ಕಾರದ ಕೆಲಸ ಮಾಡುತ್ತಿರುವ ನಮ್ಮ ಸೇವೆಗೆ ಭದ್ರತೆ ನೀಡಬೇಕಾದ್ದು, ಆಳುವ ಸರಕಾರಗಳ ಜವಾಬ್ದಾರಿ. ನಮಗೂ ಸಂಸಾರ, ಹೆಂಡತಿ, ಮಕ್ಕಳು, ಅವರ ಆರೋಗ್ಯ, ವಿದ್ಯಾಭ್ಯಾಸ, ಮನೆ ಖರ್ಚು ವೆಚ್ಚಗಳನ್ನು ನೋಡಿಕೊಳ್ಳಬೇಕಾದ ಗುರುತರ ಜವಾಬ್ದಾರಿ ಇದೆ. ಹಾಗಾಗಿ ನಮ್ಮ ಸೇವೆ ಕಾಯಂಗೊಳಿಸಬೇಕು. ಅಲ್ಲಿಯವರೆಗೆ ನಮ್ಮನ್ನು ನೇರ ಪಾವತಿಗೆ ಒಳಪಡಿಸಬೇಕು. ಹೊರಗುತ್ತಿಗೆ ನೌಕರರ ಬಗ್ಗೆ ಇರುವ ಗೊಂದಲ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುಳ ಮಾತನಾಡಿ, ತುಮಕೂರಿನಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ನಮ್ಮ ಬೇಡಿಕೆ ಈಡೇರಿಕೆಗಾಗಿ ವಿವಿಧ ಹಂತದ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿತ್ತು. ಅದರಂತೆ ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ. ಸರಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಬೆಂಗಳೂರಿನಲ್ಲಿ ಕೈಗೊಳ್ಳಲಾಗುವುದು ಎಂ ಹೇಳಿದರು.


ಪ್ರತಿಭಟನೆಗೆ ಬೆಂಬಲ ವ್ಯಕ್ತ ಪಡಿಸಿ ಮಾಜಿ ಸಚಿವ ಸೊಗಡು ಶಿವಣ್ಣ ಪಾಲ್ಗೊಂಡಿದ್ದರು. ಈ ವೇಳೆ ರಾಜ್ಯ ಸಮಿತಿ ಸದಸ್ಯರಾದ ಸಿದ್ದಪ್ಪ,ರವೀಶ್, ಯೋಗೀಶ್, ತುಮಕೂರು ಜಿಲ್ಲಾಧ್ಯಕ್ಷ ಶಿವರಾಮ್, ಪ್ರಧಾನ ಕಾರ್ಯದರ್ಶಿ ಸತೀಶಕುಮಾರ್ ಸೇರಿದಂತೆ ನೂರಾರು ಹೊರಗುತ್ತಿಗೆ ನೌಕರರು ಪಾಲ್ಗೊಂಡಿದ್ದರು.