ಸಾರಾಂಶ
ರಾಜಧಾನಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲೂ ಇಂಗ್ಲಿಷ್ ನಾಮಫಲಕಗಳ ಹಾವಳಿ ಮಿತಿ ಮೀರಿದೆ. ಈ ಸಂಬಂಧ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಬಳ್ಳಾರಿ: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡರ ಬಂಧನ ಖಂಡಿಸಿ ಹಾಗೂ ಬಳ್ಳಾರಿಯಲ್ಲಿ ಇಂಗ್ಲಿಷ್ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಸೈನ್ಯ ಸಂಘಟನೆಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಹೋಟೆಲ್, ಅಂಗಡಿಗಳು, ವಾಣಿಜ್ಯ ಕೇಂದ್ರಗಳು, ವ್ಯಾಪಾರ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡಕ್ಕೆ ಆದ್ಯತೆ ನೀಡದಿರುವುದನ್ನು ಖಂಡಿಸಿ ಹೋರಾಟ ನಡೆಸಿದ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿರುವುದು ಖಂಡನೀಯ. ಕನ್ನಡಕ್ಕಾಗಿ ಹೋರಾಟ ನಡೆಸುವವರ ವಿರುದ್ಧ ಪೊಲೀಸರು ದೌರ್ಜನ್ಯ ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ. ಎರಿಸ್ವಾಮಿ ಮಾತನಾಡಿ, ರಾಜಧಾನಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲೂ ಇಂಗ್ಲಿಷ್ ನಾಮಫಲಕಗಳ ಹಾವಳಿ ಮಿತಿ ಮೀರಿದೆ. ಈ ಸಂಬಂಧ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರಲ್ಲದೆ, ಕೂಡಲೇ ಜಿಲ್ಲಾಡಳಿತ ಅನ್ಯ ಭಾಷೆಗಳ ನಾಮಫಲಕಗಳ ತೆರವಿಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಪ್ರಮುಖರಾದ ಸಿ.ಡಿ.ಕೆ. ಹೊನ್ನೂರಸ್ವಾಮಿ, ಫಯಾಜ್ ಬಾಷಾ, ನಾಸಿರ್ ಹುಸೇನ್, ಮಹ್ಮದ್ ಅಲಿ, ನಬಿಸಾಬ್, ರಾಮು, ಕಾರ್ತೀಕ್, ಹನುಮಂತಪ್ಪ ಸೇರಿದಂತೆ ಪಕ್ಷದ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯ ರಾಜ್ಯಾಧ್ಯಕ್ಷ ಕೆ. ಎರಿಸ್ವಾಮಿ ಅವರು ಮುಖ್ಯಮಂತ್ರಿಗಳಿಗೆ ಬರೆದ ಮನವಿಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.